
ಲಖನೌ: ಆಪರೇಷನ್ ಸಿಂಧೂರ್‌ಗೆ ಸಂಬಂಧಿಸಿದಂತೆ ದೇಶವಿರೋಧಿ ಹೇಳಿಕೆ ಮತ್ತು ಜನರನ್ನು ತಪ್ಪುದಾರಿಗೆಳೆಯುವ ಪೋಸ್ಟ್‌ಗಳನ್ನು ಮಾಡಿದ್ದ 40 ಸಾಮಾಜಿಕ ಮಾಧ್ಯಮ ಖಾತೆಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. 25 ಜನರನ್ನು ಬಂಧಿಸಲಾಗಿದೆ ಎಂದು ಉತ್ತರ ಪ್ರದೇಶ ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನಿರ್ದೇಶನದ ಮೇರೆಗೆ ಪೊಲೀಸ್ ಮಹಾನಿರ್ದೇಶಕ ಪ್ರಶಾಂತ್ ಕುಮಾರ್ ಅವರು ಆನ್‌ಲೈನ್‌ನಲ್ಲಿ ಸುಳ್ಳು ಅಥವಾ ಪ್ರಚೋದನಕಾರಿ ಹೇಳಿಕೆ ಫೋಸ್ಟ್ ಮಾಡುತ್ತಿದ್ದ ವ್ಯಕ್ತಿಗಳನ್ನು ಗುರುತಿಸಿ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.
ಹೆಚ್ಚುವರಿ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಅಮಿತಾಬ್ ಯಶ್ ಅವರ ಮೇಲ್ವಿಚಾರಣೆಯಡಿಯಲ್ಲಿ ವಿಶೇಷ ತಂಡವು ಪೊಲೀಸ್ ಪ್ರಧಾನ ಕಚೇರಿಯ ಸಾಮಾಜಿಕ ಮಾಧ್ಯಮ ಕೇಂದ್ರದಿಂದ ವಿವಿಧ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳ ಮೇಲೆ ದಿನದ 24 ಗಂಟೆಯೂ ನಿಗಾ ವಹಿಸಿದೆ.
ಇಲ್ಲಿಯವರೆಗೂ 40 ಖಾತೆಗಳನ್ನು ಗುರುತಿಸಲಾಗಿದೆ ಮತ್ತು ಆಯಾ ಜಿಲ್ಲೆಗಳಲ್ಲಿ ಅವರ ವಿರುದ್ಧ ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಒಟ್ಟು 25 ವ್ಯಕ್ತಿಗಳನ್ನು ಬಂಧಿಸಲಾಗಿದೆ. ಸೈಬರ್ ಕ್ರೈಂ ಪ್ರಧಾನ ಕಚೇರಿಯ ಮೂಲಕ ಎಲ್ಲಾ 40 ಖಾತೆಗಳನ್ನು ನಿರ್ಬಂಧಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ವದಂತಿಗಳನ್ನು ಹಬ್ಬಿಸುವ, ನಾಗರಿಕರನ್ನು ದಾರಿತಪ್ಪಿಸುವ ಅಥವಾ ಭಾರತೀಯ ಸೇನೆಯ ಪ್ರತಿಷ್ಠೆಗೆ ಕಳಂಕ ತರುವ ಯಾವುದೇ ಪರಿಶೀಲಿಸದ ಮಾಹಿತಿಯನ್ನು ಹಂಚಿಕೊಳ್ಳಬೇಡಿ ಎಂದು ಡಿಜಿಪಿ ಕುಮಾರ್ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.
Advertisement