Delimitation: ಕಾಂಗ್ರೆಸ್`ಗೆ ಕೈಕೊಟ್ಟ NCPಗೆ ಬಂಪರ್; ಕೇಂದ್ರದಲ್ಲಿ ಸುಪ್ರಿಯಾಸುಳೆಗೆ ಮಂತ್ರಿ ಸ್ಥಾನ!: ವರದಿ

ಮುಂಬೈ: ಮುಂಬರುವ ಕ್ಷೇತ್ರ ಪುನರ್ವಿಂಗಡಣೆ (Delimitation) ಮಸೂದೆಗೆ ಬೆಂಬಲ ನೀಡುವ ನಿಟ್ಟಿನಲ್ಲಿ ಮೋದಿ ಸರ್ಕಾರಕ್ಕೆ NCP ಬೆಂಬಲ ಘೋಷಣೆ ಬೆನ್ನಲ್ಲೇ ಶರದ್ ಪವಾರ್ ಅವರ ಪುತ್ರಿ ಹಾಗೂ ಸಂಸದರಾದ ಸುಪ್ರಿಯಾ ಸುಳೆ ಅವರಿಗೆ ಕೇಂದ್ರ ಸಚಿವೆ ಸ್ಥಾನ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಈ ಕುರಿತು ರಾಷ್ಟ್ರೀಯ ಸುದ್ದಿ ಮಾಧ್ಯಮಗಳು ವರದಿ ಮಾಡಿದ್ದು, ಕ್ಷೇತ್ರ ಪುನರ್ವಿಂಗಡಣೆ (Delimitation) ಮಸೂದೆಗೆ ಬೆಂಬಲ ನೀಡುವ ಬದಲಾಗಿ ಕೇಂದ್ರ ಮತ್ತು ಮಹಾರಾಷ್ಟ್ರ ಸರ್ಕಾರದಲ್ಲಿ ಅಧಿಕಾರ ಹಂಚಿಕೆಗೆ ಶರದ್ ಪವಾರ್ ನೇತೃತ್ವದ ಎನ್ಸಿಪಿ (ಎಸ್ಪಿ) ಪಕ್ಷ ಬೇಡಿಕೆ ಇಟ್ಟಿದೆ ಎನ್ನಲಾಗಿದೆ.
ಪಕ್ಷದ ಮೂಲಗಳ ಪ್ರಕಾರ, ಶರದ್ ಪವಾರ್ ಅವರ ಪುತ್ರಿ ಹಾಗೂ ಸಂಸದರಾದ ಸುಪ್ರಿಯಾ ಸುಳೆ ಅವರಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕು ಎಂಬುದು ಪ್ರಮುಖ ಬೇಡಿಕೆಯಾಗಿದೆ ಎಂದು ಉಲ್ಲೇಖಿಸಲಾಗಿದೆ.
ನವೆಂಬರ್ 30ರಿಂದ ಲೋಕಸಭೆ ಮತ್ತು ಡಿಸೆಂಬರ್ 2ರಿಂದ ರಾಜ್ಯಸಭೆಯ ವಿಶೇಷ ಅಧಿವೇಶನ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿವೆ. ಕ್ಷೇತ್ರ ಪುನರ್ವಿಂಗಡಣೆ ಮಸೂದೆಗೆ ಬೆಂಬಲ ನೀಡುವ ಕುರಿತು ಎನ್ಸಿಪಿ (ಎಸ್ಪಿ) ಮತ್ತು ಬಿಜೆಪಿ ನಡುವೆ ತೆರೆಮರೆಯಲ್ಲಿ ಮಾತುಕತೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.
ಕೇಂದ್ರದಲ್ಲಿ ಸಚಿವ ಸ್ಥಾನ ಪಡೆಯುವುದರ ಜತೆಗೆ ಮಹಾರಾಷ್ಟ್ರದ ಬಿಜೆಪಿ ನೇತೃತ್ವದ ಮೈತ್ರಿ ಸರ್ಕಾರದಲ್ಲೂ ಎರಡು ಸಚಿವ ಸ್ಥಾನಗಳನ್ನು ನೀಡುವಂತೆ ಎನ್ಸಿಪಿ (ಎಸ್ಪಿ) ಬೇಡಿಕೆ ಇಟ್ಟಿದೆ ಎನ್ನಲಾಗಿದೆ.
ಮಹಾರಾಷ್ಟ್ರ ಸರ್ಕಾರದಲ್ಲೂ ಎರಡು ಸಚಿವ ಸ್ಥಾನಕ್ಕೆ ಬೇಡಿಕೆ
ಕೇಂದ್ರದಲ್ಲಿ ಮಾತ್ರವಲ್ಲದೇ ಮಹಾರಾಷ್ಟ್ರ ಸರ್ಕಾರದಲ್ಲಿ ಎನ್ಸಿಪಿ (ಎಸ್ಪಿ)ಗೆ ಎರಡು ಕ್ಯಾಬಿನೆಟ್ ಸಚಿವ ಸ್ಥಾನಗಳನ್ನು ನೀಡುವ ಕುರಿತು ಮಾತುಕತೆ ನಡೆಯುತ್ತಿದೆ. ಪಕ್ಷದ ಹಿರಿಯ ನಾಯಕ ಜಯಂತ್ ಪಾಟೀಲ್ ಅವರಿಗೆ ಹಣಕಾಸು ಖಾತೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಮತ್ತೊಂದು ಸಚಿವ ಸ್ಥಾನವನ್ನು ಹಿರಿಯ ನಾಯಕ ಜಿತೇಂದ್ರ ಅವ್ಹಾದ್ ಅವರಿಗೆ ನೀಡುವ ಬಗ್ಗೆ ಚರ್ಚೆ ನಡೆದಿದೆ.
ಇದಲ್ಲದೆ, ಪಕ್ಷದ ಇತರ ಹಿರಿಯ ಶಾಸಕರಿಗೆ ಅವಕಾಶ ಕಲ್ಪಿಸಲು ಎರಡು ರಾಜ್ಯ ಸಚಿವ (MoS) ಸ್ಥಾನಗಳನ್ನೂ ನೀಡಬೇಕೆಂದು ಎನ್ಸಿಪಿ ನಾಯಕರು ಒತ್ತಾಯಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಆದರೆ, ಸುಪ್ರಿಯಾ ಸುಳೆ ಅವರನ್ನು ಮಹಾರಾಷ್ಟ್ರದ ಮುಖ್ಯಮಂತ್ರಿ ಮಾಡುವಂತೆ ಶರದ್ ಪವಾರ್ ಬೇಡಿಕೆ ಇಟ್ಟಿದ್ದಾರೆ ಎಂಬ ವರದಿಗಳನ್ನು ಸುಪ್ರಿಯಾ ಸುಳೆ ತಳ್ಳಿಹಾಕಿದ್ದಾರೆ. ವಿಧಾನಸಭೆಯಲ್ಲಿ ತಮ್ಮ ಪಕ್ಷಕ್ಕೆ ಕೇವಲ 10 ಶಾಸಕರಿರುವಾಗ ಇಂತಹ ಬೇಡಿಕೆಗಳಿಗೆ ಅರ್ಥವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಪ್ರಸ್ತುತ ಎನ್ಸಿಪಿ (ಎಸ್ಪಿ) ಪಕ್ಷಕ್ಕೆ ಲೋಕಸಭೆಯಲ್ಲಿ ಎಂಟು ಸಂಸದರಿದ್ದಾರೆ. ಕ್ಷೇತ್ರ ಪುನರ್ವಿಂಗಡಣೆ ಮಸೂದೆಗೆ ಬೆಂಬಲ ನೀಡುವ ವಿಚಾರದಲ್ಲಿ ಈ ಸಂಸದರ ನಿಲುವು ನಿರ್ಣಾಯಕವಾಗಬಹುದು ಎಂದು ಹೇಳಲಾಗುತ್ತಿದೆ.
2023ರಲ್ಲಿ ಸಂಸತ್ತು ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಕಲ್ಪಿಸುವ ಮಸೂದೆಗೆ ಸಂಸತ್ತಿನ ಅನುಮೋದನೆ ದೊರೆತಿತ್ತು. ಆದರೆ, ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆ ಪೂರ್ಣಗೊಂಡ ಬಳಿಕವೇ ಮೀಸಲಾತಿ ಜಾರಿಗೆ ಬರಲಿದೆ ಎಂಬ ಷರತ್ತು ವಿಧಿಸಲಾಗಿತ್ತು. ಈ ಸಂಬಂಧದ ಮಸೂದೆಯನ್ನು ಈ ಹಿಂದೆ ಮಂಡಿಸಿದಾಗ ಆಡಳಿತಾರೂಢ ಎನ್ಡಿಎಗೆ ಹಿನ್ನಡೆಯಾಗಿತ್ತು. ಇದೀಗ ಮತ್ತೆ ಮಸೂದೆ ಮಂಡಿಸುವ ಸಾಧ್ಯತೆ ಇದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



