

ಮುಜಾಫರ್‌ನಗರ: ದೀಪಾವಳಿ ಅಮಾವಾಸ್ಯೆ ದಿನದಂದೇ ಉತ್ತರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬರೊಬ್ಬರಿ 6 ಮಂದಿ ಸಾವನ್ನಪ್ಪಿದ್ದಾರೆ.
ಉತ್ತರ ಪ್ರದೇಶದ ಮುಜಾಫರ್‌ನಗರ ಜಿಲ್ಲೆಯಲ್ಲಿ ಶಾಮ್ಲಿ ಹೆದ್ದಾರಿಯಲ್ಲಿ ಸೋಮವಾರ ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಕಾಣಿಸಿಕೊಂಡು ಆರು ಮಂದಿ ಸಜೀವ ದಹನವಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ವೇಗವಾಗಿ ಬರುತ್ತಿದ್ದ ಕಾರು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು ಡಿಕ್ಕಿಯ ರಭಸಕ್ಕೆ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲಿ ಇಡೀ ವಾಹನವನ್ನು ಆವರಿಸಿದೆ. ಪರಿಣಾಮ ಕಾರಿನಲ್ಲಿದ್ದ ಆರು ಮಂದಿ ಬೆಂಕಿಯಲ್ಲಿ ಸಿಲುಕಿ ಮೃತಪಟ್ಟಿದ್ದಾರೆ.
ಘಟನೆ ಕುರಿತು ಮಾಹಿತಿ ಲಭಿಸುತ್ತಲೇ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಕಾರಿನಲ್ಲಿದ್ದವರನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಪರೀಕ್ಷಿಸಿದ ವೈದ್ಯರು ಆರು ಮಂದಿ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ.
ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಅವರ ಗುರುತು ಪತ್ತೆಹಚ್ಚಿ ಕುಟುಂಬದವರಿಗೆ ಮಾಹಿತಿ ನೀಡಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ.
ಆರಂಭಿಕ ಮಾಹಿತಿ ಪ್ರಕಾರ, ಕಾರಿನಲ್ಲಿದ್ದವರು ಹರಿಯಾಣದ ಹಿಸಾರ್‌ನಿಂದ ಹರಿದ್ವಾರಕ್ಕೆ ಪ್ರಯಾಣಿಸುತ್ತಿದ್ದರು. ಈ ವೇಳೆ ಮಾರ್ಗಮಧ್ಯೆ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.