ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ಶರದ್ ಪವಾರ್ ದಾಖಲು: ಪುತ್ರಿ ಸುಪ್ರಿಯಾ ಸುಳೆ ಹೇಳಿದ್ದೇನು?

ಮುಂಬೈ: ನಿರ್ಜಲೀಕರಣದ ಸಮಸ್ಯೆಯಿಂದ ಬಳಲುತ್ತಿದ್ದ ಎನ್‌ಸಿಪಿ ಮುಖ್ಯಸ್ಥ, ಹಿರಿಯ ರಾಜಕಾರಣಿ ಶರದ್ ಪವಾರ್ ಅವರನ್ನು ಗುರುವಾರ ದಕ್ಷಿಣ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪುತ್ರಿ, ಸಂಸದೆ ಸುಪ್ರಿಯಾ ಸುಳೆ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಸುಪ್ರಿಯಾ ಸುಳೆ, ತಂದೆಯನ್ನು ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಿದ್ದೇವೆ. ನಿರ್ಜಲೀಕರಣ ಸಮಸ್ಯೆ ಇರಬಹುದು ಎಂದು ಕಾಣುತ್ತಿದೆ. ಅವರು ತಮ್ಮ ಕೆಲಸದ ವೇಗವನ್ನು ಕಡಿಮೆ ಮಾಡಬೇಕು ಹಾಗೂ ಪ್ರಯಾಣವನ್ನು ತಗ್ಗಿಸಬೇಕು. ಆದರೆ ತಂದೆ ನಮ್ಮ ಮಾತು ಕೇಳುವುದಿಲ್ಲ. ಅವರಿಗೆ ತಮ್ಮ ಕೆಲಸದ ಮೇಲೆ ಅತಿಯಾದ ಪ್ರೀತಿ. ನಿಮ್ಮ ಕಾಳಜಿ ಮತ್ತು ಹಾರೈಕೆಗಳಿಗೆ ಧನ್ಯವಾದಗಳು ಎಂದು ಹೇಳಿದ್ದಾರೆ.
ಎನ್‌ಸಿಪಿ ಕಚೇರಿಯಲ್ಲಿ ಮಹಾರಾಷ್ಟ್ರ ರಾಜ್ಯಾಧ್ಯಕ್ಷ ಶಶಿಕಾಂತ್ ಶಿಂಧೆ ಕರೆದಿದ್ದ ಸಭೆಯಲ್ಲಿ ಸುಪ್ರಿಯಾ ಸುಳೆ ಭಾಗವಹಿಸಿದ್ದರು. ಈ ವೇಳೆ ತಂದೆಯ ಆರೋಗ್ಯದ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಸಭೆಯನ್ನು ಅರ್ಧದಲ್ಲೇ ಬಿಟ್ಟು ಆಸ್ಪತ್ರೆಗೆ ತೆರಳಿದ್ದಾರೆ ಎಂದು ತಿಳಿದುಬಂದಿದೆ.
85 ವರ್ಷದ ಶರದ್ ಪವಾರ್ ಇತ್ತೀಚೆಗಷ್ಟೇ ಎದೆ ಮತ್ತು ಉಸಿರಾಟದ ಸೋಂಕಿನ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಮತ್ತೆ ಆಸ್ಪತ್ರೆಗೆ ದಾಖಲಾಗಿರುವುದು ಅವರ ಆರೋಗ್ಯದ ಬಗ್ಗೆ ಆತಂಕ ಮೂಡಿಸಿದೆ. ವಯಸ್ಸು 85 ದಾಟಿದ್ದರೂ ಶರದ್ ಪವಾರ್ ರಾಜಕೀಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.
ಇದಕ್ಕೂ ಮೊದಲು, ಎದೆ ಮತ್ತು ಉಸಿರಾಟದ ಸೋಂಕಿನ ಕಾರಣದಿಂದ ಶರದ್ ಪವಾರ್ ಅವರನ್ನು ನವೆಂಬರ್ 5 ರಂದು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಗ ಅವರು ಸ್ಥಿರವಾಗಿದ್ದಾರೆ ಮತ್ತು ಬ್ರಾಂಕೈಟಿಸ್‌ನಂತಹ (ಶ್ವಾಸನಾಳದ ಉರಿಯೂತ) ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



