
ಮುಂಬೈ: 2029 ರಲ್ಲೂ ಪ್ರಧಾನಿ ನರೇಂದ್ರ ಮೋದಿ ಅವರೇ ಪ್ರಧಾನಿಯಾಗುತ್ತಾರೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸೋಮವಾರ ಹೇಳಿದ್ದಾರೆ. ನಾಗ್ಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಫಡ್ನವೀಸ್, "2029 ರಲ್ಲಿ ನಾವು ಮತ್ತೊಮ್ಮೆ ಮೋದಿಯನ್ನು ಪ್ರಧಾನಿಯಾಗಿ ನೋಡುತ್ತೇವೆ ಎಂದು ಹೇಳಿದರು.
ತಮ್ಮ ನಿವೃತ್ತಿ ಯೋಜನೆಗಳ ಕುರಿತು ಚರ್ಚಿಸಲು ಪ್ರಧಾನಿ ಮೋದಿ ಭಾನುವಾರ ನಾಗ್ಪುರದ ಆರ್‌ಎಸ್‌ಎಸ್ ಪ್ರಧಾನ ಕಚೇರಿಗೆ ಭೇಟಿ ನೀಡಿದ್ದರು ಎಂಬ ಶಿವಸೇನೆ (ಯುಬಿಟಿ) ಸಂಸದ ಸಂಜಯ್ ರಾವತ್ ಅವರ ಹೇಳಿಕೆಗೆ ಫಡ್ನವೀಸ್ ಹೀಗೆ ಪ್ರತಿಕ್ರಿಯಿಸಿದರು.
ಮೋದಿ ಉತ್ತರಾಧಿಕಾರಿ ಮಹಾರಾಷ್ಟ್ರದವರಾಗಿದ್ದು, ಆ ಬಗ್ಗೆ ಆರ್‌ಎಸ್‌ಎಸ್ ನಿರ್ಧರಿಸಲಿದೆ ಎಂದು ರಾವತ್ ಸುದ್ದಿಗಾರರಿಗೆ ತಿಳಿಸಿದರು. ಪ್ರಧಾನಿ ಮೋದಿ ತಮ್ಮ ನಿವೃತ್ತಿ ಯೋಜನೆಗಳ ಬಗ್ಗೆ ಚರ್ಚಿಸಲು ಆರ್‌ಎಸ್‌ಎಸ್ ಪ್ರಧಾನ ಕಚೇರಿಗೆ ಭೇಟಿ ನೀಡಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.
ನಾಯಕ ಸಕ್ರಿಯವಾಗಿರುವಾಗ ಉತ್ತರಾಧಿಕಾರದ ಬಗ್ಗೆ ಚರ್ಚಿಸುವುದು ಭಾರತೀಯ ಸಂಸ್ಕೃತಿಯಲ್ಲಿ ಸೂಕ್ತವಲ್ಲ ಎಂದು ಫಡ್ನವಿಸ್ ಹೇಳಿದ್ದಾರೆ.
ಭಾನುವಾರ ನಾಗ್ಪುರದ ರೇಶಿಂಬಾಗ್‌ನಲ್ಲಿರುವ ಸ್ಮೃತಿ ಮಂದಿರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಆರ್‌ಎಸ್‌ಎಸ್ ಸಂಸ್ಥಾಪಕ ಕೇಶವ್ ಬಲಿರಾಮ್ ಹೆಡ್ಗೆವಾರ್ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದ್ದರು. ಅವರ ಜೊತೆ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಕೇಂದ್ರ ಸಚಿವ ನಿತಿನ್ ಗಡ್ಕರಿ, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತಿತರ ನಾಯಕರು ಉಪಸ್ಥಿತರಿದ್ದರು.
ಪ್ರಧಾನಿಯವರ ಭೇಟಿಯನ್ನು "ಅತ್ಯಂತ ಪ್ರಮುಖ ಮತ್ತು ಐತಿಹಾಸಿಕ" ಎಂದು ಸಂಘದ ಸದಸ್ಯ ಶೇಷಾದ್ರಿ ಚಾರಿ ಬಣ್ಣಿಸಿದ್ದಾರೆ. ಆರ್‌ಎಸ್‌ಎಸ್ ಮತ್ತು ಬಿಜೆಪಿ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಆರ್‌ಎಸ್‌ಎಸ್ ಸದಸ್ಯರು ಹೇಳಿದ್ದಾರೆ.
ಆರ್‌ಎಸ್‌ಎಸ್ ಮತ್ತು ಬಿಜೆಪಿ ನಡುವಿನ ಸಂಬಂಧದ ಬಗ್ಗೆ ಜನರು ಸಾಕಷ್ಟು ಮಾತನಾಡುತ್ತಾರೆ. ಬಿಜೆಪಿ ಮತ್ತು ಆರ್‌ಎಸ್‌ಎಸ್ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಸಂಘ ಮತ್ತು ಬಿಜೆಪಿ ಬಗ್ಗೆ ಏನೂ ತಿಳಿದಿಲ್ಲದ ಜನರು ಬಿಜೆಪಿ ಮತ್ತು ಆರ್‌ಎಸ್‌ಎಸ್ ನಡುವೆ ಭಿನ್ನಾಭಿಪ್ರಾಯವಿದೆ ಎಂದು ಹೇಳುತ್ತಾರೆ. ರಾಜಕೀಯ ಲಾಭಕ್ಕಾಗಿ ಇಂತಹ ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ ಎಂದು ಆರ್‌ಎಸ್‌ಎಸ್ ಸದಸ್ಯ ಶನಿವಾರ ಹೇಳಿದರು.
Advertisement