
ಮಧ್ಯ ಪ್ರದೇಶ: ಆಫರೇಷನ್ ಸಿಂಧೂರ್ ಕಾರ್ಯಾಚರಣೆ ವೇಳೆ ಪಾಕಿಸ್ತಾನಿ ಮಹಿಳೆಯೊಬ್ಬರು ಆ ದೇಶದ ಸೈನಿಕರ ಸುರಕ್ಷತೆಗಾಗಿ ಪ್ರಾರ್ಥಿಸುತ್ತಿರುವ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ಆರೋಪದ ಮೇಲೆ ಮಧ್ಯಪ್ರದೇಶದ ಸೆಹೋರ್‌ನಲ್ಲಿ ಸರ್ಕಾರಿ ಶಾಲೆಯ ಶಿಕ್ಷಕಿಯೊಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.
ಜಿಲ್ಲಾ ಕೇಂದ್ರದಿಂದ 55 ಕಿಲೋಮೀಟರ್ ದೂರದಲ್ಲಿರುವ ಮೆಹತ್ವಾರದ ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿರುವ ಶಹನಾಜ್ ಪರ್ವೀನ್ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಸೆಹೋರ್ ಜಿಲ್ಲಾ ಶಿಕ್ಷಣಾಧಿಕಾರಿ ಸಂಜಯ್ ಸಿಂಗ್ ತೋಮರ್ ತಿಳಿಸಿದ್ದಾರೆ.
ಬಜರಂಗದಳದ ದೂರು ಮತ್ತು ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ ಅವರ ನಿರ್ದೇಶನದ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.
ಶಿಕ್ಷಕಿ ತಮ್ಮ ಫೇಸ್‌ಬುಕ್ ಖಾತೆಯಲ್ಲಿ 'ಅಲ್ಲಾಹು, ಪಾಕಿಸ್ತಾನಿ ಸೈನಿಕರನ್ನು ಸುರಕ್ಷಿತವಾಗಿಡು' ಎಂಬ ಶೀರ್ಷಿಕೆಯೊಂದಿಗೆ ವೀಡಿಯೊವನ್ನು ಹಂಚಿಕೊಂಡಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಸಾಮಾಜಿಕ ಮಾಧ್ಯಮದಲ್ಲಿ ಅಂತಹ ವಿಚಾರಗಳನ್ನು ಪೋಸ್ಟ್ ಮಾಡುವುದು ಮತ್ತು ಹಂಚಿಕೊಳ್ಳುವುದನ್ನು ನಿಷೇಧಿಸುವ ಸರ್ಕಾರದ ನಿರ್ದೇಶನದಡಿ ಪರ್ವೀನ್ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಅವರು ಹೇಳಿದರು.
Advertisement