

ಗುವಾಹಟಿ: ಅಸ್ಸಾಂ ರಾಜಧಾನಿಯಲ್ಲಿ ಎರಡು ಬಾರಿ ಮಾದಕ ವಸ್ತು ವಶಪಡಿಸಿಕೊಳ್ಳಲಾಗಿದ್ದು, ಸುಮಾರು 1.3 ಕೋಟಿ ರೂಪಾಯಿ ಮೌಲ್ಯದ ಹೆರಾಯಿನ್ ಜಪ್ತಿ ಮಾಡಲಾಗಿದೆ ಮತ್ತು ಇಬ್ಬರು ಮಹಿಳೆಯರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಇಂದು ಬೆಳಗ್ಗೆ ಬಸಿಷ್ಠ ಪೊಲೀಸ್ ಠಾಣಾ ವ್ಯಾಪ್ತಿಯ ಖಾನಪಾರದಲ್ಲಿ ದಾಳಿ ನಡೆಸಿ, ಒಬ್ಬ ಮಹಿಳೆಯನ್ನು ಬಂಧಿಸಲಾಗಿದೆ ಎಂದು ಗುವಾಹಟಿ ಪೊಲೀಸರು X ನಲ್ಲಿ ಪೋಸ್ಟ್ ಮಾಡಿದ್ದಾರೆ.
ಬಂಧಿತ 47 ವರ್ಷದ ಮಹಿಳೆ ಮಣಿಪುರದ ಚುರಚಂದ್‌ಪುರ ಮೂಲದವರು ಎಂದು ಪೊಲೀಸರು ತಿಳಿಸಿದ್ದಾರೆ.
"138 ಗ್ರಾಂ ತೂಕದ ಹೆರಾಯಿನ್ ಹೊಂದಿರುವ 12 ಸೋಪ್ ಬಾಕ್ಸ್‌ಗಳು ಮತ್ತು ಒಂದು ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದ್ದು, ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗಿದೆ" ಎಂದು ಪೊಲೀಸರು ಹೇಳಿದ್ದಾರೆ.
ಗುಪ್ತಚರ ಮಾಹಿತಿಯ ಆಧಾರದ ಮೇಲೆ ಅದೇ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮತ್ತೊಂದು ಕಾರ್ಯಾಚರಣೆಯಲ್ಲಿ, ಖಾನಪಾರ ಪ್ರದೇಶದ ಬಾಡಿಗೆ ಮನೆಯ ಮೇಲೆ ದಾಳಿ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಲ್ಲಿ ಒಬ್ಬ ಮಹಿಳೆಯನ್ನು ಬಂಧಿಸಲಾಗಿದ್ದು, ಪೊಲೀಸರು 22 ಗ್ರಾಂ ಹೆರಾಯಿನ್ ಹೊಂದಿರುವ ಎರಡು ತಂಬಾಕು ಬಾಕ್ಸ್‌ಗಳು, ಮೂರು ಕದ್ದ ಮೊಬೈಲ್ ಫೋನ್‌ಗಳು ಮತ್ತು 13,000 ರೂ. ನಗದು ವಶಪಡಿಸಿಕೊಂಡಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ (ಎನ್‌ಸಿಬಿ) ಮಾನದಂಡಗಳ ಪ್ರಕಾರ, ವಶಪಡಿಸಿಕೊಂಡ ಮಾದಕ ವಸ್ತುಗಳ ಒಟ್ಟು ಮೌಲ್ಯ ಸುಮಾರು 1.28 ಕೋಟಿ ರೂ.ಗಳಾಗಿರುತ್ತದೆ ಎಂದು ಅವರು ಹೇಳಿದ್ದಾರೆ.
Advertisement