
ಹಜಾರಿಬಾಗ್: ಜಾರ್ಖಂಡ್‌ನ ಹಜಾರಿಬಾಗ್ ಜಿಲ್ಲೆಯಲ್ಲಿ ಧಾರ್ಮಿಕ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದ್ದು, ಈ ಪ್ರದೇಶದಲ್ಲಿ ಉದ್ವಿಗ್ನತೆ ಉಂಟಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಿನ್ನೆ ಮಂಗಳವಾರ ರಾತ್ರಿ 11 ಗಂಟೆ ಸುಮಾರಿಗೆ ರಾಮ ನವಮಿ ಆಚರಣೆಯ ಭಾಗವಾಗಿ ಮಂಗಳ ಮೆರವಣಿಗೆ ನಡೆಯುತ್ತಿದ್ದಾಗ ಜಾಮಾ ಮಸೀದಿ ಚೌಕ್ ಬಳಿ ಈ ಘಟನೆ ನಡೆದಿದೆ ಎಂದು ಹಜಾರಿಬಾಗ್ ಉಪವಿಭಾಗೀಯ ಪೊಲೀಸ್ ಅಧಿಕಾರಿ ಪರಮೇಶ್ವರ್ ಕಾಮತಿ ತಿಳಿಸಿದ್ದಾರೆ.
ಎರಡೂ ಕಡೆಯಿಂದ ಕಲ್ಲು ತೂರಾಟ ನಡೆದಿದೆ. ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ ಎಂದು ಮತ್ತೊಬ್ಬ ಅಧಿಕಾರಿ ತಿಳಿಸಿದ್ದಾರೆ.
ಆದಾಗ್ಯೂ, ಪರಿಸ್ಥಿತಿ ನಿಯಂತ್ರಣದಲ್ಲಿದೆ. ಘಟನಾ ಸ್ಥಳದಲ್ಲಿ ಭದ್ರತಾ ನಿಯೋಜನೆಯನ್ನು ಖಚಿತಪಡಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಕಲ್ಲು ತೂರಾಟಕ್ಕೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಘಟನೆಯಲ್ಲಿ ಭಾಗಿಯಾಗಿರುವವರನ್ನು ಗುರುತಿಸಲಾಗುತ್ತಿದ್ದು, ಅವರನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ತಿಳಿಸಿದರು.
ಸ್ಥಳೀಯರ ಪ್ರಕಾರ, ಕೋಮುಭಾವನೆ ಪ್ರಚೋದಿಸುವ ಹಾಡಿನ ಬಗ್ಗೆ ಎರಡು ಗುಂಪುಗಳ ನಡುವೆ ವಿವಾದ ಉಂಟಾಗಿ, ನಂತರ ಪರಿಸ್ಥಿತಿ ಕಲ್ಲು ತೂರಾಟಕ್ಕೆ ಕಾರಣವಾಯಿತು.
Advertisement