ದೇಶ

ತಮಿಳುನಾಡು ಬಿಜೆಪಿ ಅಧ್ಯಕ್ಷರಿಗೆ ಗೃಹ ಬಂಧನ! ಕಾರಣವೇನು?

ಸುಪ್ರೀಂ ಕೋರ್ಟ್‌ನ ನಿರ್ದೇಶನದಂತೆ ದೀಪ ಬೆಳಗುವ ಪ್ರಕ್ರಿಯೆ ನಡೆಯುತ್ತಿದೆಯೇ ಎಂದು ಪರಿಶೀಲಿಸಲು ಮಧುರೆಗೆ ತೆರಳದಂತೆ ತಡೆಯಲು, ಬಿಜೆಪಿ ನಾಯಕರು, ಕಾರ್ಯಕರ್ತರು ಹಾಗೂ ಹಿಂದೂ ಮುನ್ನಾನಿ ಸಂಘಟನೆಯ ಸದಸ್ಯರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ

ತಮಿಳುನಾಡು ಬಿಜೆಪಿ ಅಧ್ಯಕ್ಷರಿಗೆ ಗೃಹ ಬಂಧನ! ಕಾರಣವೇನು?
ತಮಿಳುನಾಡು ಬಿಜೆಪಿ ಅಧ್ಯಕ್ಷ ನೈನಾರ್ ನಾಗೇಂದ್ರನ್
Published On :

ತಿರುಪ್ಪರಂಕುಂದ್ರಂ: ತಮಿಳುನಾಡು ಬಿಜೆಪಿ ಅಧ್ಯಕ್ಷ ನೈನಾರ್ ನಾಗೇಂದ್ರನ್ ಅವರನ್ನು ಪೊಲೀಸರು ಮಂಗಳವಾರ ಗೃಹಬಂಧನದಲ್ಲಿರಿಸಿದ್ದಾರೆ. ಕಾರ್ತಿಕ ದೀಪೋತ್ಸವದ ಹಿನ್ನೆಲೆಯಲ್ಲಿ ತಿರುಪ್ಪರಂಕುಂದ್ರಂಗೆ ತೆರಳುತ್ತಿದ್ದ ಅವರನ್ನು ತಡೆದ ಪೊಲೀಸರು ಗೃಹಬಂಧನದಲ್ಲಿರಿಸಿದ್ದಾರೆ ಎಂದು ವರದಿಯಾಗಿದೆ.

ಸುಪ್ರೀಂ ಕೋರ್ಟ್ ಆದೇಶದಂತೆ ಇಂದು ಸಂಜೆ ದೀಪವನ್ನು ಬೆಳಗಲಾಗುತ್ತದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ನಾಗೇಂದ್ರನ್ ಅವರು ತಿರುಪ್ಪರಂಕುಂದ್ರಂಗೆ ಭೇಟಿ ನೀಡಲು ಯೋಜಿಸಿದ್ದರು ಎಂದು ಪಕ್ಷದ ಮೂಲಗಳು ತಿಳಿಸಿವೆ. ಅವರ ನಿವಾಸದ ಹೊರಗೆ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿತ್ತು.

ಸುಪ್ರೀಂ ಕೋರ್ಟ್‌ನ ನಿರ್ದೇಶನದಂತೆ ದೀಪ ಬೆಳಗುವ ಪ್ರಕ್ರಿಯೆ ನಡೆಯುತ್ತಿದೆಯೇ ಎಂದು ಪರಿಶೀಲಿಸಲು ಮಧುರೆಗೆ ತೆರಳದಂತೆ ತಡೆಯಲು, ಬಿಜೆಪಿ ನಾಯಕರು, ಕಾರ್ಯಕರ್ತರು ಹಾಗೂ ಹಿಂದೂ ಮುನ್ನಾನಿ ಸಂಘಟನೆಯ ಸದಸ್ಯರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಪಕ್ಷವು ತಿಳಿಸಿದೆ.

ತಮಿಳುನಾಡಿನಾದ್ಯಂತ 20,000ಕ್ಕೂ ಹೆಚ್ಚು ಬಿಜೆಪಿ ಮತ್ತು ಹಿಂದೂ ಮುನ್ನಾನಿ ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂದು ನಾಗೇಂದ್ರನ್ ಆರೋಪಿಸಿದ್ದು, ಮರುಪರಿಶೀಲನಾ ಅರ್ಜಿ (review petition) ಹಾಗೂ ಪರಿಸ್ಥಿತಿಯನ್ನು ನಿರ್ವಹಿಸಿದ ರೀತಿಯ ಬಗ್ಗೆ ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರನ್ನು ಟೀಕಿಸಿದ್ದಾರೆ.

ಎಐಎಡಿಎಂಕೆ (AIADMK)ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಅವರು, ನಾಗೇಂದ್ರನ್ ಅವರನ್ನು ಗೃಹಬಂಧನದಲ್ಲಿ ಇರಿಸಿದ ಕ್ರಮಕ್ಕಾಗಿ ಟಿವಿಕೆ (TVK) ನೇತೃತ್ವದ ತಮಿಳುನಾಡು ಸರ್ಕಾರವನ್ನು ಟೀಕಿಸಿದ್ದಾರೆ. ಅಲ್ಲದೆ, ಸರ್ಕಾರ ಬೆದರಿಕೆ ತಂತ್ರಗಳನ್ನು ಬಳಸುತ್ತಿದೆ ಮತ್ತು ಉದ್ವಿಗ್ನತೆಯನ್ನು ಸೃಷ್ಟಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಮತ್ತೊಂದೆಡೆ ನಾಗೇಂದ್ರನ್ ಅವರನ್ನು ಗೃಹಬಂಧನದಲ್ಲಿ ಇರಿಸಲಾಗಿದೆ ಎಂಬ ಆರೋಪವನ್ನು ತಿರುನಲ್ವೇಲಿ ಪೊಲೀಸರು ನಿರಾಕರಿಸಿದ್ದಾರೆ. ಅವರ ಮನೆಯ ಹೊರಗೆ ನಿಯೋಜಿಸಲಾದ ಸಿಬ್ಬಂದಿ ಭದ್ರತಾ ಪ್ರೋಟೋಕಾಲ್‌ನ ಭಾಗವಾಗಿದ್ದಾರೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಏನಿದು ಸುಪ್ರೀಂ ಕೋರ್ಟ್ ಆದೇಶ? ತಮಿಳುನಾಡು ಸರ್ಕಾರ ಮತ್ತು ಮದ್ರಾಸ್ ಹೈಕೋರ್ಟ್‌ನ ಹಿಂದಿನ ನಿರ್ದೇಶನದ ನಡುವಿನ ವಿವಾದಕ್ಕೆ ಸಂಬಂಧಿಸಿದಂತೆ, ದೀಪವನ್ನು ಬೆಳಗಿಸಲು ನ್ಯಾಯಾಲಯ ಅನುಮತಿ ನೀಡಿದೆ. ಇದು ಕೇವಲ ಒಂದು ಬಾರಿಯ ಮಧ್ಯಂತರ ಕ್ರಮವಾಗಿರಲಿದೆ ಎಂದು ಸುಪ್ರೀಂಕೋರ್ಟ್ ನವೆಂಬರ್ 20 ರಂದು ಆದೇಶ ಹೊರಡಿಸಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.