

ಜೈಪುರ: ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ ಎಂಟು ಮಂದಿ ಮೃತಪಟ್ಟಿದ್ದು, 24ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ (Delhi-Mumbai Expressway) ಪ್ರಯಾಣಿಕರ ಬಸ್ ಟ್ರಕ್‌ಗೆ ಡಿಕ್ಕಿ ಹೊಡೆದ ಬಳಿಕ ಎರಡೂ ವಾಹನಗಳಿಗೆ ಬೆಂಕಿ ಹೊತ್ತಿಕೊಂಡು ಈ ದುರಂತ ಸಂಭವಿಸಿದೆ.
ಈ ಅಪಘಾತ ದೌಸಾ ಜಿಲ್ಲೆಯ ಕೊಲ್ವಾ (Kolwa) ಪೊಲೀಸ್ ಠಾಣೆ ವ್ಯಾಪ್ತಿಯ ಧನವಾಡಾ (Dhanawda) ಸಮೀಪ ನಡೆದಿದೆ.
ಉತ್ತರಾಖಂಡದ ಋಷಿಕೇಶದಿಂದ ಮಧ್ಯಪ್ರದೇಶದ ಇಂದೋರ್ ಕಡೆಗೆ ತೆರಳುತ್ತಿದ್ದ ಖಾಸಗಿ ಪ್ರಯಾಣಿಕರ ಬಸ್, ಎಕ್ಸ್‌ಪ್ರೆಸ್‌ವೇಯಲ್ಲಿ ತನ್ನ ಮುಂದೆ ಸಾಗುತ್ತಿದ್ದ ಟ್ರಕ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಬಸ್ ಹಾಗೂ ಟ್ರಕ್‌ಗೆ ಕ್ಷಣಾರ್ಧದಲ್ಲೇ ಬೆಂಕಿ ಹೊತ್ತಿಕೊಂಡಿದ್ದು, ಬೆಂಕಿಯ ಜ್ವಾಲೆಗಳು ಎರಡೂ ವಾಹನಗಳನ್ನು ಸಂಪೂರ್ಣ ಆವರಿಸಿವೆ. ಇದರಿಂದ ಬಸ್‌ನೊಳಗಿದ್ದ ಪ್ರಯಾಣಿಕರಲ್ಲಿ ಭಾರೀ ಆತಂಕ ಉಂಟಾಗಿದ್ದು, ಹಲವರು ಪ್ರಾಣ ಉಳಿಸಿಕೊಳ್ಳಲು ಹೊರಗೆ ಜಿಗಿದಿದ್ದಾರೆ.
ದೌಸಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿಯೂಷ್ ದೀಕ್ಷಿತ್ ಅವರು ಮಾತನಾಡಿ, ಬೆಂಕಿಯಲ್ಲಿ ಸಿಲುಕಿ ಐವರು ಸ್ಥಳದಲ್ಲೇ ಸಜೀವ ದಹನವಾಗಿದ್ದು, ಮೂವರು ತೀವ್ರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ. ಮೃತರ ಗುರುತು ಪತ್ತೆ ಮಾಡುವ ಕಾರ್ಯ ನಡೆಯುತ್ತಿದೆ ಎಂದು ಹೇಳಿದ್ದಾರೆ.
ಅಪಘಾತದಲ್ಲಿ ಗಾಯಗೊಂಡ 24ಕ್ಕೂ ಹೆಚ್ಚು ಮಂದಿಯನ್ನು ಸ್ಥಳೀಯರು, ಪೊಲೀಸರು ಹಾಗೂ ರಕ್ಷಣಾ ಸಿಬ್ಬಂದಿ ಸೇರಿ ತಕ್ಷಣ ಹೊರತೆಗೆದು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹಲವರ ಸ್ಥಿತಿ ಗಂಭೀರವಾಗಿರುವುದರಿಂದ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕ ವ್ಯಕ್ತವಾಗಿದೆ.
ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆಯೇ ಪೊಲೀಸರು, ಅಗ್ನಿಶಾಮಕ ದಳ ಹಾಗೂ ಸ್ಥಳೀಯ ಆಡಳಿತದ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಅಗ್ನಿಶಾಮಕ ಸಿಬ್ಬಂದಿ ಹಲವು ಗಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು.
ಪೊಲೀಸರ ಪ್ರಾಥಮಿಕ ತನಿಖೆ ಪ್ರಕಾರ, ಇಂದೋರ್ ಮೂಲದ ಹ್ಯಾನ್ಸ್ ಟ್ರಾವೆಲ್ಸ್ ಸಂಸ್ಥೆಗೆ ಸೇರಿದ ಈ ಬಸ್ ಋಷಿಕೇಶದಿಂದ ಇಂದೋರ್‌ಗೆ ಪ್ರಯಾಣಿಸುತ್ತಿತ್ತು. ಅಪಘಾತಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಅತಿವೇಗ, ಚಾಲಕರ ನಿರ್ಲಕ್ಷ್ಯ ಅಥವಾ ಇತರೆ ತಾಂತ್ರಿಕ ಕಾರಣಗಳಿಂದ ಈ ದುರಂತ ಸಂಭವಿಸಿರಬಹುದೆಂಬ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಅಪಘಾತದ ಬಳಿಕ ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಬಳಿಕ ಸುಟ್ಟ ವಾಹನಗಳನ್ನು ತೆರವುಗೊಳಿಸಿದ ನಂತರ ಸಂಚಾರವನ್ನು ಪುನಃ ಆರಂಭಿಸಲಾಯಿತು ಅಧಿಕಾರಿಗಳು ತಿಳಿಸಿದ್ದಾರೆ.