
ಲಡಾಖ್: ಲಡಾಖ್‌ಗೆ ರಾಜ್ಯದ ಸ್ಥಾನಮಾನ ಮತ್ತು ಆರನೇ ಪರಿಚ್ಛೇದದಡಿಯಲ್ಲಿ ಸೇರಿಸುವಂತೆ ಒತ್ತಾಯಿಸಿ ಬುಧವಾರ ನಡೆಸಲಾಗುತ್ತಿದ್ದ ಪ್ರತಿಭಟನೆ ಮತ್ತು ಬಂದ್ ಹಿಂಸಾಚಾರಕ್ಕೆ ತಿರುಗಿದ್ದು, ಬಿಜೆಪಿ ಕಚೇರಿ ಮತ್ತು ಹಲವಾರು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ.
ಇಂದು ನೂರಾರು ಯುವಕರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದು, ಲೇಹ್ ಬಿಜೆಪಿ ಕಚೇರಿಗೆ ಬೆಂಕಿ ಹಚ್ಚಿ, ಪೊಲೀಸ್ ವಾಹನಗಳ ಮೇಲೆ ಕಲ್ಲು ತೂರಾಟ ಸಹ ನಡೆಸಿದರು. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಅಶ್ರುವಾಯು ಶೆಲ್‌ಗಳನ್ನು ಹಾರಿಸಿ ಲಾಠಿ ಪ್ರಹಾರ ನಡೆಸಿದರು.
ಲೇಹ್ ಪಟ್ಟಣದಲ್ಲಿ ಲೇಹ್ ಅಪೆಕ್ಸ್ ಬಾಡಿ(LAB) ಪ್ರಾಯೋಜಿತ ಬಂದ್ ಸಂದರ್ಭದಲ್ಲಿ ಪ್ರತಿಭಟನಾಕಾರರು ಮತ್ತು ಭದ್ರತಾ ಸಿಬ್ಬಂದಿಗಳ ನಡುವೆ ನಡೆದ ಘರ್ಷಣೆಯಲ್ಲಿ ಕನಿಷ್ಠ ನಾಲ್ವರು ಸಾವನ್ನಪ್ಪಿ, 30 ಮಂದಿ ಗಾಯಗೊಂಡಿದ್ದಾರೆ.
ಪ್ರತಿಭಟನಾಕಾರರು ವ್ಯಾಪಕ ಹಿಂಸಾಚಾರದಲ್ಲಿ ತೊಡಗಿ, ಬಿಜೆಪಿ ಕಚೇರಿ ಮತ್ತು ಹಲವಾರು ವಾಹನಗಳ ಮೇಲೆ ದಾಳಿ ಮಾಡಿದ ನಂತರ ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಪೊಲೀಸರು ಗುಂಡು ಹಾರಿಸಬೇಕಾಯಿತು ಎಂದು ಅವರು ಹೇಳಿದ್ದಾರೆ.
ತೀವ್ರ ಘರ್ಷಣೆಯಲ್ಲಿ ನಾಲ್ವರು ಸಾವನ್ನಪ್ಪಿದ್ದು, 30 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪೊಲೀಸರ ಗುಂಡಿನ ದಾಳಿಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಪ್ರತಿಭಟನಾಕಾರರು ಹೇಳಿದ್ದಾರೆ.
ಯುವಕರು ಪೊಲೀಸ್ ಸಿಬ್ಬಂದಿಯೊಂದಿಗೆ ಘರ್ಷಣೆಗಿಳಿದು, ಆ ಪ್ರದೇಶದಲ್ಲಿ ನಿಯೋಜಿಸಲಾಗಿದ್ದ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದರು. ಪ್ರತಿಭಟನಾಕಾರರು ಸರ್ಕಾರಿ ಕಚೇರಿಗಳು ಮತ್ತು ಪೊಲೀಸ್ ವಾಹನಗಳ ಮೇಲೂ ಕಲ್ಲು ತೂರಾಟ ನಡೆಸಿದರು.
ಶಾಂತಿ ಸುವ್ಯವಸ್ಥೆಯನ್ನು ಪುನಃಸ್ಥಾಪಿಸಲು ಹೆಚ್ಚುವರಿ ಪಡೆಗಳನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಲಡಾಖ್ ಆಡಳಿತವು ಐದು ಅಥವಾ ಅದಕ್ಕಿಂತ ಹೆಚ್ಚು ಜನರು ಸೇರುವುದನ್ನು ತಡೆಯಲು ಬಿಎನ್‌ಎಸ್‌ಎಸ್‌ನ ಸೆಕ್ಷನ್ 163 ರ ಅಡಿಯಲ್ಲಿ ನಿಷೇಧಾಜ್ಞೆ ವಿಧಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
Advertisement