
ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಂತೆಯೇ 'ಇಂಡಿಯಾ' ಬಣದಲ್ಲಿ ಭಿನ್ನಮತ ತಲೆದೋರಿದೆ.
ಸೀಟು ಹಂಚಿಕೆಯಿಂದ ಅಸಮಾಧಾನಗೊಂಡಿರುವ 'ಮಹಾಘಟಬಂಧನ್' ನ ಜಾರ್ಖಂಡ್ ಮುಕ್ತಿ ಮೋರ್ಚಾ (JMM) ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಶನಿವಾರ ಘೋಷಿಸಿದೆ. ಆರು ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ ತಿಳಿಸಿದೆ.
243 ಸದಸ್ಯ ಬಲದ ಬಿಹಾರ ವಿಧಾನಸಭೆಗೆ ನವೆಂಬರ್ 6 ಮತ್ತು 11 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ನವೆಂಬರ್ 14 ರಂದು ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ.
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಸ್ವತಂತ್ರವಾಗಿ ಸ್ಪರ್ಧಿಸಲಿದೆ. ಚಕೈ, ಧಮ್‌ದಾಹಾ, ಕಟೋರಿಯಾ (ST) ಮಣಿಹಾರಿ (ST) ಜಮುಯಿ ಮತ್ತು ಪಿರ್‌ಪೈಂಟಿ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ ಎಂದು ಜೆಎಂಎಂ ಪ್ರಧಾನ ಕಾರ್ಯದರ್ಶಿ ಮತ್ತು ವಕ್ತಾರ ಸುಪ್ರಿಯೊ ಭಟ್ಟಾಚಾರ್ಯ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಈ ಕ್ಷೇತ್ರಗಳಿಗೆ ನವೆಂಬರ್ 11 ರಂದು ಎರಡನೇ ಹಂತದಲ್ಲಿ ಮತದಾನ ನಡೆಯಲಿದೆ.
Advertisement