

ಚೆನ್ನೈ: ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ ಉಂಟಾಗಿದ್ದು, ಇದು ಮಂಗಳವಾರದ ವೇಳೆಗೆ 'ಅಕ್ವಾನ್' ಹೆಸರಿನ ತೀವ್ರ ಚಂಡಮಾರುತವಾಗಿ ಬಲಗೊಳ್ಳುವ ಸಾಧ್ಯತೆಯಿದೆ.
ಇದರ ಪರಿಣಾಮ ತಮಿಳುನಾಡು, ಆಂಧ್ರಪ್ರದೇಶ ಮತ್ತು ಒಡಿಶಾದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ.
ಕಳೆದ ಮೂರು ವಾರಗಳಲ್ಲಿ ಬಂಗಾಳ ಕೊಲ್ಲಿಯಲ್ಲಿ ರೂಪುಗೊಳ್ಳುತ್ತಿರುವ ಮೂರನೇ ಚಂಡಮಾರುತ ಇದಾಗಿದೆ.
ಭಾನುವಾರ ಬೆಳಗ್ಗೆ 5.30ರ ವೇಳೆಗೆ ಆಗ್ನೇಯ ಮತ್ತು ಅದಕ್ಕೆ ಹೊಂದಿಕೊಂಡ ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ನೆಲೆಗೊಂಡಿತ್ತು. ಇದು ವಾಯವ್ಯ ದಿಕ್ಕಿನತ್ತ ಚಲಿಸಿ ಮಂಗಳವಾರದ ವೇಳೆಗೆ ತೀವ್ರ ಚಂಡಮಾರುತವಾಗಿ ಬಲಗೊಳ್ಳುವ ನಿರೀಕ್ಷೆಯಿದೆ.
ಬುಧವಾರದಿಂದ ಗುರುವಾರದ ನಡುವೆ ಉತ್ತರ ಆಂಧ್ರಪ್ರದೇಶ ಮತ್ತು ದಕ್ಷಿಣ ಒಡಿಶಾ ಕರಾವಳಿಯತ್ತ ಚಲಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ತಮಿಳುನಾಡಿನಲ್ಲಿ ಭಾರೀ ಮಳೆ, ಸಮುದ್ರದಲ್ಲಿ ಅಲೆಗಳ ಅಬ್ಬರ
ಚಂಡಮಾರುತದ ಪರಿಣಾಮ ತಮಿಳುನಾಡಿನ ಉತ್ತರ ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ. ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಲಿದ್ದು, ಸಮುದ್ರದ ಪರಿಸ್ಥಿತಿ ಪ್ರಕ್ಷುಬ್ಧವಾಗಿರಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ಆಂಧ್ರಪ್ರದೇಶದಲ್ಲಿ ಅತಿಭಾರಿ ಮಳೆ ಮುನ್ಸೂಚನೆ
ಆಂಧ್ರಪ್ರದೇಶದ ಕರಾವಳಿ ಭಾಗಗಳಲ್ಲಿ ನವೆಂಬರ್ 19 ಮತ್ತು 20ರಂದು ಭಾರೀ ಮಳೆಯಿಂದ ಅತಿಭಾರಿ ಮಳೆಯಾಗುವ ಸಾಧ್ಯತೆಯಿದೆ. ಅದರಲ್ಲೂ ಉತ್ತರ ಕರಾವಳಿ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಅತ್ಯಂತ ಭಾರೀ ಮಳೆ ಸುರಿಯುವ ಮುನ್ಸೂಚನೆ ನೀಡಲಾಗಿದೆ.
ಒಡಿಶಾದಲ್ಲಿ ಪ್ರವಾಹ ಎದುರಿಸಲು ಸಿದ್ಧತೆ
ಇನ್ನು ಚಂಡಮಾರುತದ ಪರಿಣಾಮ ದಕ್ಷಿಣ ಒಡಿಶಾದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಸಂಭವನೀಯ ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ರಾಜ್ಯ ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೀವ್ರಗೊಳಿಸಿದೆ. ಮಳೆ ಮತ್ತು ಪ್ರವಾಹದಿಂದ ಉಂಟಾಗಬಹುದಾದ ಸಮಸ್ಯೆಗಳನ್ನು ನಿರ್ವಹಿಸಲು ಅಧಿಕಾರಿಗಳು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.