
ನವದೆಹಲಿ: ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರ ದಿಢೀರ್ ರಾಜೀನಾಮೆಯಿಂದ ತೆರವಾಗಿದ್ದ ಉಪರಾಷ್ಟ್ರಪತಿ ಹುದ್ದೆಗೆ ಮಂಗಳವಾರ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಹಾಗೂ ರಾಜ್ಯಸಭಾ ಸದಸ್ಯ ಎಚ್.ಡಿ. ದೇವೇಗೌಡ ಸೇರಿದಂತೆ ಹಲವು ನಾಯಕರು ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದ್ದಾರೆ.
ಮೊದಲ ಮತದಾರರಲ್ಲಿ ಪ್ರಧಾನಿ ಮೋದಿ, ಮಾಜಿ ಪ್ರಧಾನಿ ದೇವೇಗೌಡ, ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಅರ್ಜುನ್ ರಾಮ್ ಮೇಘವಾಲ್ ಮತ್ತು ಕಿರಣ್ ರಿಜಿಜು ಸೇರಿದ್ದಾರೆ. ರಾಜ್ಯಸಭೆಯ ಉಪಸಭಾಪತಿ ಹರಿವಂಶ್ ಬಿಜೆಪಿ ಸಂಸದೆ ಕಂಗನಾ ರಣಾವತ್ ಮತ್ತು ಎಸ್‌ಪಿ ನಾಯಕ ರಾಮ್ ಗೋಪಾಲ್ ಯಾದವ್ ಸೇರಿದಂತೆ ಇತರರು ಮತ ಚಲಾಯಿಸಿದರು.
ಉಪರಾಷ್ಟ್ರಪತಿ ಚುನಾವಣೆಗಾಗಿ ಇಂದು (ಸೆ.9-ಮಂಗಳವಾರ) ಬೆಳಗ್ಗೆ 10 ಗಂಟೆಯಿಂದ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಸಂಜೆ 5 ಗಂಟೆವರೆಗೆ ಮತದಾನ ನಡೆಯಲಿದೆ.
ಸಂಸತ್ತಿನ ಉಭಯ ಸದನಗಳ ಸದಸ್ಯರು ಇಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಸಂಸತ್ ಭವನದಲ್ಲಿ ಮತ ಚಲಾಯಿಸಲಿದ್ದಾರೆ. ಮತ ಎಣಿಕೆ ಸಂಜೆ 6 ಗಂಟೆಗೆ ಆರಂಭವಾಗಲಿದ್ದು, ಫಲಿತಾಂಶಗಳನ್ನು ಸಂಜೆ ತಡವಾಗಿ ಪ್ರಕಟಿಸಲಾಗುವುದು.
ಈ ಚುನಾವಣೆಯಲ್ಲಿ ಸಂಸತ್ತಿಗೆ ಆಯ್ಕೆಗೊಂಡ ಮತ್ತು ನಾಮನಿರ್ದೇಶನಗೊಂಡ ಎಲ್ಲಾ ಸಂಸದರು ಮತ ಚಲಾಯಿಸಲಿದ್ದಾರೆ. ಸಾಯಂಕಾಲ 5 ಗಂಟೆ ಬಳಿಕ ಚುನಾವಣಾ ಫಲಿತಾಂಶ ಘೋಷಣೆಯಾಗಲಿದೆ.
ಉಪರಾಷ್ಟ್ರಪತಿ ಆಯ್ಕೆಗೆ ಲೋಕಸಭೆ ಮತ್ತು ರಾಜ್ಯಸಭೆಯ ಒಟ್ಟು 781 ಸಂಸದರು ಮತದಾನದ ಹಕ್ಕನ್ನು ಹೊಂದಿದ್ದು, ನಿರ್ದಿಷ್ಟ ಅಭ್ಯರ್ಥಿಯ ಗೆಲುವಿಗೆ 391 ಮತಗಳ ಅಗತ್ಯವಿದೆ.
ಜುಲೈ 21ರಂದು ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ದಿಢೀರ್ ರಾಜೀನಾಮೆ ನೀಡಿದ್ದರು. ಈ ಹುದ್ದೆಗೆ ಇದೀಗ ಎನ್‌ಡಿಎ ಮೈತ್ರಿಕೂಟದಿಂದ ಅಭ್ಯರ್ಥಿಯಾಗಿ ಸಿ.ಪಿ. ರಾಧಾಕೃಷ್ಣನ್ ಹಾಗೂ ವಿರೋಧ ಪಕ್ಷಗಳ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ನ್ಯಾ. ಸುದರ್ಶನ ರೆಡ್ಡಿ ಕಣಕ್ಕಿಳಿದಿದ್ದಾರೆ.
ಏತನ್ಮಧ್ಯೆ ಉಪರಾಷ್ಟ್ರಪತಿ ಚುನಾವಣೆಗೆ ಆಡಳಿತಾರೂಢ ಎನ್‌ಡಿಎ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಅವರು, ಗೆಲವಿನ ಭರವಸೆ ವ್ಯಕ್ತಪಡಿಸಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಈ ಚುನಾವಣೆಯಲ್ಲಿ ಭಾರತದ ರಾಷ್ಟ್ರೀಯತೆಗೆ ಗೆಲುವು ನಿಶ್ಚಿತ" ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.
"ಭಾರತದ ಉಪರಾಷ್ಟ್ರಪತಿ ಸ್ಥಾನಕ್ಕೆಚುನಾವಣೆ ನಡೆಯುತ್ತಿದೆ. ಇದು ಭಾರತೀಯ ರಾಷ್ಟ್ರೀಯತೆಗೆ ದೊಡ್ಡ ಜಯ ತಂದುಕೊಡಲಿದೆ. ನಾವೆಲ್ಲರೂ ಒಂದಾಗಿದ್ದು, ವಿಕಸಿತ ಭಾರತ ನಿರ್ಮಾಣ ಮಾಡುವ ದೃಢಸಂಕಲ್ಪದೊಂದಿಗೆ ಹೆಜ್ಜೆ ಹಾಕುತ್ತಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇದಕ್ಕೂ ಮುನ್ನ ಸಿಪಿ ರಾಧಾಕೃಷ್ಣನ್ ಅವರು ದೆಹಲಿಯ ಲೋಧಿ ರಸ್ತೆಯಲ್ಲಿರುವ ರಾಮ ಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಈ ನಡುವೆ ಇಂಡಿಯಾ ಮೈತ್ರಿಕೂಟದ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿರುವ ಬಿ. ಸುದರ್ಶನ್ ರೆಡ್ಡಿ ಕೂಡ, ಗೆಲುವಿನ ಆತ್ಮವಿಶ್ವಾಸದಲ್ಲಿದ್ದಾರೆ.
Advertisement