
ಪಾಟ್ನಾ: ಚುನಾವಣಾ ಚಾಣಕ್ಯ ಎಂದೇ ಖ್ಯಾತರಾದ ಜನ ಸುರಾಜ್ ಪಕ್ಷದ ಸಂಸ್ಥಾಪಕ ಪ್ರಶಾಂತ್ ಕಿಶೋರ್, ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಮಾತನಾಡಿರುವ ಪ್ರಶಾಂತ್ ಕಿಶೋರ್ ಚುನಾವಣೆಯಲ್ಲಿ ನಾನು ಸ್ಪರ್ಧಿಸುತ್ತಿಲ್ಲ, ಇದು ಪಕ್ಷದ ನಿರ್ಧಾರ ಎಂದು ಹೇಳಿದ್ದಾರೆ. ಅಲ್ಲದೆ ಪಕ್ಷದ ಬೃಹತ್ ಹಿತಾಸಕ್ತಿಗಾಗಿ ನಾನು ನನ್ನ ಸಂಘಟನಾ ಕಾರ್ಯವನ್ನು ಮುಂದುವರಿಸುತ್ತೇನೆ ಎಂದು ವಿವರಿಸಿದ್ದಾರೆ.
ಬದಲಾಗಿ, ಪಕ್ಷದ ಸಂಘಟನಾತ್ಮಕ ಕಾರ್ಯಗಳಲ್ಲಿಯೇ ತಮ್ಮನ್ನು ತೊಡಗಿಸಿಕೊಳ್ಳುವುದಾಗಿ ಅವರು ತಿಳಿಸಿದ್ದಾರೆ. ಬಿಹಾರ ವಿಧಾನಸಭೆಗೆ ನವೆಂಬರ್ 6 ಮತ್ತು 11 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಆರ್‌ಜೆಡಿ ಮುಖ್ಯಸ್ಥ, ವಿಪಕ್ಷಗಳ ಮುಖ್ಯಮಂತ್ರಿ ಅಭ್ಯರ್ಥಿ ತೇಜಸ್ವಿ ಯಾದವ್ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗಿತ್ತು.
243 ಸದಸ್ಯ ಬಲದ ವಿಧಾನಸಭೆಗೆ ನಡೆಯಲಿರುವ ಚುನಾವಣೆಯಲ್ಲಿ ಗೆಲುವಿನ ಗುರಿಯ ಬಗ್ಗೆ ಮಾತನಾಡಿದ ಅವರು, 150ಕ್ಕಿಂತ ಕಡಿಮೆ ಸ್ಥಾನಗಳನ್ನು ಗೆದ್ದರೆ ಅದು ತಮಗೆ ವೈಯಕ್ತಿಕ ಸೋಲು ಎಂದು ಅಭಿಪ್ರಾಯಪಟ್ಟಿದ್ದಾರೆ.
ಜನ ಸುರಾಜ್ ಪಕ್ಷವು 150ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆದರೆ, ಅದು ಬಿಹಾರದ ಜನರ ನಿಜವಾದ ಗೆಲುವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ, ರಾಜ್ಯದ 100 ಅತ್ಯಂತ ಭ್ರಷ್ಟ ನಾಯಕರನ್ನು ಗುರುತಿಸಿ, ಅವರನ್ನು ವಿಚಾರಣೆಗೆ ಒಳಪಡಿಸಿ ಶಿಕ್ಷೆ ನೀಡಲು ಹೊಸ ಕಾನೂನನ್ನು ಜಾರಿಗೆ ತರಲಾಗುವುದು ಎಂದು ಪ್ರಶಾಂತ್ ಕಿಶೋರ್ ಇದೇ ಸಂದರ್ಭದಲ್ಲಿ ಭರವಸೆ ನೀಡಿದ್ದಾರೆ.
Advertisement