
ಸಿಧಿ: ಮಧ್ಯ ಪ್ರದೇಶದ ಸಿಧಿ ಜಿಲ್ಲೆಯಲ್ಲಿ ನಿಂತಿದ್ದ ಟ್ರಕ್‌ಗೆ ಎಸ್‌ಯುವಿ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಜಿಲ್ಲಾ ಕೇಂದ್ರದಿಂದ ಸುಮಾರು 30 ಕಿ.ಮೀ ದೂರದಲ್ಲಿರುವ ಬಹ್ರಿ ಬೈಪಾಸ್ ಬಳಿ ನಿನ್ನೆ ಸಂಜೆ 7.30 ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ ಎಂದು ಅವರು ಹೇಳಿದ್ದಾರೆ.
ಇಂದು ನಿಗದಿಯಾಗಿದ್ದ ಮುಖ್ಯಮಂತ್ರಿ ಮೋಹನ್ ಯಾದವ್ ಅವರ ಕಾರ್ಯಕ್ರಮಕ್ಕಾಗಿ ಟೆಂಟ್ ಉಪಕರಣಗಳನ್ನು ಇಳಿಸಲು ಟ್ರಕ್ ಅನ್ನು ನಿಲ್ಲಿಸಲಾಗಿತ್ತು. ಆದರೆ ಅಪಘಾತದ ನಂತರ ಯಾದವ್ ಅವರು ತಮ್ಮ ಕಾರ್ಯಕ್ರಮವನ್ನು ರದ್ದುಗೊಳಿಸಿ, ತೀವ್ರ ಸಂತಾಪ ಸೂಚಿಸಿದ್ದಾರೆ.
ಎಸ್‌ಯುವಿ ಕಾರು, ಟ್ರಕ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದರು. ಇತರ ಮೂವರು ಗಾಯಾಳುಗಳನ್ನು ರೇವಾ ವೈದ್ಯಕೀಯ ಕಾಲೇಜಿಗೆ ಕರೆದೊಯ್ಯಲಾಯಿತು. ಅಲ್ಲಿ ಚಿಕಿತ್ಸೆಯ ಸಮಯದಲ್ಲಿ ಒಬ್ಬರು ಸಾವನ್ನಪ್ಪಿದರು ಎಂದು ಪೊಲೀಸ್ ಉಪ ವರಿಷ್ಠಾಧಿಕಾರಿ(ಡಿಎಸ್‌ಪಿ) ಅಮನ್ ಮಿಶ್ರಾ ಅವರು ಪಿಟಿಐಗೆ ತಿಳಿಸಿದ್ದಾರೆ.
ಇನ್ನೂ ಟ್ರಕ್‌ನಿಂದ ಉಪಕರಣಗಳನ್ನು ಇಳಿಸುತ್ತಿದ್ದ ವ್ಯಕ್ತಿಯೊಬ್ಬರು ಜಿಲ್ಲಾ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದರು ಎಂದು ಅವರು ಹೇಳಿದರು.
ಮೃತರನ್ನು ಗೀತಾ ಜೈಸ್ವಾಲ್(55), ಧರ್ಮೇಂದ್ರ ಜೈಸ್ವಾಲ್(25) ಮತ್ತು ಪ್ರಿನ್ಸ್ ಜೈಸ್ವಾಲ್(30) ಮತ್ತು ಸೋಹೆಬ್ ಖಾನ್(18) ಎಂದು ಗುರುತಿಸಲಾಗಿದೆ.
ಗಾಯಗೊಂಡ ಅಜಯ್ ಜೈಸ್ವಾಲ್ (20) ಮತ್ತು ಬಾಲಕೃಷ್ಣ ಪ್ರಜಾಪತಿ (30) ಚಿಕಿತ್ಸೆ ಪಡೆಯುತ್ತಿದ್ದು, ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಡಿಎಸ್ಪಿ ತಿಳಿಸಿದ್ದಾರೆ.
Advertisement