

ನವದೆಹಲಿ: ಕಾಕ್ರೋಚ್ ಜನತಾ ಪಾರ್ಟಿ ಹೋರಾಟದಿಂದ ಕೊನೆಗೂ ಎಚ್ಚೆತ್ತುಕೊಂಡಿರುವ ಕೇಂದ್ರ ಸರ್ಕಾರ ದೇಶದಲ್ಲಿನ ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ಮುಂದಾಗಿದೆ.
ಈ ಸಂಬಂಧ ನಂದನ್ ನಿಲೇಕಣಿ ನೇತೃತ್ವದಲ್ಲಿ ಉನ್ನತ ಮಟ್ಟದ ಟಾಸ್ಕ್ ಫೋರ್ಸ್ ರಚಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಘೋಷಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪ್ರಧಾನಿ ಮೋದಿ ವಿಡಿಯೋ ಸಂದೇಶ ಹಂಚಿಕೊಂಡಿದ್ದು, ದೇಶದಲ್ಲಿನ ಪರೀಕ್ಷಾ ವ್ಯವಸ್ಥೆಯನ್ನು ಬಲಪಡಿಸುವ ಮತ್ತು ಆಧುನೀಕರಿಸುವತ್ತ ಈ ಕಾರ್ಯಪಡೆ ಗಮನಹರಿಸಲಿದೆ ಎಂದು ಹೇಳಿದ್ದಾರೆ.
ಪರೀಕ್ಷೆಗಳ ಪಾವಿತ್ರ್ಯತೆ ಹಾಗೂ ವ್ಯವಸ್ಥಿತ ಸುಧಾರಣೆಗಳ ಅಗತ್ಯತೆಯ ಕುರಿತು ಹೆಚ್ಚುತ್ತಿರುವ ಕಳವಳಗಳ ನಡುವೆ ಈ ಕ್ರಮ ಕೈಗೊಳ್ಳಲಾಗಿದೆ.
ವಿದ್ಯಾರ್ಥಿಗಳ ಭವಿಷ್ಯವನ್ನು ರಕ್ಷಿಸಲು ಭಾರತ ಸರ್ಕಾರ ನಿರಂತರವಾಗಿ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡಿದವರು ಈಗ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾರೆ. ತ್ವರಿತ ವಿಚಾರಣಾ ನ್ಯಾಯಾಲಯಗಳನ್ನು (fast-track courts) ಸ್ಥಾಪಿಸಿದ್ದೇವೆ ಮತ್ತು ಕಠಿಣ ಕಾನೂನು ನಿಬಂಧನೆಗಳನ್ನು ಒಳಗೊಂಡ ಹೊಸ ಕಾನೂನನ್ನು ಸಂಸತ್ತಿನಲ್ಲಿ ಮಂಡಿಸುವತ್ತಲೂ ಹೆಜ್ಜೆ ಹಾಕುತ್ತಿದ್ದೇವೆ ಎಂದು ಪ್ರಧಾನಿ ತಿಳಿಸಿದ್ದಾರೆ.
ಪರೀಕ್ಷಾ ವ್ಯವಸ್ಥೆಯಲ್ಲಿ ದೀರ್ಘಕಾಲೀನ ರಚನಾತ್ಮಕ ಸುಧಾರಣೆಗಳತ್ತ ಗಮನಹರಿಸಬೇಕಾದ ಅಗತ್ಯವನ್ನು ಪ್ರಧಾನ ಮಂತ್ರಿಗಳು ಒತ್ತಿ ಹೇಳಿದ್ದಾರೆ. "ನಾವು ಭವಿಷ್ಯದ ಬಗ್ಗೆ ಯೋಚಿಸಬೇಕಿದೆ. ನಮ್ಮ ಪರೀಕ್ಷಾ ವ್ಯವಸ್ಥೆಯು ವಿಶ್ವಾಸಾರ್ಹ ಮತ್ತು ಪಾರದರ್ಶಕವಾಗಿರಬೇಕು ಹಾಗೂ ತಂತ್ರಜ್ಞಾನವನ್ನು ಗರಿಷ್ಠ ಮಟ್ಟದಲ್ಲಿ ಬಳಸಿಕೊಳ್ಳುವಂತಿರಬೇಕು. ಈ ಉದ್ದೇಶಗಳನ್ನು ಗಮನದಲ್ಲಿಟ್ಟುಕೊಂಡು, ಜಾಗತಿಕ ಮಟ್ಟದಲ್ಲಿ ಖ್ಯಾತಿ ಪಡೆದ ತಂತ್ರಜ್ಞಾನ ತಜ್ಞ ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ಕಾರ್ಯಪಡೆಯನ್ನು (High-Powered Task Force) ರಚಿಸಲು ನಾವು ನಿರ್ಧರಿಸಿದ್ದೇವೆ. ಈ ಕಾರ್ಯಪಡೆಯು ಪರೀಕ್ಷಾ ಸುಧಾರಣೆಗಳ ಮೇಲೆ ಗಮನಹರಿಸಲಿದೆ ಮತ್ತು ಅದರ ಶಿಫಾರಸುಗಳ ಆಧಾರದ ಮೇಲೆ, ಮುಂಬರುವ ಪರೀಕ್ಷೆಗಳ ವಿಶ್ವಾಸಾರ್ಹತೆಯನ್ನು ಖಚಿತಪಡಿಸಿಕೊಳ್ಳಲು ಶೀಘ್ರದಲ್ಲೇ ಕ್ರಮ ಕೈಗೊಳ್ಳಲಿದ್ದೇವೆ ಎಂದು ಅವರು ಭರವಸೆ ನೀಡಿದ್ದಾರೆ.
ಯಾರಿದು ನಂದನ್ ನಿಲೇಕಣಿ? ಭಾರತದ ವಿಶಿಷ್ಟ ಗುರುತಿನ ಪ್ರಾಧಿಕಾರದ (UIDAI) ಸಂಸ್ಥಾಪಕ ಅಧ್ಯಕ್ಷರಾಗಿರುವ ನಿಲೇಕಣಿ ಅವರು, ಆಧಾರ್ ಯೋಜನೆಯ ಅನುಷ್ಠಾನದ ನೇತೃತ್ವ ವಹಿಸಿದ್ದರು ಮತ್ತು ಭಾರತದ ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ದೇಶದ 'ಡಿಜಿಟಲ್ ಇಂಡಿಯಾ' ಪಯಣಕ್ಕೆ ಮಹತ್ವದ ಕೊಡುಗೆ ನೀಡಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಪ್ರಸ್ತುತ ಅವರು ಇನ್ಫೋಸಿಸ್ ಟೆಕ್ನಾಲಜೀಸ್ ಲಿಮಿಟೆಡ್‌ನ ಸಹ ಸಂಸ್ಥಾಪಕರಾಗಿದ್ದಾರೆ.