
ತಿರುವಣ್ಣಾಮಲೈ: ಆಂಧ್ರಪ್ರದೇಶ ಮೂಲದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ತಿರುವಣ್ಣಾಮಲೈ ಪೂರ್ವ ಪೊಲೀಸ್ ಠಾಣೆಯ ಇಬ್ಬರು ಪೊಲೀಸರನ್ನು ಬಂಧಿಸಿ ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಮಂಗಳವಾರ ತಿರುವಣ್ಣಾಮಲೈ ಬೈಪಾಸ್ ಬಳಿ ಈ ಘಟನೆ ನಡೆದಿದ್ದು, ತನ್ನ ತಾಯಿಯೊಂದಿಗೆ ತಿರುವಣ್ಣಾಮಲೈಗೆ ಬಂದಿದ್ದ ಮಹಿಳೆಯ ಮೇಲೆ ಕರ್ತವ್ಯದಲ್ಲಿದ್ದ ಇಬ್ಬರು ಪೊಲೀಸ್ ಪೇದೆಗಳು ಅತ್ಯಾಚಾರವೆಸಗಿದ್ದಾರೆ ಎಂದು ತಿರುವಣ್ಣಾಮಲೈ ಮಹಿಳಾ ಪೊಲೀಸ್ ಠಾಣೆಯ ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಪ್ರಥಮ ಮಾಹಿತಿ ವರದಿಯನ್ನು ಸಿದ್ಧಪಡಿಸಲಾಗಿದೆ. ಇಬ್ಬರು ಪೊಲೀಸರನ್ನು ಬಂಧಿಸಿ ಕಸ್ಟಡಿಗೆ ನೀಡಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಮಹಿಳೆ ಮತ್ತು ಆಕೆಯ ತಾಯಿ ಸೋಮವಾರ ಸಂಜೆ ಅರುಲ್ಮಿಗು ಅರುಣಾಚಲೇಶ್ವರ ದೇವಸ್ಥಾನಕ್ಕೆ ಪ್ರಾರ್ಥನೆ ಸಲ್ಲಿಸಲು ಮಿನಿ ಟ್ರಕ್ ವೊಂದರಲ್ಲಿ ತೆರಳುತ್ತಿದ್ದಾಗ ತಿರುವಣ್ಣಾಮಲೈ ಬೈಪಾಸ್ ರಸ್ತೆಯಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ಇಬ್ಬರು ಪೊಲೀಸರು ಸಂತ್ರಸ್ತೆ ಮತ್ತು ಆಕೆಯ ತಾಯಿಯನ್ನು ಕೆಳಗೆ ಇಳಿಯುವಂತೆ ಹೇಳಿದ್ದಾರೆ. ನಂತರ ಅವರು ಸಂತ್ರಸ್ತೆಯನ್ನು ಏಕಾಂತ ಸ್ಥಳಕ್ಕೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಂತ್ರಸ್ತೆಯ ತಾಯಿ ಮಂಗಳವಾರ ಸ್ಥಳೀಯರ ಬೆಂಬಲದೊಂದಿಗೆ ತನ್ನ ಮಗಳನ್ನು ಜಿಲ್ಲಾ ಸರ್ಕಾರಿ ಜನರಲ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸೂಕ್ಷ್ಮತೆಯ ಸಮಸ್ಯೆಯಿಂದಾಗಿ ಇಬ್ಬರು ಪೊಲೀಸರ ವಿರುದ್ಧ ದಾಖಲಾಗಿರುವ ಸೆಕ್ಷನ್‌ಗಳು ಸೇರಿದಂತೆ ಹೆಚ್ಚಿನ ವಿವರಗಳನ್ನು ಹಂಚಿಕೊಳ್ಳಲು ಸಾಧ್ಯವಿಲ್ಲ. ಸಂತ್ರಸ್ತೆ ಮತ್ತು ಆಕೆಯ ತಾಯಿ ಆಂಧ್ರಪ್ರದೇಶದವರು ಎಂದು ಅಧಿಕಾರಿ ತಿಳಿಸಿದ್ದಾರೆ.
Advertisement