

ನವದೆಹಲಿ: ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ "ಸಂಸತ್ ಚಲೋ" ನಡೆಸಿದ ನಂತರ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ಮುಂದುವರೆಸಿದೆ.
ಈ ಮಧ್ಯೆ ಕೆಲವು ಯುವಕರ ಗುಂಪೊಂದು ಕ್ಷಿಪ್ರ ಕಾರ್ಯ ಪಡೆ(ಆರ್‌ಎಎಫ್) ಯೋಧನ ಬೆನ್ನಟ್ಟಿ ಹಲ್ಲೆ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಇದಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ, ಪರೀಕ್ಷಾ ಅಕ್ರಮಗಳ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ಸೋಮವಾರ ಸಂಸತ್ ಚಲೋ ಪ್ರತಿಭಟನಾ ಮೆರವಣಿಗೆ ವೇಳೆ ಆರ್‌ಎಎಫ್ ಯೋಧನನ್ನು ಹಲವಾರು ಪ್ರತಿಭಟನಾಕಾರರು ಸುತ್ತುವರೆದು, ಬೆನ್ನಟ್ಟಿ, ಥಳಿಸುತ್ತಿರುವುದು ಸೆರೆಯಾಗಿದೆ.
ಘಟನೆಗೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಲಾಗಿದ್ದು, ಹಲ್ಲೆಯಲ್ಲಿ ಭಾಗಿಯಾಗಿರುವವರನ್ನು ಗುರುತಿಸಲು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.