

ತಾರಾಪೀಠ: ಪಶ್ಚಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯ ಹೋಟೆಲ್‌ನಲ್ಲಿ ಸೋಮವಾರ ಬೆಳಗ್ಗೆ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ದುರಂತದಲ್ಲಿ ಕನಿಷ್ಠ ಏಳು ಯಾತ್ರಿಕರು ಮೃತಪಟ್ಟಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ.
ದೇವಾಲಯ ಪಟ್ಟಣವಾದ ತಾರಾಪೀಠನಲ್ಲಿರುವ ನಾಲ್ಕು ಅಂತಸ್ತಿನ ಹೋಟೆಲ್‌ನ ನೆಲ ಮಹಡಿಯಲ್ಲಿ ಹೆಚ್ಚಿನ ಅತಿಥಿಗಳು ಮಲಗಿದ್ದಾಗ ಇಂದು ಬೆಳಗಿನ ಜಾವ 4:30 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ.
ತಕ್ಷಣ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ಗಾಯಾಳುಗಳನ್ನು ರಕ್ಷಿಸಿ ರಾಮಪುರಹತ್ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ.
ಅಗ್ನಿಶಾಮಕ ದಳದ ಪ್ರಾಥಮಿಕ ಅಂದಾಜಿನ ಪ್ರಕಾರ, ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಈ ಬೆಂಕಿ ಕಾಣಿಸಿಕೊಂಡಿರಬಹುದು ಎನ್ನಲಾಗಿದೆ.
ಘಟನೆ ಕುರಿತು ಮಾಹಿತಿ ಪಡೆದ ತಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.