

ಪಾಟ್ನಾ: ಬಿಹಾರ ರಾಜಧಾನಿ ಪಾಟ್ನಾದಲ್ಲಿ ಬುಧವಾರ ನಡೆದ ಜೆಡಿಯು ಶಾಸಕಾಂಗ ಪಕ್ಷದ ಸಭೆಯಲ್ಲಿ ಹೊಸದಾಗಿ ಆಯ್ಕೆಯಾದ ಶಾಸಕರು, ಜೆಡಿ(ಯು)ಮುಖ್ಯಸ್ಥ ನಿತೀಶ್ ಕುಮಾರ್ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಿದರು.
ಎನ್‌ಡಿಎ ಸಭೆಗೂ ಮುಂಚಿತವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ರಾಜ್ಯ ಸಚಿವ ಶ್ರಾವಣ್ ಕುಮಾರ್ ಅವರು ಹೇಳಿದ್ದಾರೆ. ನಂತರ ನಿತೀಶ್ ಕುಮಾರ್ ಅವರನ್ನು ಎನ್ ಡಿಎ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆ ಮಾಡುವ ನಿರೀಕ್ಷೆಯಿದೆ.
ಇತ್ತೀಚೆಗೆ ಮುಕ್ತಾಯಗೊಂಡ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಭರ್ಜರಿ ಗೆಲುವು ಸಾಧಿಸಿದ್ದು, ಗುರುವಾರ ಪಾಟ್ನಾದ ಐತಿಹಾಸಿಕ ಗಾಂಧಿ ಮೈದಾನದಲ್ಲಿ ನಿತೀಶ್ ಕುಮಾರ್ ಅವರು ದಾಖಲೆಯ 10ನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
243 ಸದಸ್ಯರ ವಿಧಾನಸಭೆಯಲ್ಲಿ ಎನ್‌ಡಿಎ 202 ಸ್ಥಾನಗಳನ್ನು ಗೆದ್ದುಕೊಂಡಿದ್ದು, ಬಿಜೆಪಿ 89, ಜೆಡಿ(ಯು) 85, ಎಲ್‌ಜೆಪಿ(ಆರ್‌ವಿ) 19, ಎಚ್‌ಎಎಂ 5 ಮತ್ತು ಆರ್‌ಎಲ್‌ಎಂ 4 ಸ್ಥಾನಗಳನ್ನು ಗೆದ್ದುಕೊಂಡಿದೆ.
ಬಿಹಾರದ ಹೊಸ ಸಚಿವ ಸಂಪುಟದಲ್ಲಿ ಪ್ರಮುಖ ಖಾತೆಗಳನ್ನು ಪಡೆಯಲು ಎನ್‌ಡಿಎ ಮಿತ್ರಪಕ್ಷಗಳು ಕಳೆದ ಕೆಲವು ದಿನಗಳಿಂದ ಕಠಿಣ ಚೌಕಾಶಿಯಲ್ಲಿ ತೊಡಗಿವೆ ಎಂದು ಟಿಎನ್‌ಐಇ ವರದಿ ಮಾಡಿದೆ.
ಸ್ಪೀಕರ್ ಹುದ್ದೆ ಬಿಜೆಪಿ ಬಳಿಯೇ ಉಳಿಯುವ ನಿರೀಕ್ಷೆಯಿದೆ. ಆದರೆ ನಿತೀಶ್ ಕುಮಾರ್ ಅವರು ಗೃಹ ಖಾತೆಯನ್ನು ಉಳಿಸಿಕೊಳ್ಳುವ ಸಾಧ್ಯತೆಯಿದೆ.
ಸ್ಪೀಕರ್ ಸ್ಥಾನಕ್ಕೆ ಇಬ್ಬರು ಪ್ರಮುಖ ಬಿಜೆಪಿ ನಾಯಕರ ಹೆಸರುಗಳನ್ನು ಈಗಾಗಲೇ ಪರಿಗಣಿಸಲಾಗಿದ್ದು, ಅವರಲ್ಲಿ ಒಬ್ಬರನ್ನು ಇಂದು ಪಾಟ್ನಾದಲ್ಲಿ ನಡೆಯಲಿರುವ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಅಂತಿಮಗೊಳಿಸಲಾಗುವುದು ಎಂದು ಮೂಲಗಳು ತಿಳಿಸಿವೆ.
ಡಿಸಿಎಂ ಆಗಿ ಸಾಮ್ರಾಟ್ ಚೌಧರಿ, ವಿಜಯ್ ಕುಮಾರ್ ಸಿನ್ಹಾ ನೇಮಕ
ಬಿಜೆಪಿ ತನ್ನ ಶಾಸಕಾಂಗ ಪಕ್ಷದ ನಾಯಕರಾಗಿ ಸಾಮ್ರಾಟ್ ಚೌಧರಿ ಮತ್ತು ವಿಜಯ್ ಕುಮಾರ್ ಸಿನ್ಹಾ ಅವರನ್ನು ಆಯ್ಕೆ ಮಾಡಿದ್ದು, ಈ ಇಬ್ಬರು ನಿತೀಶ್ ಕುಮಾರ್ ನೇತೃತ್ವದ ನೂತನ ಎನ್ ಡಿಎ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಗಳಾಗಿ ನಾಳೆ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ.
Advertisement