'ಮೇಕೆದಾಟು ಪ್ರಕರಣ ಬಹುತೇಕ ಮುಗಿದುಹೋಗಿದೆ': ತಮಿಳುನಾಡು ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತೀವ್ರ ತರಾಟೆ; 2ನೇ ಬಾರಿ ಮುಖಭಂಗ

ನವದೆಹಲಿ: ಕರ್ನಾಟಕ ಸರ್ಕಾರ, ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟು ಅಣೆಕಟ್ಟು ನಿರ್ಮಿಸುವುದಕ್ಕೆ ತಮಿಳುನಾಡು ಸರ್ಕಾರ ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದು, ಈ ಸಂಬಂಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.
ತಮಿಳುನಾಡು ಸರ್ಕಾರದ ಅರ್ಜಿ ವಿಚಾರಣೆ ವೇಳೆ ನ್ಯಾಯಮೂರ್ತಿ ವಿಕ್ರಮ್ ನಾಥ್ ನೇತೃತ್ವದ ಪೀಠವು ತಮಿಳುನಾಡು ಪರ ವಕೀಲರನ್ನು ಶುಕ್ರವಾರ ತೀವ್ರ ತರಾಟೆಗೆ ತೆಗೆದುಕೊಂಡಿದೆ.
ಹಿರಿಯ ವಕೀಲರು ಲಭ್ಯವಿಲ್ಲ ಎಂಬ ಕಾರಣ ನೀಡಿ ವಿಚಾರಣೆಯನ್ನ ಮುಂದೂಡುವಂತೆ ತಮಿಳುನಾಡು ಸರ್ಕಾರದ ಪರ ವಕೀಲರು ಮನವಿ ಮಾಡಿದರು. ಇದರಿಂದ ಆಕ್ರೋಶಗೊಂಡ ನ್ಯಾ.ವಿಕ್ರಮ್ ನಾಥ್ ಪೀಠ, ಹಿಂದಿನ ವಿಚಾರಣೆಯಲ್ಲೂ ಇದೇ ನೆಪ ಹೇಳಿದ್ದೀರಿ ಎಂದು ತರಾಟೆಗೆ ತೆಗೆದುಕೊಂಡಿದೆ. ಅಲ್ಲದೆ ಈ ಪ್ರಕರಣ ಬಹುತೇಕ ಮುಗಿದುಹೋಗಿದೆ ಎಂದು ಹೇಳಿದೆ.
ಇದೇ ಕಾರಣ ನೀಡಿ ಹಿಂದಿನ ವಿಚಾರಣೆಯಲ್ಲೂ ಮುಂದೂಡಿಕೆ ಕೋರಲಾಗಿತ್ತು. ಪದೇಪದೇ ಇದೇ ರೀತಿಯಲ್ಲಿ ವಿಚಾರಣೆ ಮುಂದೂಡುವಂತೆ ಮನವಿ ಮಾಡುತ್ತಿರುವುದಕ್ಕೆ ನ್ಯಾಯಪೀಠ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.
ಇಂತಹ ಅರ್ಜಿಗಳು ನ್ಯಾಯಾಲಯದಲ್ಲಿ ಈಗಾಗಲೇ ಬಾಕಿ ಇರುವ ಪ್ರಕರಣಗಳ ಸಂಖ್ಯೆಯನ್ನು ಮತ್ತಷ್ಟು ಹೆಚ್ಚಿಸಲು ಕಾರಣವಾಗುತ್ತವೆ ಎಂದು ನ್ಯಾಯಪೀಠ ಅಸಮಾಧಾನ ವ್ಯಕ್ತಪಡಿಸಿದೆ.
ತಮಿಳುನಾಡು ಸರ್ಕಾರದ ಮುಂದೂಡಿಕೆ ಮನವಿಗೆ ಅಸಮಾಧಾನ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಪ್ರಕರಣದ ಮುಂದಿನ ವಿಚಾರಣೆಯನ್ನು ಫೆಬ್ರವರಿ 15ಕ್ಕೆ ಮುಂದೂಡಿದೆ.
2ನೇ ಬಾರಿಗೆ ಮುಖಭಂಗ
ಸುಪ್ರೀಂ ಕೋರ್ಟ್ ನಿರ್ಧಾರದಿಂದ ಇಂದು ತಮಿಳುನಾಡು ಸರ್ಕಾರಕ್ಕೆ 2ನೇ ಬಾರಿಗೆ ಮುಖಭಂಗವಾಗಿದೆ. ಕಳೆದ ವಾರ ಕೂಡ ಬಾಕಿ ಕಾವೇರಿ ನೀರು ಬಿಡುಗಡೆ ವಿಚಾರದಲ್ಲಿ ಸುಪ್ರೀಂ ನಿಂದ ಮುಖಭಂಗ ಅನುಭವಿಸಿತ್ತು.
ಕರ್ನಾಟಕದಿಂದ ಬಾಕಿ ಇರುವ 11 ಟಿಎಂಸಿ ಹೆಚ್ಚುವರಿ ನೀರನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ನಿರ್ದೇಶನ ನೀಡಬೇಕೆಂದು ಕೋರಿ ತಮಿಳುನಾಡು ಸಲ್ಲಿಸಿದ್ದ ಎರಡು ಮಧ್ಯಂತರ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



