ತಿರುಪರಂಕುಂದ್ರಂ ದೀಪ ವಿವಾದ: ಜೋಸೆಫ್ ವಿಜಯ್ ಸರ್ಕಾರಕ್ಕೆ ಭಾರಿ ಹಿನ್ನಡೆ, ಭದ್ರತಾ ಕಣ್ಗಾವಲಿಗೆ ಸಿಆರ್ಪಿಎಫ್ ನಿಯೋಜನೆ

ಮದುರೈ: ತಮಿಳುನಾಡಿನ ತಿರುಪರಂಕುಂದ್ರಂನಲ್ಲಿ ದೀಪ ಬೆಳಗಿಸುವ ವಿವಾದ ಮತ್ತೆ ತೀವ್ರಗೊಂಡಿರುವ ಬೆನ್ನಲ್ಲೇ, ಪ್ರದೇಶದಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಭದ್ರತಾ ಕಾರ್ಯಾಚರಣೆ ಆರಂಭಿಸಿದೆ.
ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಸಿಆರ್ಪಿಎಫ್ ಸಿಬ್ಬಂದಿ ಸ್ಥಳದಲ್ಲಿ ಭದ್ರತೆ ಹಾಗೂ ಕಣ್ಗಾವಲು ಕಾರ್ಯಗಳನ್ನು ಕೈಗೊಂಡಿದ್ದಾರೆ. ತಿರುಪರಂಕುಂದ್ರಂನ ದೀಪತ್ತೂಣ್ನಲ್ಲಿ (Deepathoon) ಇಂದು ಸಾಂಪ್ರದಾಯಿಕ ದೀಪ ಬೆಳಗಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ.
ಅಲ್ಲದೆ, ದರ್ಗಾದಿಂದ ಕನಿಷ್ಠ 50 ಮೀಟರ್ ದೂರದಲ್ಲಿ ದೀಪ ಬೆಳಗಿಸಬೇಕು ಎಂದು ಸೂಚಿಸಿದೆ.
ಅದೇ ವೇಳೆ, ದರ್ಗಾ ಮತ್ತು ಅದರ ಆವರಣದ ಸುರಕ್ಷತೆಯನ್ನು ಖಚಿತಪಡಿಸುವಂತೆ ಪೊಲೀಸರಿಗೆ ನ್ಯಾಯಾಲಯ ನಿರ್ದೇಶನ ನೀಡಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಸಿಆರ್ಪಿಎಫ್ ಪಡೆ ನಿಯೋಜಿಸಲಾಗಿದೆ.
ಭಾರಿ ಭದ್ರತೆ
ಇಂದು ನಡೆಯಲಿರುವ ಕಾರ್ತಿಕ ದೀಪೋತ್ಸವದ ಹಿನ್ನೆಲೆಯಲ್ಲಿ ಒಂದು ಕಂಪನಿ ಸಿಆರ್ಪಿಎಫ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಹಿರಿಯ ಅಧಿಕಾರಿಗಳಿಂದ ಮುಂದಿನ ಸೂಚನೆಗಳಿಗಾಗಿ ಕಾಯಲಾಗುತ್ತಿದೆ ಎಂದು ಸಿಆರ್ಪಿಎಫ್ನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ವಿಜಯ್ ಸರ್ಕಾರಕ್ಕೆ ಸುಪ್ರೀಂ ತಪರಾಕಿ
ನವೆಂಬರ್ 24ರಂದು ದೀಪತ್ತೂಣ್ನಲ್ಲಿ ದೀಪ ಬೆಳಗಿಸಬೇಕೆಂಬ ಹಿಂದಿನ ಆದೇಶ ಪಾಲನೆಯಾಗದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ತಮಿಳುನಾಡು ಸರ್ಕಾರದ ಅಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿತ್ತು. ಅಲ್ಲದೆ, ದೇವಾಲಯದ ಆಡಳಿತ ಮಂಡಳಿಯನ್ನು ಅಮಾನತುಗೊಳಿಸಿ, ದೇವಾಲಯದ ಆಡಳಿತದ ಜವಾಬ್ದಾರಿಯನ್ನು ಇಬ್ಬರು ನಿವೃತ್ತ ನ್ಯಾಯಮೂರ್ತಿಗಳಿಗೆ ವಹಿಸಿತ್ತು.
ದೀಪ ಬೆಳಗಿಸುವ ಕಾರ್ಯಕ್ರಮ ಸುಗಮವಾಗಿ ನಡೆಯುವಂತೆ ನೋಡಿಕೊಳ್ಳುವುದರ ಜತೆಗೆ, ದರ್ಗಾಕ್ಕೆ ಭೇಟಿ ನೀಡುವ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ರಕ್ಷಣೆ ಒದಗಿಸಬೇಕು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


