

ಬೆಂಗಳೂರು: ಟಾಟಾ ಕನ್ಸಲ್ಟನ್ಸಿ ಸರ್ವೀಸಸ್ ತನ್ನ ನಾಸಿಕ್ ಘಟಕದಲ್ಲಿ ಲೈಂಗಿಕ ಕಿರುಕುಳ ಹಾಗೂ ಧರ್ಮಾಂತರಣೆ ಆರೋಪಗಳ ಬಗ್ಗೆ ಯಾವುದೇ ದೂರುಗಳು ಬಂದಿಲ್ಲ ಎಂದು ಸ್ಪಷ್ಟಪಡಿಸಿದೆ.
ಇತ್ತೀಚೆಗೆ ಕೆಲವು ಮಾಧ್ಯಮಗಳಲ್ಲಿ ಕಿರುಕುಳ-ಮತಾಂತರ ಕುರಿತು ಗಂಭೀರ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಕಂಪನಿ ಪ್ರಾಥಮಿಕ ಪರಿಶೀಲನೆ ನಡೆಸಿದ್ದು, ಯಾವುದೇ ಅಧಿಕೃತ ದೂರು ದಾಖಲಾಗಿಲ್ಲ ಎಂದು ತಿಳಿಸಿದೆ.
ಕಂಪನಿಯ ಸಿಇಒ ಮತ್ತು ವ್ಯವಸ್ಥಾಪಕ ನಿರ್ದೇಶಕ ಕೆ. ಕೃತಿವಾಸನ್ ಮಾತನಾಡಿ, “ನಾಸಿಕ್ ಘಟಕಕ್ಕೆ ಸಂಬಂಧಿಸಿದಂತೆ ಯಾವುದೇ ದೂರುಗಳು ಬಂದಿಲ್ಲ ಎಂಬುದು ಪ್ರಾಥಮಿಕ ಪರಿಶೀಲನೆಯಲ್ಲಿ ತಿಳಿದುಬಂದಿದೆ ಎಂದು ಹೇಳಿದ್ದಾರೆ. ಆದಾಗ್ಯೂ, ಸಂಪೂರ್ಣ ತನಿಖೆ ಇನ್ನೂ ಮುಂದುವರಿಯುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಈ ಪ್ರಕರಣದ ನಿಖರ ಸತ್ಯಾಂಶಗಳನ್ನು ತಿಳಿದುಕೊಳ್ಳಲು TCS ಕಂಪನಿ ಹೊರಗಿನ ತಜ್ಞರ ಸಹಾಯವನ್ನು ಪಡೆದುಕೊಂಡಿದೆ. ಡೆಲಾಯಿಟ್ ಮತ್ತು ಕಾನೂನು ಸಂಸ್ಥೆ ಟ್ರೈಲೀಗಲ್ ಗಳನ್ನು ಸ್ವತಂತ್ರ ಸಲಹೆಗಾರರಾಗಿ ನೇಮಕ ಮಾಡಲಾಗಿದೆ. ಕಂಪನಿಯ ಅಧ್ಯಕ್ಷೆ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆರ್ತಿ ಸುಬ್ರಮಣಿಯನ್ ನೇತೃತ್ವದಲ್ಲಿ ಆಂತರಿಕ ತನಿಖೆ ನಡೆಯುತ್ತಿದ್ದು, ಈ ತನಿಖೆಯ ಮೇಲೆ ನಿಗಾವಹಿಸಲು ವಿಶೇಷ ಸಮಿತಿಯನ್ನೂ ರಚಿಸಲಾಗಿದೆ ಎಂದು ತಿಳಿಸಿದ್ದಾರೆ.
ತನಿಖೆ ಪೂರ್ಣಗೊಂಡ ಬಳಿಕ ಅದರ ವರದಿಯನ್ನು ಈ ಸಮಿತಿಗೆ ಸಲ್ಲಿಸಲಾಗುತ್ತದೆ. ಅಗತ್ಯವಿದ್ದಲ್ಲಿ ಶಿಫಾರಸುಗಳನ್ನು ಜಾರಿಗೆ ತರುವುದಾಗಿ ಕಂಪನಿ ಹೇಳಿದೆ.
ಈ ಮಧ್ಯೆ, ಪ್ರಕರಣದಲ್ಲಿ ಹೆಸರು ಕೇಳಿಬಂದ ಮಹಿಳಾ ಉದ್ಯೋಗಿಯ ಬಗ್ಗೆ ಸ್ಪಷ್ಟನೆ ನೀಡಿದ ಕೃತಿವಾಸನ್ ಅವರು, ಆಕೆ ಕೇವಲ ಪ್ರೊಸೆಸ್ ಅಸೋಸಿಯೇಟ್ ಆಗಿದ್ದು, ಯಾವುದೇ ನಿರ್ವಹಣಾ ಹುದ್ದೆಯಲ್ಲಿರಲಿಲ್ಲ ಎಂದು ತಿಳಿಸಿದ್ದಾರೆ.
ಆಕೆ ಮಾನವ ಸಂಪನ್ಮೂಲ ವಿಭಾಗದಲ್ಲಿಯೂ ಇರಲಿಲ್ಲ ಮತ್ತು ನೇಮಕಾತಿ ಪ್ರಕ್ರಿಯೆಯೊಂದಿಗೂ ಸಂಬಂಧ ಹೊಂದಿರಲಿಲ್ಲ ಎಂದು ಹೇಳಿದ್ದಾರೆ.
ಇದೇ ವೇಳೆ, ನಾಸಿಕ್ ಘಟಕವನ್ನು ಮುಚ್ಚಲಾಗಿದೆ ಎಂಬ ವದಂತಿಗಳನ್ನು ಕೂಡ ಕಂಪನಿ ತಳ್ಳಿಹಾಕಿದೆ. ಘಟಕವು ಸಾಮಾನ್ಯವಾಗಿ ಕಾರ್ಯನಿರ್ವಹಿಸುತ್ತಿದ್ದು, ಗ್ರಾಹಕರ ಸೇವೆಗಳಲ್ಲಿ ಯಾವುದೇ ವ್ಯತ್ಯಯ ಉಂಟಾಗಿಲ್ಲ ಎಂದು ಸ್ಪಷ್ಟಪಡಿಸಿದೆ.
Advertisement