
ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವ ಬೆನ್ನಲ್ಲೇ, ಭಾರತವು ಸದ್ಯದ ಪರಿಸ್ಥಿತಿಗೆ ಎಚ್ಚರಿಕೆ ಮತ್ತು ಜವಾಬ್ದಾರಿಯುತವಾಗಿ ಪ್ರತಿಕ್ರಿಯೆ ನೀಡುತ್ತಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಶನಿವಾರ ತಿಳಿಸಿದ್ದಾರೆ.
ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಅವರೊಂದಿಗೆ ಫೋನ್ ಸಂಭಾಷಣೆ ನಡೆಸಿದ ನಂತರ ಜೈಶಂಕರ್ ಈ ವಿಚಾರ ತಿಳಿಸಿದ್ದಾರೆ.
'ಇಂದು ಬೆಳಿಗ್ಗೆ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಅವರೊಂದಿಗೆ ಸಂಭಾಷಣೆ ನಡೆಸಿದೆ. ಭಾರತವು ಸದ್ಯದ ಪರಿಸ್ಥಿತಿಗೆ ಶಾಂತ, ಚಿಂತನಶೀಲ ಮತ್ತು ಜವಾಬ್ದಾರಿಯುತ ರೀತಿಯಲ್ಲಿ ಪ್ರತಿಕ್ರಿಯಿಸುತ್ತಿದೆ. ಹಾಗೆಯೇ ಮುಂದುವರಿಯುತ್ತದೆ' ಎಂದು ಜೈಶಂಕರ್ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ, ಭಾರತ ಮತ್ತು ಪಾಕಿಸ್ತಾನ ಎರಡೂ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಮತ್ತು ಪರಸ್ಪರ ನೇರ ಮಾತುಕತೆಯನ್ನು ಪುನರಾರಂಭಿಸಲು ಮಾರ್ಗಗಳನ್ನು ಕಂಡುಕೊಳ್ಳುವ ಮಹತ್ವವನ್ನು ಒತ್ತಿ ಹೇಳಿದ್ದಾರೆ ಎಂದು ಯುಎಸ್ ಸ್ಟೇಟ್ ಡಿಪಾರ್ಟ್‌ಮೆಂಟ್ ಹೇಳಿದೆ.
ಭಾರತ ಮತ್ತು ಪಾಕಿಸ್ತಾನದ ನಡುವಿನ ರಚನಾತ್ಮಕ ಮಾತುಕತೆಗಳನ್ನು ಸುಗಮಗೊಳಿಸಲು ಅಮೆರಿಕ ಸಹಾಯ ಮಾಡುವುದಾಗಿ ಮಾರ್ಕೊ ರೂಬಿಯೊ ತಿಳಿಸಿದ್ದಾರೆ ಎಂದು ಎಂದು ಸ್ಟೇಟ್ ಡಿಪಾರ್ಟ್‌ಮೆಂಟ್ ವಕ್ತಾರ ಟ್ಯಾಮಿ ಬ್ರೂಸ್ ಹೇಳಿದರು.
Advertisement