
ಪ್ರತಾಪ್‌ಗಢ: ಉತ್ತರ ಪ್ರದೇಶದ ಪ್ರತಾಪ್‌ಗಢದಲ್ಲಿ 9ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ತನ್ನ ನೆರೆಹೊರೆಯಲ್ಲಿ ವಾಸಿಸುತ್ತಿದ್ದ ತರಬೇತಿ ಪಡೆಯುವ ಕಾನ್‌ಸ್ಟೆಬಲ್‌ನಿಂದ ಅತ್ಯಾಚಾರಕ್ಕೊಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.
ಆರೋಪಿ ಪೊಲೀಸ್ ಪೇದೆಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಜಿಲ್ಲೆಯ ಸಂಗಿಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ಈ ಘಟನೆ ನಡೆದಿದ್ದು, 14 ವರ್ಷದ ಬಾಲಕಿ ಸಂಜೆ ತನ್ನ ಮನೆಯೊಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ(ಪಶ್ಚಿಮ) ಸಂಜಯ್ ರೈ ತಿಳಿಸಿದ್ದಾರೆ.
ಆರೋಪಿ ಪೊಲೀಸ್ ಪೇದೆ, ಬಾಲಕಿಗೆ ಮದುವೆಯ ಭರವಸೆ ನೀಡಿ ಆಕೆ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ದೂರನ್ನು ಉಲ್ಲೇಖಿಸಿ ಸಂಜಯ್ ರೈ ಹೇಳಿದ್ದಾರೆ.
ಮೌ ಜಿಲ್ಲೆಯಲ್ಲಿ ತರಬೇತಿ ಪಡೆಯುತ್ತಿರುವ ಆರೋಪಿ ಕಾನ್‌ಸ್ಟೆಬಲ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಮತ್ತು ಆರೋಪಿಯನ್ನು ವಶಕ್ಕೆ ಪಡೆಯಲು ಪೊಲೀಸ್ ತಂಡವನ್ನು ಮೌಗೆ ಕಳುಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
Advertisement