

ಮುಂಬೈ: ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವುದಿಲ್ಲ ಎಂದು ಕಾಕ್‌ರೋಚ್ ಜನತಾ ಪಾರ್ಟಿ (CJP) ಸಂಸ್ಥಾಪಕ ಅಭಿಜೀತ್ ದೀಪ್ಕೆ ಸ್ಪಷ್ಟಪಡಿಸಿದ್ದಾರೆ.
ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ ನಡೆದ ಸಿಜೆಪಿಯ ಪ್ರಮುಖ ಕಾರ್ಯತಂತ್ರದ ಸಭೆಯಲ್ಲಿ ಮಾತನಾಡಿದ ಅವರು, ಸದ್ಯಕ್ಕೆ ರಾಜಕೀಯ ಪಕ್ಷವಾಗಿ ಕಾರ್ಯನಿರ್ವಹಿಸುವ ಯಾವುದೇ ಉದ್ದೇಶವಿಲ್ಲ. ಬದಲಾಗಿ ದೇಶದ ಜನರ ಪ್ರಮುಖ ಸಮಸ್ಯೆಗಳ ಕುರಿತು ಸರ್ಕಾರದ ಮೇಲೆ ಒತ್ತಡ ತರುವ ಒತ್ತಡದ ಗುಂಪು (Pressure Group) ಆಗಿ ಕಾರ್ಯನಿರ್ವಹಿಸುವುದಾಗಿ ಹೇಳಿದರು.
ದೇಶಕ್ಕೆ ಪ್ರಸ್ತುತ ರಾಜಕೀಯ ಪಕ್ಷಕ್ಕಿಂತ ಜನರ ಧ್ವನಿಯನ್ನು ಎತ್ತುವ ಒತ್ತಡದ ಗುಂಪಿನ ಅಗತ್ಯವಿದೆ. ಸದ್ಯಕ್ಕೆ ಸಿಜೆಪಿ ಒತ್ತಡದ ಗುಂಪಾಗಿ ಕಾರ್ಯನಿರ್ವಹಿಸಲಿದೆ. ಈಗ ಭಾರತಕ್ಕೆ ಬೇಕಾಗಿರುವುದು ಒತ್ತಡದ ಗುಂಪು, ರಾಜಕೀಯ ಪಕ್ಷವಲ್ಲ ಎಂದು ಸ್ಪಷ್ಟಪಡಿಸಿದರು.
ಸಿಜೆಪಿಯ ಮುಖ್ಯ ವಕ್ತಾರ ಸೌರವ್ ದಾಸ್ ಮಾತನಾಡಿ, ಹೋರಾಟಗಾರ ಸೋನಂ ವಾಂಗ್‌ಚುಕ್ ಅವರು ಈ ಚಳವಳಿಯ ಮಾರ್ಗದರ್ಶಕರಾಗಿ ಮುಂದುವರಿಯಲಿದ್ದು, ಪ್ರಮುಖ ವಿಚಾರಗಳಲ್ಲಿ ಅವರ ಸಲಹೆ ಪಡೆಯಲಾಗುವುದು.
ಇತ್ತೀಚೆಗೆ ಸಿಜೆಪಿ ನೇತೃತ್ವದಲ್ಲಿ ನಡೆದ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧದ ಪ್ರತಿಭಟನೆಗಳಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗಳನ್ನು ಹಿಂಪಡೆಯುವಂತೆ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ಹೇಳಿದರು. ಈ ಕುರಿತು ಸರ್ಕಾರದ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಯುತ್ತಿದೆ ಎಂದು ತಿಳಿಸಿದರು.
ದೇಶದ ವಿವಿಧ ಭಾಗಗಳಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಟನೆಗಳ ವೇಳೆ ಗಾಯಗೊಂಡ ಪ್ರತಿಭಟನಾಕಾರರಿಗೆ ಕಾನೂನು ಮತ್ತು ವೈದ್ಯಕೀಯ ನೆರವು ಒದಗಿಸುವ ಕೆಲಸವನ್ನು ಸಂಘಟನೆ ಮುಂದುವರಿಸುತ್ತಿದೆ ಎಂದು ಸಿಜೆಪಿ ವಕ್ತಾರರು ಹೇಳಿದರು.
ಸಿಜೆಪಿ ಪ್ರಮುಖ ತಂಡದ ಸಭೆಯಲ್ಲಿ ಮಾಧ್ಯಮ ಮತ್ತು ನ್ಯಾಯಾಂಗ ಸೇರಿದಂತೆ ಪ್ರಮುಖ ಸಂಸ್ಥೆಗಳ ಮೇಲಿನ ಜನರ ನಂಬಿಕೆ ಕುಸಿಯುತ್ತಿರುವ ವಿಚಾರ, ಎಥನಾಲ್ ಮಿಶ್ರಿತ ಇಂಧನ, ಹೆಚ್ಚುತ್ತಿರುವ ನಿರುದ್ಯೋಗ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚೆ ನಡೆಯಲಿದೆ.
ನೀಟ್-ಯುಜಿ ಪರೀಕ್ಷೆಯಲ್ಲಿನ ಅಕ್ರಮಗಳ ಆರೋಪದ ವಿರುದ್ಧ ಅಭಿಯಾನ ನಡೆಸಲು ಅಭಿಜೀತ್ ದಿಪ್ಕೆ ಜೂನ್‌ನಲ್ಲಿ ಅಮೆರಿಕದಿಂದ ಭಾರತಕ್ಕೆ ಮರಳಿದ್ದರು.
ಬಳಿಕ ದೇಶದ ವಿವಿಧ ಭಾಗಗಳ ಯುವಕರು ಈ ಹೋರಾಟಕ್ಕೆ ಬೆಂಬಲ ನೀಡಿದ್ದು, ದೆಹಲಿಯಲ್ಲಿ ದೊಡ್ಡ ಪ್ರಮಾಣದ ಪ್ರತಿಭಟನೆಗಳು ನಡೆದಿದ್ದವು. ಪರೀಕ್ಷಾ ವ್ಯವಸ್ಥೆಯಲ್ಲಿ ಸುಧಾರಣೆ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಲಾಗಿತ್ತು.
ಜೆನ್ ಝಡ್ ಯುವಕರಲ್ಲಿ ಈ ಚಳವಳಿ ಹೆಚ್ಚಿನ ಬೆಂಬಲ ಪಡೆದಿದ್ದು, ಬಳಿಕ ಹಲವು ನಗರಗಳಿಗೆ ವಿಸ್ತರಿಸಿತು. ಆದರೆ, ಕೆಲವು ಕಡೆ ಪ್ರತಿಭಟನೆಗಳು ಹಿಂಸಾತ್ಮಕ ಸ್ವರೂಪ ಪಡೆದಿದ್ದು, ದೆಹಲಿ, ಮುಂಬೈ, ಕೋಲ್ಕತ್ತಾ ಮತ್ತು ಬಿಹಾರದಲ್ಲಿ ಪೊಲೀಸರು ಕ್ರಮ ಕೈಗೊಂಡಿದ್ದರು. ಹಲವು ವಿದ್ಯಾರ್ಥಿ ಪ್ರತಿಭಟನಾಕಾರರ ವಿರುದ್ಧ ಪ್ರಕರಣಗಳು ದಾಖಲಾಗಿದ್ದವು.