Delimitation bill: ಸಂವಿಧಾನ ನಂಬುವವರು ಮಸೂದೆಗೆ ಮತ ಹಾಕಲ್ಲ; ಮಿತ್ರಪಕ್ಷ DMK ಬೆಂಬಲಕ್ಕೆ ಕಾಂಗ್ರೆಸ್ ಆಕ್ಷೇಪ..!

ನವದೆಹಲಿ: ಪ್ರಸ್ತಾವಿತ 'ಕ್ಷೇತ್ರ ಪುನರ್ವಿಂಗಡಣೆ (ಎರಡನೇ) ಮಸೂದೆ, 2026'ಕ್ಕೆ ಮಿತ್ರಪಕ್ಷ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಬೆಂಬಲ ಸೂಚಿಸಿರುವ ಕುರಿತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸಂಸತ್ತಿನ ವಿಶೇಷ ಅಧಿವೇಶನಕ್ಕೂ ಮುನ್ನ ಇಂಡಿಯಾ (INDIA) ಮೈತ್ರಿಕೂಟದ ಪಕ್ಷಗಳು ತಮ್ಮ ಕಾರ್ಯತಂತ್ರವನ್ನು ಅಂತಿಮಗೊಳಿಸಲು ಸಜ್ಜಾಗುತ್ತಿರುವ ಬೆನ್ನಲ್ಲೇ ಮೈತ್ರಿಕೂಟದೊಳಗಿನ ಈ ಭಿನ್ನಾಭಿಪ್ರಾಯ ಬಹಿರಂಗವಾಗಿದೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು, ಸಂವಿಧಾನದಲ್ಲಿ ನಂಬಿಕೆ ಇರುವವರು ಹಾಗೂ ದಲಿತರು, ಅಲ್ಪಸಂಖ್ಯಾತರು ಮತ್ತು ಹಿಂದುಳಿದ ವರ್ಗಗಳ ಹಕ್ಕುಗಳ ಪರವಾಗಿರುವವರು ಈ ಮಸೂದೆಯ ಪರವಾಗಿ ಮತ ಹಾಕುವುದಿಲ್ಲ ಎಂದು ಹೇಳಿದ್ದಾರೆ.
ಸಮಾಜವನ್ನು ವಿಭಜಿಸುವ ಉದ್ದೇಶದಿಂದ ಬಿಜೆಪಿ ಇಂತಹ ಪ್ರಕ್ರಿಯೆಗಳನ್ನು ಬಳಸಿಕೊಳ್ಳುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಅಲ್ಲದೆ, ಡಿಎಂಕೆ ಮತ್ತು ಎನ್ಸಿಪಿಯಂತಹ ಮಿತ್ರಪಕ್ಷಗಳು ಮಸೂದೆಯನ್ನು ಬೆಂಬಲಿಸಬಹುದು ಎಂಬ ವರದಿಗಳ ನಡುವೆ, ವಿರೋಧ ಪಕ್ಷಗಳು ಒಟ್ಟಾಗಿ ಸಭೆ ಸೇರಿ ಒಮ್ಮತದ ನಿಲುವನ್ನು ತೆಗೆದುಕೊಳ್ಳಲಿವೆ ಎಂದು ತಿಳಿಸಿದ್ದಾರೆ.
ಮತಕ್ಷೇತ್ರ ಮರುವಿಂಗಡಣೆ (ಎರಡನೇ) ಮಸೂದೆ-2026ಕ್ಕೆ ಡಿಎಂಕೆ ಮತ್ತು ಎನ್ಸಿಪಿ (ಶರದ್ಚಂದ್ರ ಪವಾರ್) ಬೆಂಬಲ ನೀಡುವ ಸಾಧ್ಯತೆ ಕುರಿತು ಪ್ರತಿಕ್ರಿಯಿಸಿ, ವಿರೋಧ ಪಕ್ಷಗಳ ನಾಯಕರು ಒಟ್ಟಿಗೆ ಕುಳಿತು ಚರ್ಚಿಸಿ ನಿರ್ಧಾರ ಕೈಗೊಳ್ಳಲಿದ್ದಾರೆ. ಈ ಹಿಂದೆ ಮಸೂದೆಯನ್ನು ವಿರೋಧಿಸಿದ್ದ ಡಿಎಂಕೆ ಈಗ ತನ್ನ ನಿಲುವು ಬದಲಿಸಿರುವುದೇಕೆ ಎಂದು ಪ್ರಶ್ನಿಸಿದ್ದಾರೆ.
ಇದೇ ವೇಳೆ ಅಸ್ಸಾಂ ಮತ್ತು ಜಮ್ಮು-ಕಾಶ್ಮೀರದಲ್ಲಿ ಬಿಜೆಪಿ ಕೈಗೊಂಡಿರುವ ಕ್ಷೇತ್ರ ಮರುವಿಂಗಡಣೆ ಕ್ರಮಗಳನ್ನು ಉಲ್ಲೇಖಿಸಿದ ಅವರು, ದೇಶದ ಜನರನ್ನು ವಿಭಜಿಸುವುದು ಬಿಜೆಪಿಯ ಪ್ರಮುಖ ಉದ್ದೇಶವಾಗಿದೆ ಎಂದು ಆರೋಪಿಸಿದರು.
'ಸಂವಿಧಾನದಲ್ಲಿ ನಂಬಿಕೆ ಇಟ್ಟಿರುವವರು, ಹಿಂದುಳಿದ ವರ್ಗಗಳು, ದಲಿತರು ಮತ್ತು ಅಲ್ಪಸಂಖ್ಯಾತರ ಸಬಲೀಕರಣವನ್ನು ಬಯಸುವವರು ಈ ಮಸೂದೆಗೆ ಮತ ಹಾಕುವುದಿಲ್ಲ ಎಂಬ ನಂಬಿಕೆ ನಮಗಿದೆ ಎಂದಿದ್ದಾರೆ.
ಇದೇ ವೇಳೆ ಇಂಡಿಯಾ ಮೈತ್ರಿಕೂಟದ ಸಭೆ ಕುರಿತು ಮಾತನಾಡಿದ ಕಾಂಗ್ರೆಸ್ ನಾಯಕ ಪವನ್ ಖೇರಾ, ಮಸೂದೆಯನ್ನು ವಿರೋಧಿಸಲು ಅಗತ್ಯವಿರುವ ಸಂಖ್ಯಾಬಲವನ್ನು ಹೊಂದುವುದೂ ಪ್ರಮುಖ ವಿಚಾರವಾಗಿದೆ ಎಂದರು. 'ನಾವು ಪ್ರಜಾಪ್ರಭುತ್ವವನ್ನು ಯಾವುದೇ ಬೆಲೆ ತೆತ್ತಾದರೂ, ಯಾವುದೇ ಪರಿಸ್ಥಿತಿಯಲ್ಲಾದರೂ ಉಳಿಸುತ್ತೇವೆ' ಎಂದು ಹೇಳಿದ್ದಾರೆ.
ಕಾಂಗ್ರೆಸ್ ಸಂಸದ ಪ್ರಮೋದ್ ತಿವಾರಿ ಮಾತನಾಡಿ, ಬಿಜೆಪಿಯ ಕ್ರಮಗಳನ್ನು ಎದುರಿಸಲು ಮತ್ತು ಮಸೂದೆ ವಿರುದ್ಧ ಮುಂದಿನ ಕಾರ್ಯತಂತ್ರ ರೂಪಿಸಲು ಇಂಡಿಯಾ ಮೈತ್ರಿಕೂಟ ಸಭೆ ನಡೆಸುತ್ತಿದೆ ಎಂದರು. ಮಹಿಳಾ ಮೀಸಲಾತಿಯ ಹೆಸರಿನಲ್ಲಿ ತಪ್ಪು ಮಾಹಿತಿ ಹರಡಲಾಗುತ್ತಿದೆ. ಮತಕ್ಷೇತ್ರ ಮರುವಿಂಗಡಣೆ ವಿಚಾರದಲ್ಲಿ ದೇಶದಲ್ಲಿ ಬಿಜೆಪಿಯ ವಿರುದ್ಧ ಅಭಿಪ್ರಾಯವಿದೆ ಎಂದು ಆರೋಪಿಸಿದ್ದಾರೆ.
ಆರ್ಎಸ್ಪಿ ಸಂಸದ ಎನ್.ಕೆ. ಪ್ರೇಮಚಂದ್ರನ್ ಕೂಡ ಮಸೂದೆಯ ಸಾಧಕ-ಬಾಧಕಗಳ ಕುರಿತು ಸಭೆಯಲ್ಲಿ ಚರ್ಚಿಸಿ ಒಗ್ಗಟ್ಟಿನ ನಿಲುವು ಪ್ರಕಟಿಸಲಾಗುವುದು ಎಂದು ಹೇಳಿದ್ದಾರೆ.
ವಿಧಾನಸಭಾ ಚುನಾವಣೆಯ ಬಳಿಕ ಡಿಎಂಕೆ ಬಹಳ ಹಿಂದೆಯೇ ಇಂಡಿಯಾ ಮೈತ್ರಿಕೂಟದಿಂದ ಹೊರಬಂದಿದೆ. ಎನ್ಸಿಪಿ ಕೂಡ ತನ್ನ ನಿಲುವನ್ನು ಇನ್ನೂ ಸ್ಪಷ್ಟಪಡಿಸಿಲ್ಲ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಸಂಸದ ಸೈಯದ್ ನಾಸಿರ್ ಹುಸೇನ್ ಮಾತನಾಡಿ, ಇಂಡಿಯಾ ಮೈತ್ರಿಕೂಟದ ಸಭೆಯಲ್ಲಿ ಮುಂದಿನ ಕಾರ್ಯತಂತ್ರ ನಿರ್ಧಾರವಾಗಲಿದೆ ಎಂದರು. ಜಾರಿ ನಿರ್ದೇಶನಾಲಯ (ED) ಮತ್ತು ಸಿಬಿಐನಂತಹ ತನಿಖಾ ಸಂಸ್ಥೆಗಳ ಭಯವನ್ನು ಬಳಸಿಕೊಂಡು ರಾಜಕೀಯ ನಾಯಕರನ್ನು ತಮ್ಮತ್ತ ಸೆಳೆಯುವ ಪ್ರಯತ್ನ ನಡೆಯುತ್ತಿದೆ. ಇದನ್ನು 'ಆಪರೇಷನ್ ಕಮಲ' ಎಂದು ಕರೆಯಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಮಸೂದೆಗೆ ಡಿಎಂಕೆ ಬೆಂಬಲ
ಇನ್ನೊಂದೆಡೆ, ಡಿಎಂಕೆ ಸಂಸದ ಎ. ರಾಜಾ ಶನಿವಾರ ಪಕ್ಷವು ಪ್ರಸ್ತಾವಿತ ಮಸೂದೆಯ ಮೂಲಕ ಸಂಸತ್ ಸ್ಥಾನಗಳ ಸಂಖ್ಯೆಯನ್ನು ಶೇಕಡಾ 50ರಷ್ಟು ಹೆಚ್ಚಿಸುವ ಪ್ರಸ್ತಾಪಕ್ಕೆ ಬೆಂಬಲ ನೀಡಲು ನಿರ್ಧರಿಸಿದೆ ಎಂದು ತಿಳಿಸಿದ್ದಾರೆ. ಆದರೆ, ಲೋಕಸಭೆಯಲ್ಲಿ ತಮಿಳುನಾಡಿನ ಈಗಿನ ಶೇಕಡಾ 7.18ರಷ್ಟು ಪ್ರಾತಿನಿಧ್ಯದಲ್ಲಿ ಯಾವುದೇ ಬದಲಾವಣೆಯಾಗಬಾರದು ಎಂಬುದು ಪಕ್ಷದ ಪ್ರಮುಖ ಬೇಡಿಕೆಯಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಡಿಎಂಕೆ ಅಧ್ಯಕ್ಷ ಹಾಗೂ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕೂಡ ಪಕ್ಷದ ಸಂಸದರ ಸಭೆಯಲ್ಲಿ ಮಾತನಾಡಿ, ಮತಕ್ಷೇತ್ರ ಮರುವಿಂಗಡಣೆ ಮಸೂದೆಯಲ್ಲಿ ಪಕ್ಷದ ಎರಡು ಪ್ರಮುಖ ಬೇಡಿಕೆಗಳನ್ನು ಸೇರಿಸುವಲ್ಲಿ ಯಶಸ್ವಿಯಾಗಿದ್ದೇವೆ. ಇದು ಮೂರು ವರ್ಷಗಳ ನಿರಂತರ ಹೋರಾಟಕ್ಕೆ ಸಿಕ್ಕ ಜಯ ಎಂದು ಹೇಳಿದ್ದಾರೆ.
ಕಳೆದ ಏಪ್ರಿಲ್ನಲ್ಲಿ ಕೇಂದ್ರ ಸರ್ಕಾರ ಪರಿಚಯಿಸಿದ್ದ ಹಿಂದಿನ ಮಸೂದೆಯನ್ನು ವಿರೋಧ ಪಕ್ಷಗಳೊಂದಿಗೆ ಚರ್ಚಿಸದೆ ಏಕಪಕ್ಷೀಯವಾಗಿ ಮಂಡಿಸಲಾಗಿತ್ತು. ಅದರಲ್ಲಿನ ಅಂಶಗಳನ್ನು ಅಧ್ಯಯನ ಮಾಡಲು ಸಾಕಷ್ಟು ಸಮಯವನ್ನೂ ನೀಡಿರಲಿಲ್ಲ ಎಂದು ಸ್ಟಾಲಿನ್ ಆರೋಪಿಸಿದರು. ಈ ಹಿನ್ನೆಲೆಯಲ್ಲಿ ದೇಶದ ವಿವಿಧ ಪಕ್ಷಗಳ ನಾಯಕರನ್ನು ಒಗ್ಗೂಡಿಸಿ ಮತಕ್ಷೇತ್ರ ಮರುವಿಂಗಡಣೆಯಿಂದ ಆಗಬಹುದಾದ ಪರಿಣಾಮಗಳ ಕುರಿತು ಜಾಗೃತಿ ಮೂಡಿಸಿದ್ದಾಗಿ ತಿಳಿಸಿದರು.
ಡಿಎಂಕೆ ಹೋರಾಟದಿಂದ ಬಿಜೆಪಿ ಸರ್ಕಾರದ ಮೇಲೆ ಒತ್ತಡ ಹೆಚ್ಚಾಗಿ ಹಿಂದಿನ ಮಸೂದೆ ಸಂಸತ್ತಿನಲ್ಲಿ ಸೋಲನುಭವಿಸಿತು ಎಂದು ಅವರು ಹೇಳಿದರು.
ಪ್ರಸ್ತುತ ಕ್ಷೇತ್ರಗಳ ಸಂಖ್ಯೆಯನ್ನು ಹಾಗೆಯೇ ಉಳಿಸಿಕೊಳ್ಳುವುದು ಪಕ್ಷದ ಆದ್ಯತೆಯಾಗಿದ್ದರೂ, ಸಂವಿಧಾನದ ನಿಯಮಗಳಿಗೆ ಅನುಗುಣವಾಗಿ ಕ್ಷೇತ್ರಗಳ ಸಂಖ್ಯೆ ಹೆಚ್ಚಿಸುವುದಕ್ಕೂ ವಿರೋಧವಿಲ್ಲ ಎಂದು ಸ್ಪಷ್ಟಪಡಿಸಿದರು.
2024ರಲ್ಲಿ ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ ಮಂಡಿಸುವ ಮೂಲಕ ಈ ಸಮಸ್ಯೆಗೆ ಪ್ರಾಯೋಗಿಕ ಪರಿಹಾರವನ್ನೂ ಸೂಚಿಸಿದ್ದಾಗಿ ಸ್ಟಾಲಿನ್ ತಿಳಿಸಿದರು.
ನಾವು ಧ್ವನಿ ಎತ್ತದಿದ್ದರೆ ಜನಸಂಖ್ಯೆಯ ಆಧಾರದ ಮೇಲೆ ಉತ್ತರ ಭಾರತದ ರಾಜ್ಯಗಳಲ್ಲಿ ಮಾತ್ರ ಕ್ಷೇತ್ರಗಳ ಸಂಖ್ಯೆ ಹೆಚ್ಚಾಗುತ್ತಿತ್ತು. ಇದರಿಂದ ತಮಿಳುನಾಡಿನ ಪ್ರಾತಿನಿಧ್ಯ ಕಡಿಮೆಯಾಗುವ ಅಪಾಯವಿತ್ತು. ಆದರೆ ಈಗ ಮಸೂದೆಯ ಪ್ರತಿಯನ್ನು ಪರಿಶೀಲಿಸಿದಾಗ ನಮ್ಮ ಎರಡು ಪ್ರಮುಖ ಬೇಡಿಕೆಗಳನ್ನು ಸೇರಿಸಿರುವುದು ಕಂಡುಬಂದಿದೆ. ಇದು ಮೂರು ವರ್ಷಗಳ ನಿರಂತರ ಹೋರಾಟಕ್ಕೆ ಸಂದ ಜಯ' ಎಂದು ಸ್ಟಾಲಿನ್ ಹೇಳಿದರು.
2026ರ ಜನಗಣತಿಯ ಬದಲಿಗೆ 1971ರ ಜನಗಣತಿಯನ್ನು ಆಧಾರವಾಗಿಟ್ಟುಕೊಂಡು ಕ್ಷೇತ್ರಗಳ ಮರುವಿಂಗಡಣೆ ಮಾಡುವಂತೆ ಪಕ್ಷ ಒತ್ತಾಯಿಸಿತ್ತು. ಇಲ್ಲದಿದ್ದರೆ ತಮಿಳುನಾಡಿಗೆ ಗಂಭೀರ ಹಾನಿಯಾಗುತ್ತಿತ್ತು ಎಂದರು.
ಮುಂದಿನ 25 ವರ್ಷಗಳವರೆಗೆ ತಮಿಳುನಾಡಿನ ಸಂಸದೀಯ ಪ್ರಾತಿನಿಧ್ಯವನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ಸ್ಟಾಲಿನ್ ಹೇಳಿದ್ದಾರೆ. 1967ರ ಕ್ಷೇತ್ರ ಮರುವಿಂಗಡಣೆ ಸಂದರ್ಭದಲ್ಲಿ ರಾಜ್ಯದ ಲೋಕಸಭಾ ಕ್ಷೇತ್ರಗಳ ಸಂಖ್ಯೆ 42ರಿಂದ 39ಕ್ಕೆ ಇಳಿಕೆಯಾಗಿತ್ತು ಎಂಬುದನ್ನೂ ಅವರು ಸ್ಮರಿಸಿದರು. ಈ ಬಾರಿ ರಾಜ್ಯದ ಪ್ರಾತಿನಿಧ್ಯದ ಶೇಕಡಾವಾರು ಪ್ರಮಾಣದಲ್ಲಿ ಬದಲಾವಣೆಯಾಗದಂತೆ ಕ್ಷೇತ್ರಗಳ ಸಂಖ್ಯೆಯನ್ನು ಹೆಚ್ಚಿಸುವುದನ್ನು ಖಚಿತಪಡಿಸಿದ್ದೇವೆ ಎಂದು ತಿಳಿಸಿದರು.
ಮುಂಬರುವ ಸಂಸತ್ ಅಧಿವೇಶನದಲ್ಲಿ ಪಕ್ಷದ ಸಂಸದರು ಈ ನಿಲುವನ್ನು ಸ್ಪಷ್ಟವಾಗಿ ಮಂಡಿಸಬೇಕು ಎಂದು ಸ್ಟಾಲಿನ್ ಸೂಚಿಸಿದ್ದಾರೆ.
ನವೆಂಬರ್ 30ರಿಂದ ಸಂಸತ್ತಿನ ವಿಶೇಷ ಅಧಿವೇಶನ
ಮತಕ್ಷೇತ್ರ ಮರುವಿಂಗಡಣೆ (ಎರಡನೇ) ಮಸೂದೆ-2026 ಅನ್ನು ನವೆಂಬರ್ 30ರಿಂದ ಆರಂಭವಾಗುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ.
ಸಂವಿಧಾನ ತಿದ್ದುಪಡಿ ಮಸೂದೆ ಅಂಗೀಕಾರಕ್ಕೆ ಅಗತ್ಯವಿರುವ ಸಂಖ್ಯಾಬಲವನ್ನು ಹೊಂದುವುದು ಎನ್ಡಿಎಗೆ ಪ್ರಮುಖ ಸವಾಲಾಗಿದೆ. ಡಿಎಂಕೆ, ಎನ್ಸಿಪಿ (ಶರದ್ಚಂದ್ರ ಪವಾರ್) ಮತ್ತು ವೈಎಸ್ಆರ್ ಕಾಂಗ್ರೆಸ್ನಂತಹ ಪ್ರಾದೇಶಿಕ ಪಕ್ಷಗಳ ಬೆಂಬಲ ನಿರ್ಣಾಯಕವಾಗುವ ಸಾಧ್ಯತೆಯಿದೆ.
ಶುಕ್ರವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮೂರು ಪರಿಷ್ಕೃತ ಕರಡು ಮಸೂದೆಗಳಿಗೆ ಅನುಮೋದನೆ ನೀಡಲಾಗಿದೆ. ಅವುಗಳಲ್ಲಿ ಸಂವಿಧಾನದ 132ನೇ ತಿದ್ದುಪಡಿ ಮಸೂದೆ-2026, ಮತಕ್ಷೇತ್ರ ಮರುವಿಂಗಡಣೆ (ಎರಡನೇ) ಮಸೂದೆ-2026 ಮತ್ತು ಕೇಂದ್ರಾಡಳಿತ ಪ್ರದೇಶಗಳ ಕಾನೂನುಗಳಿಗೆ ತಿದ್ದುಪಡಿ ತರುವ ಪ್ರಸ್ತಾವವೂ ಸೇರಿವೆ.
ಪ್ರಸ್ತಾವಿತ ಮಸೂದೆಯ ಪ್ರಕಾರ, ಪ್ರತಿಯೊಂದು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಹಂಚಿಕೆಯಾಗಿರುವ ಲೋಕಸಭಾ ಸ್ಥಾನಗಳ ಸಂಖ್ಯೆಯನ್ನು ಶೇಕಡಾ 50ರಷ್ಟು ಹೆಚ್ಚಿಸಲು ಉದ್ದೇಶಿಸಲಾಗಿದೆ. ಇದೇ ರೀತಿಯಲ್ಲಿ ರಾಜ್ಯ ವಿಧಾನಸಭೆಗಳಲ್ಲಿನ ಒಟ್ಟು ಸ್ಥಾನಗಳ ಸಂಖ್ಯೆಯನ್ನೂ ಹೆಚ್ಚಿಸುವ ಪ್ರಸ್ತಾಪವಿದೆ.
ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇಕಡಾ 33ರಷ್ಟು ಮೀಸಲಾತಿ ಒದಗಿಸುವ ನಾರಿ ಶಕ್ತಿ ವಂದನ್ ಅಧಿನಿಯಮದ ಜಾರಿಗೆ ಅನುಕೂಲ ಕಲ್ಪಿಸುವುದು ಕೂಡ ಈ ಪ್ರಸ್ತಾವನೆಗಳ ಉದ್ದೇಶವಾಗಿದೆ.
18ನೇ ಲೋಕಸಭೆಯ ಎಂಟನೇ ಅಧಿವೇಶನದ ಎರಡನೇ ಭಾಗ ನವೆಂಬರ್ 30ರಂದು ಆರಂಭವಾಗಲಿದೆ. ಅಗತ್ಯ ಸರ್ಕಾರಿ ಕಾರ್ಯಕಲಾಪಗಳನ್ನು ಕೈಗೆತ್ತಿಕೊಳ್ಳಲು ನವೆಂಬರ್ 30ರಂದು ಲೋಕಸಭೆ ಹಾಗೂ ಡಿಸೆಂಬರ್ 2ರಂದು ರಾಜ್ಯಸಭೆಯ ಅಧಿವೇಶನವನ್ನು ಮತ್ತೆ ಕರೆಯುವಂತೆ ಲೋಕಸಭೆ ಸ್ಪೀಕರ್ ಮತ್ತು ರಾಜ್ಯಸಭೆ ಸಭಾಪತಿಗೆ ಮನವಿ ಮಾಡಿರುವುದಾಗಿ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.




