
ನವದೆಹಲಿ: 2,200 ಕೋಟಿ ರೂಪಾಯಿ ಮೌಲ್ಯದ ಕಿರು ಜಲವಿದ್ಯುತ್ ಯೋಜನೆ ಮಂಜೂರು ಮಾಡುವಲ್ಲಿ ನಡೆದ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಮತ್ತು ಇತರ ಐವರ ವಿರುದ್ಧ ಸಿಬಿಐ ಚಾರ್ಜ್ ಶೀಟ್ ಸಲ್ಲಿಸಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
ಮೂರು ವರ್ಷಗಳ ತನಿಖೆಯ ನಂತರ ಸಿಬಿಐ, ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದ ಚಾರ್ಜ್ ಶೀಟ್ ನಲ್ಲಿ ಮಲಿಕ್ ಮತ್ತು ಇತರ ಐವರನ್ನು ಆರೋಪಿಗಳೆಂದು ಹೆಸರಿಸಿದೆ.
ಗುರುವಾರ 'ಎಕ್ಸ್' ನಲ್ಲಿ ಪೋಸ್ಟ್ ಮಾಡಿದ ಸಂದೇಶದಲ್ಲಿ, ಮಲಿಕ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಮತ್ತು ಯಾರೊಂದಿಗೂ ಮಾತನಾಡುವ ಸ್ಥಿತಿಯಲ್ಲಿಲ್ಲ ಎಂದು ತಿಳಿಸಲಾಗಿದೆ.
ಮಾಜಿ ರಾಜ್ಯಪಾಲರಿಗೆ ಅನೇಕ ಹಿತೈಷಿಗಳಿಂದ ಕರೆಗಳು ಬರುತ್ತಿವೆ. ಆದರೆ ಅದನ್ನು ಸ್ವೀಕರಿಸಿ ಮಾತನಾಡಲು ಸಾಧ್ಯವಾಗುತ್ತಿಲ್ಲ ಎಂದು ಅವರು ಹೇಳಿದ್ದಾರೆ.
ಕಳೆದ ವರ್ಷ ಫೆಬ್ರವರಿಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮಲಿಕ್ ಅವರ ನಿವಾಸ ಹಾಗೂ ಇತರ 29 ಸ್ಥಳಗಳಲ್ಲಿ ದಾಳಿ ನಡೆಸಿ, ಶೋಧ ನಡೆಸಿತ್ತು.
ಈ ಪ್ರಕರಣವು 2,200 ಕೋಟಿ ರೂಪಾಯಿ ಮೌಲ್ಯದ ಕಿರು ಹೈಡ್ರೋ ಎಲೆಕ್ಟ್ರಿಕ್ ಪವರ್ ಪ್ರಾಜೆಕ್ಟ್ (ಎಚ್‌ಇಪಿ) ಅನ್ನು ಸಿವಿಲ್ ಗುತ್ತಿಗೆ ನೀಡುವಲ್ಲಿ ನಡೆದ ಭ್ರಷ್ಟಾಚಾರಕ್ಕೆ ಸಂಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆಗಸ್ಟ್ 23, 2018 ರಿಂದ ಅಕ್ಟೋಬರ್ 30, 2019 ರವರೆಗೆ ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲರಾಗಿದ್ದ ಮಲಿಕ್, ಯೋಜನೆಗೆ ಸಂಬಂಧಿಸಿದ ಒಂದು ಫೈಲ್ ಸೇರಿದಂತೆ ಎರಡು ಫೈಲ್‌ಗಳಿಗೆ ಸಹಿ ಹಾಕಲು ತಮಗೆ 300 ಕೋಟಿ ರೂ. ಲಂಚದ ಆಫರ್ ನೀಡಲಾಗಿತ್ತು ಎಂದು ಹೇಳಿಕೊಂಡಿದ್ದರು.
ಮಲಿಕ್ ಅವರು, ತಾವು ದೂರು ನೀಡಿದ ಜನರ ಬಗ್ಗೆ ಮತ್ತು ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವವರ ಬಗ್ಗೆ ತನಿಖೆ ಮಾಡುವ ಬದಲು ನನ್ನ ನಿವಾಸದ ಮೇಲೆ ಸಿಬಿಐ ದಾಳಿ ನಡೆಸಿದೆ ಎಂದು ಹೇಳಿದ್ದರು.
Advertisement