

ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಭರ್ಜರಿ ಗೆಲುವಿನ ನಂತರ, ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಅವರು ಗುರುವಾರ ದಾಖಲೆಯ 10ನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.
ಇಂದು ಬೆಳಗ್ಗೆ 11.30ಕ್ಕೆ ಪಾಟ್ನಾದ ಗಾಂಧಿ ಮೈದಾನದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಎನ್‌ಡಿಎ ಬಲಪ್ರದರ್ಶನದ ನಡುವೆ ನಿತೀಶ್ ಕುಮಾರ್ ಅವರು ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.
ಬಿಹಾರ ರಾಜ್ಯಪಾಲ ಆರಿಫ್ ಮೊಹ್ಮದ್ ಖಾನ್ ಅವರು ನಿತೀಶ್ ಕುಮಾರ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ನಂತರ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾದ ಸಾಮ್ರಾಟ್ ಚೌಧರಿ ಮತ್ತು ವಿಜಯ್ ಕುಮಾರ್ ಸಿನ್ಹಾ ಅವರು ಉಪ ಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದರು.
ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಇತರ ಹಲವಾರು ಕೇಂದ್ರ ಸಚಿವರು ಮತ್ತು 11 ಎನ್‌ಡಿಎ-ಬಿಜೆಪಿ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಿದ್ದರು.
243 ಸದಸ್ಯರ ವಿಧಾನಸಭೆಯಲ್ಲಿ ಎನ್‌ಡಿಎ 202 ಸ್ಥಾನಗಳನ್ನು ಗೆದ್ದುಕೊಂಡಿದ್ದು, ಬಿಜೆಪಿ 89, ಜೆಡಿ(ಯು) 85, ಎಲ್‌ಜೆಪಿ(ಆರ್‌ವಿ) 19, ಎಚ್‌ಎಎಂ 5 ಮತ್ತು ಆರ್‌ಎಲ್‌ಎಂ 4 ಸ್ಥಾನಗಳನ್ನು ಗೆದ್ದುಕೊಂಡಿದೆ.
Advertisement