
ನವದೆಹಲಿ: ಪಾಕ್ ಆಕ್ರಮಿತ ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗಿದ್ದು, ಅದನ್ನು ಮರಳಿ ಪಡೆಯುತ್ತೇವೆ ಎಂಬುದಾಗಿ 1994 ರಲ್ಲಿ ಅಂಗೀಕರಿಸಲಾದ ನಿರ್ಣಯವನ್ನು ಮತ್ತೆ ಪುನರುಚ್ಚರಿಸಬೇಕಾದ ಸಮಯ ಇದಾಗಿದೆ. ಈ ನಿಟ್ಟಿನಲ್ಲಿ ಸಂಸತ್ ವಿಶೇಷ ಅಧಿವೇಶನ ಕರೆಯಬೇಕು ಎಂದು ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಭಾನುವಾರ ಒತ್ತಾಯಿಸಿದರು.
ಭಾರತ ಮತ್ತು ಪಾಕಿಸ್ತಾನ ನಡುವಿನ ಕದನ ವಿರಾಮ ಒಪ್ಪಂದ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿನ್ ಪೈಲಟ್, 1994ರಲ್ಲಿ ಪಾಕ್ ಆಕ್ರಮಿತ ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗಿದ್ದು, ಇದನ್ನು ಪಾಕಿಸ್ತಾನ ತೊರೆಯುವಂತೆ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯ ಅಂಗೀಕರಿಸಲಾಗಿತ್ತು. ಅದನ್ನು ಈಗ ಪುನರುಚ್ಚರಿಸಬೇಕಾಗಿದೆ ಎಂದರು.
1994ರ ಪೆಭ್ರವರಿ 22 ರಂದು ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗಿದ್ದು, ಅದನ್ನು ಪ್ರತ್ಯೇಕಿಸುವ ಯಾವುದೇ ಪ್ರಯತ್ನಗಳನ್ನು ಸೂಕ್ತ ರೀತಿಯಲ್ಲಿ ಹಿಮ್ಮೆಟ್ಟಿಸಲಾಗುವುದು ಎಂಬುದಾಗಿ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿತ್ತು.
ಹಾಗೆಯೇ ಪಾಕಿಸ್ತಾನ ಆಕ್ರಮಣಕಾರಿಯಾಗಿ ವಶಕ್ಕೆ ಪಡೆದಿರುವ ಜಮ್ಮು ಮತ್ತು ಕಾಶ್ಮೀರದ ಪ್ರದೇಶಗಳನ್ನು ತೊರೆಯಬೇಕು. ದೇಶದ ಆಂತರಿಕ ವಿಚಾರಗಳಲ್ಲಿ ಹಸ್ತಕ್ಷೇಪ ಮಾಡುವ ಯಾವುದೇ ಯತ್ನವನ್ನು ಬಲವಾಗಿ ಎದುರಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿತ್ತು.
ಭಾರತ- ಪಾಕಿಸ್ತಾನ ಕದನ ವಿರಾಮ ಒಪ್ಪಂದವನ್ನು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿರುವುದು ಅಚ್ಚರಿ ಮೂಡಿಸಿದೆ. ಕೇಂದ್ರ ಸರ್ಕಾರ ಅಮೆರಿಕದ ಮಧ್ಯಸ್ಥಿಕೆಯನ್ನು ಒಪ್ಪಿಕೊಂಡಿದೆಯೇ? ಯಾವ ಷರತ್ತು ವಿಧಿಸಲಾಗಿದೆ ಎಂಬುದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ ಎಂದರು.
Advertisement