

ನವದೆಹಲಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತಮ್ಮ ವಿರುದ್ಧದ ಶಿಕ್ಷೆಯನ್ನು ಪ್ರಶ್ನಿಸಿ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಸಂಪಾದಕ ತರುಣ್ ತೇಜ್‌ಪಾಲ್ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.
ಬಾಂಬೆ ಹೈಕೋರ್ಟ್ ನೀಡಿರುವ ತೀರ್ಪನ್ನು ಪ್ರಶ್ನಿಸಿ ವಕೀಲ ಆದಿತ್ಯ ಸಮದ್ದಾರ್ ಮೂಲಕ ಮೇಲ್ಮನವಿ ಸಲ್ಲಿಸಿದ್ದಾರೆ.
ಆಗಸ್ಟ್ 6ರಂದು ಬಾಂಬೆ ಹೈಕೋರ್ಟ್‌ನ ಗೋವಾ ಪೀಠವು ಮಾಜಿ ಸಹೋದ್ಯೋಗಿ ದಾಖಲಿಸಿದ್ದ ಅತ್ಯಾಚಾರ ಪ್ರಕರಣದಲ್ಲಿ ತೇಜ್‌ಪಾಲ್ ಅವರನ್ನು ದೋಷಿ ಎಂದು ತೀರ್ಪು ನೀಡಿತ್ತು.
2021ರಲ್ಲಿ ಗೋವಾ ಸೆಷನ್ಸ್ ಕೋರ್ಟ್ ನೀಡಿದ್ದ ಖುಲಾಸೆ ತೀರ್ಪನ್ನು ರದ್ದುಗೊಳಿಸಿದ್ದ ಹೈಕೋರ್ಟ್, ತೇಜ್‌ಪಾಲ್‌ಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿತ್ತು.
ಇದರ ಜೊತೆಗೆ ರೂ.10.21 ಲಕ್ಷ ದಂಡವನ್ನೂ ವಿಧಿಸಲಾಗಿದ್ದು, ಸಂಪೂರ್ಣ ಮೊತ್ತವನ್ನು ಸಂತ್ರಸ್ತೆಗೆ ನೀಡುವಂತೆ ನ್ಯಾಯಾಲಯ ಆದೇಶಿಸಿತ್ತು.
ತೇಜ್‌ಪಾಲ್ ಪರ ವಕೀಲರ ಮನವಿಯನ್ನು ಪರಿಗಣಿಸಿದ ನ್ಯಾಯಾಲಯ, ಶರಣಾಗಲು ನೀಡಿದ್ದ ಎರಡು ವಾರಗಳ ಅವಧಿಯನ್ನು ನಾಲ್ಕು ವಾರಗಳಿಗೆ ವಿಸ್ತರಿಸಿತ್ತು.
ನ್ಯಾಯಮೂರ್ತಿಗಳಾದ ನೀಲಾ ಗೋಖಲೆ ಮತ್ತು ಅಮಿತ್ ಜಮ್ಸಂದೇಕರ್ ಅವರಿದ್ದ ಹೈಕೋರ್ಟ್ ಪೀಠವು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376(2)(f), 354A ಮತ್ತು 354B ಅಡಿಯಲ್ಲಿ ತೇಜ್‌ಪಾಲ್ ಅವರನ್ನು ದೋಷಿ ಎಂದು ಘೋಷಿಸಿತ್ತು.
ಇದಕ್ಕೂ ಮೊದಲು ಇದೇ ಪ್ರಕರಣದಲ್ಲಿ ಗೋವಾ ಸರ್ಕಾರವೂ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದು, ತೇಜ್‌ಪಾಲ್‌ಗೆ ವಿಧಿಸಿರುವ 10 ವರ್ಷಗಳ ಜೈಲು ಶಿಕ್ಷೆಯನ್ನು ಮತ್ತಷ್ಟು ಹೆಚ್ಚಿಸುವಂತೆ ಮನವಿ ಮಾಡಿದೆ.
ಗಂಭೀರ ಸ್ವರೂಪದ ಅಪರಾಧವಾಗಿರುವುದರಿಂದ ನ್ಯಾಯದ ದೃಷ್ಟಿಯಿಂದ ಇನ್ನಷ್ಟು ಕಠಿಣ ಶಿಕ್ಷೆ ಅಗತ್ಯ ಎಂದು ಗೋವಾ ಸರ್ಕಾರ ತನ್ನ ಮನವಿಯಲ್ಲಿ ಒತ್ತಾಯಿಸಿದೆ.
2013ರಲ್ಲಿ ಗೋವಾದಲ್ಲಿ ‘ತೆಹಲ್ಕಾ’ ನಿಯತಕಾಲಿಕೆ ಆಯೋಜಿಸಿದ್ದ ಕಾರ್ಯಕ್ರಮದ ವೇಳೆ ಹೋಟೆಲ್‌ನ ಲಿಫ್ಟ್‌ನಲ್ಲಿ ಕಿರಿಯ ಸಹೋದ್ಯೋಗಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ತೇಜ್‌ಪಾಲ್ ವಿರುದ್ಧ ದಾಖಲಾಗಿತ್ತು. 62 ವರ್ಷದ ತೇಜ್‌ಪಾಲ್ ತಮ್ಮ ವಿರುದ್ಧದ ಪ್ರಕರಣವನ್ನು ರಾಜಕೀಯ ಪ್ರೇರಿತ ಎಂದು ಹೇಳಿಕೊಂಡಿದ್ದರು.