
ಕೋಲ್ಕತಾ: ಪಶ್ಚಿಮ ಬಂಗಾಳ ರಾಜಧಾನಿ ಕೋಲ್ಕತಾದಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದ್ದು, ಎಂಜಿನಿಯರಿಂಗ್ ವಿದ್ಯಾರ್ಥಿನಿಯ ಅತ್ಯಾಚರಿಸಿದ ಆರೋಪದ ಮೇರೆಗೆ ಆಕೆಯ ಸಹಪಾಠಿಯನ್ನು ಬಂಧಿಸಲಾಗಿದೆ.
ಪಶ್ಚಿಮ ಬಂಗಾಳದ ದುರ್ಗಾಪುರ ಅತ್ಯಾಚಾರ ಪ್ರಕರಣ ಹಸಿರಾಗುರುವಂತೆಯೇ ಇದೀಗ ಕೋಲ್ಕತಾದಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದೆ.
ಕೋಲ್ಕತ್ತಾದ ಖಾಸಗಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿಯಲ್ಲಿ ಓದುತ್ತಿರುವ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಸಂತ್ರಸ್ತೆಯ ಸಹಪಾಠಿಯನ್ನು ಆನಂದಪುರ ಎಂಬಲ್ಲಿ ಪೊಲೀಸರು ಬಂಧಿಸಿದ್ದಾರೆ.
ಪೊಲೀಸ್ ಮೂಲಗಳ ಪ್ರಕಾರ, 'ಆನಂದಪುರ ಪ್ರದೇಶದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದೇನೆ. ಸಹಪಾಠಿಯೊಬ್ಬ ಮದ್ಯದಲ್ಲಿ ಮಾದಕ ದ್ರವ್ಯ ಬೆರೆಸಿ ಕುಡಿಸಿದ. ಇದಾದ ಕೆಲವೇ ಕ್ಷಣಗಳಲ್ಲಿ ನಾನು ಪ್ರಜ್ಞೆ ಕಳೆದುಕೊಂಡೆ. ಆ ನಂತರ ಅತ್ಯಾಚಾರ ಎಸಗಿದ್ದಾನೆ' ಎಂದು ಯುವತಿ ದೂರಿನಲ್ಲಿ ಹೇಳಿದ್ದಾರೆ ಎನ್ನಲಾಗಿದೆ.
ಸಂತ್ರಸ್ಥ ಯುವತಿ ಉನ್ನತ ಶಿಕ್ಷಣಕ್ಕಾಗಿ ಪಶ್ಚಿಮ ಬಂಗಾಳಕ್ಕೆ ಬಂದಿದ್ದರು. ಅವರು ಯಾವ ರಾಜ್ಯಕ್ಕೆ ಸೇರಿದವರು ಎಂಬುದನ್ನು ಬಹಿರಂಗಪಡಿಸಿಲ್ಲ. ಕೃತ್ಯದ ನಂತರ ಆರೋಪಿಯು ತಲೆಮರೆಸಿಕೊಂಡಿದ್ದ. ಆನಂದಪುರದಲ್ಲಿರುವ ತನ್ನ ಮನೆಗೆ ಬರುವ ಖಚಿತ ಮಾಹಿತಿ ಆಧರಿಸಿ ಬಂಧಿಸಲಾಗಿದೆ.
ನಂತರ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು. ಈತನನ್ನು ಅ. 22ರವರೆಗೆ ಪೊಲೀಸ್ ವಶಕ್ಕೆ ನ್ಯಾಯಾಲಯ ನೀಡಿದೆ' ಎಂದು ಆನಂದಪುರ ಠಾಣೆ ಪೊಲೀಸರು ಹೇಳಿದ್ದಾರೆ.
ಅಲ್ಲದೆ ತನಿಖೆ ಆರಂಭಿಸಲಾಗಿದೆ. ಶೀಘ್ರದಲ್ಲಿ ಅದರ ವರದಿಯನ್ನು ನೀಡಲಾಗುವುದು. ಆರೋಪಿಯನ್ನು ನಗರ ನ್ಯಾಯಾಲಯದ ಮುಂದೆ ಹಾಜರುಪಡಿಸಿದಾಗ ಅಕ್ಟೋಬರ್ 22 ರವರೆಗೆ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ದುರ್ಗಾಪುರ ಪ್ರಕರಣ
ಪಶ್ಚಿಮ ಬಂಗಾಳದ ದುರ್ಗಾಪುರದಲ್ಲಿ ಕ್ಯಾಂಪಸ್‌ನಿಂದ ಹೊರಗೆ ಹೋದಾಗ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಲಾಗಿತ್ತು. ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಕ್ಯಾಂಪಸ್ ಹೊರಗೆ ಹೋದಾಗ ಸಾಮೂಹಿಕ ಅತ್ಯಾಚಾರ ನಡೆದಿತ್ತು.
Advertisement