

ಮುಂಬೈ: ಮಹಾರಾಷ್ಟ್ರದ ಅಮರಾವತಿಯಲ್ಲಿರುವ ಸರ್ಕಾರಿ ಆಸ್ಪತ್ರೆಯಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಬೆಂಕಿ ಅವಘಡದಲ್ಲಿ ವೆಂಟಿಲೇಟರ್ ಸ್ಪೋಟಗೊಂಡು ಮೂರು ನವಜಾತ ಶಿಶುಗಳು ಸಾವನ್ನಪ್ಪಿವೆ.
ಚಿಕಿತ್ಸೆಗಾಗಿ ದಾಖಲಾಗಿದ್ದ ಡಜನ್ಗಟ್ಟಲೆ ಶಿಶುಗಳನ್ನು ತುರ್ತು ಸ್ಥಳಾಂತರಿಸಲಾಯಿತು. ಆಸ್ಪತ್ರೆಯ ಮೂರನೇ ಮಹಡಿಯಲ್ಲಿರುವ ಎನ್‌ಐಸಿಯು ವಾರ್ಡ್‌ನಲ್ಲಿದ್ದ ವೆಂಟಿಲೇಟರ್ ಯಂತ್ರವು ಮುಂಜಾನೆ ಸುಮಾರು 3.30 ರ ವೇಳೆಗೆ ಶಾರ್ಟ್ ಸರ್ಕ್ಯೂಟ್‌ನಿಂದ ಇದ್ದಕ್ಕಿದ್ದಂತೆ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡಿದೆ.
ಬೆಂಕಿ ಅವಘಡ ಸಂಭವಿಸಿದ ಸಂದರ್ಭದಲ್ಲಿ ವಿಶೇಷ ನವಜಾತ ಆರೈಕೆ ಘಟಕದಲ್ಲಿ ಒಟ್ಟು 39 ನವಜಾತ ಶಿಶುಗಳು ಚಿಕಿತ್ಸೆ ಪಡೆಯುತ್ತಿದ್ದವು. ದಟ್ಟ ಹೊಗೆ ಆವರಿಸುತ್ತಿದ್ದಂತೆಯೇ ಕರ್ತವ್ಯದಲ್ಲಿದ್ದ ವೈದ್ಯರು, ನರ್ಸ್‌ಗಳು ಮತ್ತು ಆಸ್ಪತ್ರೆ ಸಿಬ್ಬಂದಿ ತಕ್ಷಣ ವೈದ್ಯಕೀಯ ಸಂಪರ್ಕಗಳನ್ನು ಕಡಿತಗೊಳಿಸಿ ಶಿಶುಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಪ್ರಾರಂಭಿಸಿದರು.
ಸಿಬ್ಬಂದಿಯ ಹರಸಾಹಸದ ಹೊರತಾಗಿಯೂ ತೀವ್ರ ಸುಟ್ಟ ಗಾಯಗಳು ಮತ್ತು ಹೊಗೆಯಿಂದಾಗಿ ಉಸಿರುಗಟ್ಟಿ ಮೂರು ಕಂದಮ್ಮಗಳು ಪ್ರಾಣ ಕಳೆದುಕೊಂಡವು.
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಹಾಗೂ ಉಸಿರಾಟದ ತೊಂದರೆಗೆ ಒಳಗಾದ 6 ನವಜಾತ ಶಿಶುಗಳನ್ನು ಹೆಚ್ಚಿನ ತುರ್ತು ಚಿಕಿತ್ಸೆಗಾಗಿ ಸಮೀಪದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ರವಾನಿಸಲಾಗಿದೆ. ವೈದ್ಯಕೀಯ ಉಪಕರಣಗಳ ಸುರಕ್ಷತೆ ಮತ್ತು ಅಗ್ನಿಶಾಮಕ ಮುನ್ನೆಚ್ಚರಿಕೆಗಳ ವೈಫಲ್ಯದ ಕುರಿತು ರಾಜ್ಯ ಆರೋಗ್ಯ ಇಲಾಖೆ ಹಾಗೂ ಜಿಲ್ಲಾಡಳಿತ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದೆ.