

ಅಹಮದಾಬಾದ್: ನೀಟ್-ಯುಜಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಇತ್ತೀಚೆಗೆ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು, ಯುವಕರು ಮತ್ತು ಇತರರ ವಿರುದ್ಧ ದಾಖಲಾಗಿರುವ ಎಲ್ಲಾ ಕ್ರಿಮಿನಲ್ ಪ್ರಕರಣಗಳನ್ನು ಹಿಂತೆಗೆದುಕೊಳ್ಳುವಂತೆ ಗುಜರಾತ್ ಸರ್ಕಾರ ರಾಜ್ಯ ಪೊಲೀಸರಿಗೆ ನಿರ್ದೇಶನ ನೀಡಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಈ ಸಂಬಂಧ ಜುಲೈ 31 ರಂದು ಪೊಲೀಸ್ ಮಹಾನಿರ್ದೇಶಕ ಜಿ.ಎಸ್. ಮಲಿಕ್ ಅವರಿಗೆ ಬರೆದ ಪತ್ರದಲ್ಲಿ, ಗೃಹ ಇಲಾಖೆಯು ಜುಲೈ 28 ರಂದು ಸುಪ್ರೀಂ ಕೋರ್ಟ್ ನೀಡಿದ ತೀರ್ಪನ್ನು ಉಲ್ಲೇಖಿಸಿ, ಪ್ರತಿಭಟನಾಕಾರರ ವಿರುದ್ಧು ಅಸ್ತಿತ್ವದಲ್ಲಿರುವ ಪ್ರಕರಣಗಳನ್ನು ತಕ್ಷಣವೇ ಹಿಂತೆಗೆದುಕೊಳ್ಳುವಂತೆ ಆದೇಶಿಸಿದೆ.
ಗುಜರಾತ್‌ನಲ್ಲಿ ನಡೆದ ಪ್ರತಿಭಟನೆಗಳಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು, ಯುವಕರು ಅಥವಾ ಇತರ ಯಾವುದೇ ವ್ಯಕ್ತಿಗಳ ವಿರುದ್ಧ ಯಾವುದೇ ಪ್ರತಿಕೂಲ ಕಾನೂನು ಅಥವಾ ದಂಡದ ಕ್ರಮ ಕೈಗೊಳ್ಳದಂತೆ ಗೃಹ ಇಲಾಖೆ ಪೊಲೀಸರಿಗೆ ಸೂಚಿಸಿದೆ.
ಪ್ರತಿಭಟನೆಗಳಲ್ಲಿ ಭಾಗವಹಿಸಿದವರ ವಿರುದ್ಧ ಈಗಾಗಲೇ ಯಾವುದೇ ಎಫ್‌ಐಆರ್‌ಗಳು ಅಥವಾ ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದರೆ, ಅವುಗಳನ್ನು ಹಿಂತೆಗೆದುಕೊಳ್ಳುವ ಕಾನೂನು ಪ್ರಕ್ರಿಯೆಯನ್ನು ತಕ್ಷಣವೇ ಪೂರ್ಣಗೊಳಿಸಬೇಕು ಎಂದು ಸರ್ಕಾರ ಆದೇಶಿಸಿದೆ.
ನೀಟ್ (ಯುಜಿ) ಪರೀಕ್ಷೆಯಲ್ಲಿನ ಅಕ್ರಮಗಳ ವಿರುದ್ಧ ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯನ್ನು ಬೆಂಬಲಿಸಿ ಅಹಮದಾಬಾದ್ ಮತ್ತು ಗುಜರಾತ್‌ನ ಹಲವಾರು ಇತರ ನಗರಗಳಲ್ಲಿ ಪ್ರತಿಭಟನೆಗಳನ್ನು ಆಯೋಜಿಸಲಾಗಿತ್ತು.