

ಕೋಲ್ಕತ್ತಾ: ಆಂಧ್ರ ಪ್ರದೇಶದತ್ತ ದಾಪುಗಾಲಿರಿಸುವ ‘ಅಕ್ವಾನ್’ ಚಂಡಮಾರುತ ಇದೀಗ ಬಿಗ್ ಟ್ವಿಸ್ಟ್ ನೀಡಿದ್ದು, ತನ್ನ ಪಥ ಬದಲಿಸಿ ಬಂಗಾಳದಲ್ಲಿ ಭಾರಿ ಮಳೆ ಸುರಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
‘ಅಕ್ವಾನ್’ ಚಂಡಮಾರುತ ತನ್ನ ಪಥ ಬದಲಿಸಿದ್ದು, ಪಶ್ಚಿಮ ಬಂಗಾಳದ ಹಲವು ಜಿಲ್ಲೆಗಳಲ್ಲಿ ನವೆಂಬರ್ 19ರಿಂದ 21ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.
ಚಂಡಮಾರುತವು ಆಂಧ್ರಪ್ರದೇಶದ ನರಸಾಪುರ ಮತ್ತು ಒಡಿಶಾದ ಪುರಿ ನಡುವಿನ ಕರಾವಳಿ ಭಾಗದಲ್ಲಿ ಅಪ್ಪಳಿಸುವ ನಿರೀಕ್ಷೆಯಿದೆ.
ಬುಧವಾರ ಬೆಳಗ್ಗೆ ನೀಡಿದ್ದ ಮುನ್ಸೂಚನೆಯಲ್ಲಿ ಚಂಡಮಾರುತವು ನವೆಂಬರ್ 20ರ ಮಧ್ಯಾಹ್ನ ಆಂಧ್ರಪ್ರದೇಶದ ನೆಲ್ಲೂರು ಮತ್ತು ವಿಶಾಖಪಟ್ಟಣಂ ನಡುವೆ ಭೂಭಾಗ ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿತ್ತು.
ಆಗ ಗಾಳಿಯ ವೇಗ ಗಂಟೆಗೆ 100ರಿಂದ 110 ಕಿ.ಮೀ. ಇರಲಿದ್ದು, ಗರಿಷ್ಠ 120 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹೇಳಲಾಗಿತ್ತು.
ಆದರೆ, ಮಧ್ಯಾಹ್ನದ ವೇಳೆಗೆ ಮುನ್ಸೂಚನೆಯನ್ನು ಪರಿಷ್ಕರಿಸಿದ ಇಲಾಖೆ, ಚಂಡಮಾರುತವು ನರಸಾಪುರ ಮತ್ತು ಪುರಿ ನಡುವೆ ಭೂಭಾಗ ಪ್ರವೇಶಿಸುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಈ ವೇಳೆ ಗಾಳಿಯ ವೇಗ ಗಂಟೆಗೆ 90ರಿಂದ 100 ಕಿ.ಮೀ. ಇರಬಹುದು ಎಂದು ಅಂದಾಜಿಸಿದೆ.
ಪಶ್ಚಿಮ ಬಂಗಾಳದ ಹಲವು ಜಿಲ್ಲೆಗಳಲ್ಲಿ ಮಳೆ ಎಚ್ಚರಿಕೆ
ಚಂಡಮಾರುತದ ಪರಿಣಾಮ ದಕ್ಷಿಣ ಪಶ್ಚಿಮ ಬಂಗಾಳದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಪೂರ್ವ ಮತ್ತು ಪಶ್ಚಿಮ ಮಿಡ್ನಾಪುರ ಜಿಲ್ಲೆಗಳಲ್ಲಿ ಭಾರಿ ಮಳೆಯಿಂದ ಅತಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ದಕ್ಷಿಣ 24 ಪರಗಣ, ಹೌರಾ, ಝಾರ್‌ಗ್ರಾಮ್ ಮತ್ತು ಬಂಕುರಾ ಜಿಲ್ಲೆಗಳಲ್ಲಿಯೂ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ತಿಳಿಸಿದೆ. ರಾಜಧಾನಿ ಕೋಲ್ಕತ್ತಾದಲ್ಲಿ ನವೆಂಬರ್ 19ರಿಂದ 21ರವರೆಗೆ ಗುಡುಗು ಸಹಿತ ಮಳೆಯಾಗಬಹುದು. ಈ ಅವಧಿಯಲ್ಲಿ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.
ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ
ಪಶ್ಚಿಮ ಬಂಗಾಳದ ಕರಾವಳಿ ಮತ್ತು ಸಮುದ್ರದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನವೆಂಬರ್ 19 ಮತ್ತು 20ರಂದು ಸಮುದ್ರದ ಅಲೆಗಳು ಪ್ರಕ್ಷುಬ್ಧವಾಗಿರುವ ಸಾಧ್ಯತೆಯಿದೆ. ಹೀಗಾಗಿ ಈ ಎರಡು ದಿನ ಮೀನುಗಾರರು ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಬಾರದು ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.