

ಪಾಲಕ್ಕಾಡ್: ಕೇರಳ ಬಿಜೆಪಿ ಅಧ್ಯಕ್ಷ ರಾಜೀವ್ ಚಂದ್ರಶೇಖರ್ ಅವರು ಕರ್ನಾಟಕದಲ್ಲಿ "ಭೂ ಹಗರಣ" ದಲ್ಲಿ ಭಾಗಿಯಾಗಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಡಳಿತಾರೂಢ CPM ಮತ್ತು ಪ್ರತಿಪಕ್ಷ ಕಾಂಗ್ರೆಸ್ ಮಂಗಳವಾರ ಒತ್ತಾಯಿಸಿವೆ. ಆದರೆ ಈ ಆರೋಪಗಳನ್ನು "ಆಧಾರರಹಿತ" ಮತ್ತು "ಸುಳ್ಳು" ಎಂದು ರಾಜೀವ್ ಚಂದ್ರಶೇಖರ್ ತಳ್ಳಿ ಹಾಕಿದ್ದಾರೆ.
ರಾಜೀವ್ ಚಂದ್ರಶೇಖರ್ ವಿರುದ್ಧ ಎಸ್‌ಐಟಿ ತನಿಖೆ ನಡೆಯಬೇಕು ಎಂದು ಸಿಪಿಐ-ಎಂ ರಾಜ್ಯ ಕಾರ್ಯದರ್ಶಿ ಎಂವಿ ಗೋವಿಂದನ್ ಚಂದ್ರಶೇಖರ್ ಒತ್ತಾಯಿಸಿದರೆ, ಬಿಜೆಪಿ ರಾಜ್ಯಾಧ್ಯಕ್ಷರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಮತ್ತು ಅವರನ್ನು ಬಂಧಿಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.
ಪಾಲಕ್ಕಾಡ್‌ನಲ್ಲಿ ಬಿಜೆಪಿ ಆಡಳಿತವಿರುವ ಮುನ್ಸಿಪಲ್ ಕಾರ್ಪೊರೇಷನ್ ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಚಂದ್ರಶೇಖರ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಿಭಟನಾಕಾರರು, ರಾಜೀವ್ ಚಂದ್ರಶೇಖರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಭೂ ಹಗರಣಕ್ಕೆ ಸಂಬಂಧಿಸಿದಂತೆ ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು.
ಆದರೆ ಈ ಆರೋಪವನ್ನು ಬಿಜೆಪಿ ನಾಯಕ ನಿರಾಕರಿಸಿದ್ದಾರೆ. ಇದೆಲ್ಲವೂ ಆಧಾರರಹಿತವಾಗಿದೆ, ಇದು ನಿಜವಲ್ಲ. ತಮ್ಮ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಕಾಂಗ್ರೆಸ್ ಮತ್ತು ಸಿಪಿಐ-ಎಂ ವಿರುದ್ಧ ತಾನು ಮಾಡಿದ ಭ್ರಷ್ಟಾಚಾರದ ಆರೋಪಗಳಿಂದ ಗಮನ ಬೇರೆಡೆ ಸೆಳೆಯುವ ಉದ್ದೇಶದಿಂದ ಈ ಆರೋಪಗಳನ್ನು ಮಾಡಿದ್ದಾರೆ ಎಂದು ಅವರು ಹೇಳಿದ್ದಾರೆ.
Advertisement