ದೇಶ

ಜಾರ್ಖಂಡ್‌ನಲ್ಲಿ ಭೀಕರ ರಸ್ತೆ ಅಪಘಾತ: ದೇವರ ದರ್ಶನಕ್ಕೆ ಹೊರಟಿದ್ದವರ ಮೇಲೆ ಎರಗಿದ ಜವರಾಯ; ಎಸ್‌ಯುವಿ ಡಿಕ್ಕಿಯಾಗಿ 13 ಮಂದಿ ದುರ್ಮರಣ..!

ಜಾರ್ಖಂಡ್‌ನಲ್ಲಿ ಭೀಕರ ರಸ್ತೆ ಅಪಘಾತ: ದೇವರ ದರ್ಶನಕ್ಕೆ ಹೊರಟಿದ್ದವರ ಮೇಲೆ ಎರಗಿದ ಜವರಾಯ; ಎಸ್‌ಯುವಿ ಡಿಕ್ಕಿಯಾಗಿ 13 ಮಂದಿ ದುರ್ಮರಣ..!
ಅಪಘಾತದಲ್ಲಿ ನಜ್ಜುಗುಜ್ಜಾಗಿರುವ ವಾಹನ.
Published On :

ರಾಂಚಿ: ಜಾರ್ಖಂಡ್‌ನ ರಾಮಗಢ ಜಿಲ್ಲೆಯಲ್ಲಿ ಭಾನುವಾರ ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಮಹಿಳೆಯರು ಸೇರಿದಂತೆ 13 ಮಂದಿ ಮೃತಪಟ್ಟಿದ್ದಾರೆ.

ವೇಗವಾಗಿ ಬಂದ ಎಸ್‌ಯುವಿ ವಾಹನ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. ಘಟನೆಯಲ್ಲಿ ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಂಚಿ-ಪಾಟ್ನಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಕುಜು ಪೊಲೀಸ್ ಠಾಣೆ ವ್ಯಾಪ್ತಿಯ ಪೈಂಕಿ ಗ್ರಾಮದ ಸಮೀಪ ಮುಂಜಾನೆ ಸುಮಾರು 2 ಗಂಟೆಗೆ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಮೃತರೆಲ್ಲರೂ ಬಿಹಾರದ ನಳಂದಾ ಜಿಲ್ಲೆಯ ನಿವಾಸಿಗಳಾಗಿದ್ದು, ಸ್ಕಾರ್ಪಿಯೋ ವಾಹನದಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಮುಂದೆ ಚಲಿಸುತ್ತಿದ್ದ ವಾಹನಕ್ಕೆ ಎಸ್‌ಯುವಿ ಡಿಕ್ಕಿ ಹೊಡೆದಿದೆ ಎಂದು ಉಪವಿಭಾಗೀಯ ಪೊಲೀಸ್ ಅಧಿಕಾರಿ ಅಲೋಕ್ ರಂಜನ್ ಪಿಟಿಐಗೆ ತಿಳಿಸಿದ್ದಾರೆ.

ಅಪಘಾತದ ಸಮಯದಲ್ಲಿ ಸ್ಕಾರ್ಪಿಯೋ ವಾಹನದಲ್ಲಿ ಒಟ್ಟು 14 ಮಂದಿ ಇದ್ದರು. ಗಾಯಾಳುಗಳನ್ನು ಮುಂಜಾನೆ ಸುಮಾರು 2.30ಕ್ಕೆ ರಾಮಗಢದ ಸದರ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಈ ವೇಳೆ 13 ಮಂದಿ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಏಕೈಕ ಬದುಕುಳಿದ ವ್ಯಕ್ತಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿದಿದೆ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಅನಿಲ್ ಕುಮಾರ್ ತಿಳಿಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಅಪಘಾತಕ್ಕೆ ನಿಖರ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. ಘಟನೆ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಮೃತರೆಲ್ಲರೂ ಬಿಹಾರದ ನಳಂದಾ ಜಿಲ್ಲೆಯ ಬೆನ್ ಪೊಲೀಸ್ ಠಾಣೆ ವ್ಯಾಪ್ತಿಯ ಜಂಘಾರೋ ಗ್ರಾಮದ ನಿವಾಸಿಗಳಾಗಿದ್ದು, ಇವರೆಲ್ಲರೂ ಸ್ಕಾರ್ಪಿಯೋ ವಾಹನದಲ್ಲಿ ರಾಜ್ರಪ್ಪದಲ್ಲಿರುವ ಮಾಂ ಛಿನ್ನಮಸ್ತಿಕಾ ದೇವಸ್ಥಾನಕ್ಕೆ ಪೂಜೆ ಸಲ್ಲಿಸಲು ತೆರಳುತ್ತಿದ್ದರು ಎಂದು ತಿಳಿದುಬಂದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.