ಜಮ್ಮು ಮತ್ತು ಕಾಶ್ಮೀರ: ಕಂದಕಕ್ಕೆ ಸೇನಾ ವಾಹನ ಉರುಳಿ ಬಿದ್ದು ಮೂವರು ಸೈನಿಕರು ಸಾವು
ರಾಂಬನ್/ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯಲ್ಲಿ ಭಾನುವಾರ ಸೇನಾ ವಾಹನವೊಂದು 700 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಮೂವರು ಸೇನಾ ಸಿಬ್ಬಂದಿ ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಜಮ್ಮುವಿನಿಂದ ಶ್ರೀನಗರಕ್ಕೆ ತೆರಳುತ್ತಿದ್ದ ಬೆಂಗಾವಲು ಪಡೆಯ ಭಾಗವಾಗಿದ್ದ ಸೇನಾ ಟ್ರಕ್, ಬ್ಯಾಟರಿ ಚಶ್ಮಾ ಬಳಿ ಬೆಳಿಗ್ಗೆ 11.30ರ ಸುಮಾರಿಗೆ ಕಂದಕಕ್ಕೆ ಉರುಳಿ ಬಿದ್ದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೇನೆ, ಪೊಲೀಸರು, ಎಸ್‌ಡಿಆರ್‌ಎಫ್ ಮತ್ತು ಸ್ಥಳೀಯರು ಜಂಟಿ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಿದ್ದು, ವಾಹನದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಸೈನಿಕರು ಸ್ಥಳದಲ್ಲೇ ಮೃತಪಟ್ಟಿರುವುದು ಕಂಡುಬಂದಿದೆ ಎಂದು ಅವರು ಹೇಳಿದರು.
ಮೃತರನ್ನು ಅಮಿತ್ ಕುಮಾರ್, ಸುಜೀತ್ ಕುಮಾರ್ ಮತ್ತು ಮನ್ ಬಹದ್ದೂರ್ ಎಂದು ಗುರುತಿಸಲಾಗಿದ್ದು, ಅವರ ಮೃತದೇಹಗಳನ್ನು ಕಂದಕದಿಂದ ಹೊರತೆಗೆಯಲಾಗುತ್ತಿದೆ. ಅಪಘಾತದಿಂದಾಗಿ ವಾಹನವು ನಜ್ಜುಗುಜ್ಜಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

