ಅಧಿಕಾರಿಗಳು ಪತ್ರಿಕೆ ಓದಿಲ್ಲವೇ? ದೇಶವನ್ನು ಕೆಟ್ಟದಾಗಿ ತೋರಿಸಲಾಗುತ್ತಿದೆ; ಬೀದಿ ನಾಯಿಗಳ ಬಗ್ಗೆ ವರದಿ ಸಲ್ಲಿಸದ ರಾಜ್ಯಗಳಿಗೆ 'ಸುಪ್ರೀಂ' ಛೀಮಾರಿ

ನವೆಂಬರ್ 3 ರಂದು ಎಲ್ಲಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು ನ್ಯಾಯಾಲಯದಲ್ಲಿ ಹಾಜರಿರಬೇಕು. ಈ ಬಗ್ಗೆ ವಿಚಾರಣೆ ನಡೆಸುತ್ತೇವೆ ಎಂದು ನ್ಯಾಯಾಲಯ ಹೇಳಿದೆ.
Representational image
ಸಾಂದರ್ಭಿಕ ಚಿತ್ರ
Updated on

ನವದೆಹಲಿ: ಬೀದಿ ನಾಯಿಗಳ ಸಮಸ್ಯೆಗೆ ಸಂಬಂಧಿಸಿದ ಪ್ರಕರಣದಲ್ಲಿ ಪ್ರತಿಕ್ರಿಯೆ ದಾಖಲಿಸದ ರಾಜ್ಯಗಳನ್ನು ಸುಪ್ರೀಂಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಅಫಿಡವಿಟ್‌ಗಳನ್ನು ಸಲ್ಲಿಸಲು ವಿಫಲವಾದ ಕಾರಣ ಪಶ್ಚಿಮ ಬಂಗಾಳ, ದೆಹಲಿ ಮತ್ತು ತೆಲಂಗಾಣ ಹೊರತುಪಡಿಸಿ ಎಲ್ಲಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು ತಮ್ಮ ಮುಂದೆ ಹಾಜರಿರುವಂತೆ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿದೆ.

ನ್ಯಾಯಮೂರ್ತಿ ವಿಕ್ರಮ್ ನಾಥ್, ಸಂದೀಪ್ ಮೆಹ್ತಾ ಮತ್ತು ಎನ್.ವಿ. ಅಂಜಾರಿಯಾ ಅವರಿದ್ದ ತ್ರಿಸದಸ್ಯ ಪೀಠ ಈ ಆದೇಶ ನೀಡಿದೆ. ಮುಂದಿನ ವಿಚಾರಣೆಯ ದಿನಾಂಕದಂದು ಅಧಿಕಾರಿಗಳು ಗೈರಾದರೆ ದಂಡ ವಿಧಿಸಲಾಗುವುದು ಅಥವಾ ಬಲವಂತದ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಪೀಠ ಎಚ್ಚರಿಕೆ ನೀಡಿದೆ.

ಅಧಿಕಾರಿಗಳು ಪತ್ರಿಕೆ ಓದಿಲ್ಲವೇ ಅಥವಾ ಸಾಮಾಜಿಕ ಮಾಧ್ಯಮಗಳನ್ನು ನೋಡಿಲ್ಲವೇ? ನವೆಂಬರ್ 3 ರಂದು ಎಲ್ಲಾ ಮುಖ್ಯ ಕಾರ್ಯದರ್ಶಿಗಳು ನ್ಯಾಯಾಲಯದಲ್ಲಿ ಹಾಜರಿರಬೇಕು. ಈ ಬಗ್ಗೆ ವಿಚಾರಣೆ ನಡೆಸುತ್ತೇವೆ ಎಂದು ನ್ಯಾಯಾಲಯ ಹೇಳಿದೆ.

ಬೀದಿ ನಾಯಿಗಳ ದಾಳಿಯಂತಹ ಘಟನೆಗಳು ನಿರಂತರವಾಗಿ ನಡೆಯುತ್ತಿವೆ. ವಿದೇಶಗಳಲ್ಲಿ ದೇಶದ ಚಿತ್ರಣವನ್ನು ಕೆಟ್ಟದಾಗಿ ತೋರಿಸಲಾಗುತ್ತಿದೆ ಇಂತಹ ವರದಿಗಳನ್ನು ನಾವು ಓದುತ್ತಿದ್ದೇವೆ ಎಂದು ಸರ್ಕಾರಗಳನ್ನು ನ್ಯಾಯಮೂರ್ತಿ ವಿಕ್ರಮ್ ನಾಥ್ ಟೀಕಿಸಿದರು.

Representational image
'ನನ್ನನ್ನು ಪ್ರಪಂಚದಾದ್ಯಂತ ಪ್ರಸಿದ್ಧರನ್ನಾಗಿ ಮಾಡಿದೆ': ಬೀದಿ ನಾಯಿ ಪ್ರಕರಣದ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಾಧೀಶ

ನಾಯಿಗಳ ಜನನ ನಿಯಂತ್ರಣ ನಿಯಮಗಳ ಬಗ್ಗೆ ಅಭಿಪ್ರಾಯ ತಿಳಿಸುವಂತೆ ನ್ಯಾಯಾಲಯವು ಈ ಹಿಂದೆ ರಾಜ್ಯಗಳಿಗೆ ನಿರ್ದೇಶನ ನೀಡಿತ್ತು. ಪಶ್ಚಿಮ ಬಂಗಾಳ, ದೆಹಲಿ ಮತ್ತು ತೆಲಂಗಾಣ ರಾಜ್ಯಗಳು ಮಾತ್ರ ಅಫಿಡವಿಟ್‌ಗಳನ್ನು ಸಲ್ಲಿಸಿವೆ. ಉಳಿದಂತೆ ಎಲ್ಲಾ ರಾಜ್ಯಗಳು ನ್ಯಾಯಾಲಯದ ಆದೇಶವನ್ನು ನಿರ್ಲಕ್ಷಿಸಿವೆ. ಅದಕ್ಕಾಗಿ ನ್ಯಾಯಾಲಯ ಚಾಟಿ ಬೀಸಿದೆ.

ಕರ್ತವ್ಯಲೋಪ ಎಸಗಿದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳು ಮುಂದಿನ ಸೋಮವಾರ ಬೆಳಿಗ್ಗೆ 10:30 ಕ್ಕೆ ತನ್ನ ಮುಂದೆ ಖುದ್ದಾಗಿ ಹಾಜರಾಗುವಂತೆ ನಿರ್ದೇಶಿಸಿದ ನ್ಯಾಯಾಲಯ, ನಿಯಮ ಪಾಲಿಸದಿದ್ದರೆ ಬಲವಂತದ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದೆ.

ಆಗಸ್ಟ್ 22 ರಂದು, ನ್ಯಾಯಾಲಯವು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಎಬಿಸಿ ನಿಯಮಗಳ ಅಡಿಯಲ್ಲಿ ಅನುಸರಣೆ ಅಫಿಡವಿಟ್‌ಗಳನ್ನು ಸಲ್ಲಿಸುವಂತೆ ನಿರ್ದೇಶಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com