ಬಿಜೆಪಿಗೆ ಮತ್ತೊಬ್ಬ ಸ್ಟಾರ್ ಬೌಲರ್! ನಿತಿನ್ ನಬಿನ್ ಭೇಟಿಯಾದ ವೇಗಿ ಮೊಹಮ್ಮದ್ ಶಮಿ; ಯುಪಿ ಚುನಾವಣಾ ಅಖಾಡಕ್ಕೆ ಇಳಿಯುತ್ತಾರಾ ಲಾಲಾಜಿ?
ನವದೆಹಲಿ: ಟೀಂ ಇಂಡಿಯಾದ ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿನಿತಿನ್ ನಬಿನ್ ಅವರನ್ನು ಭೇಟಿ ಮಾಡುವ ಮೂಲಕ ದೇಶದ ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಮೂಡಿಸಿದ್ದಾರೆ. ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಕುವರ್ ಬಾಸಿತ್ ಅಲಿ ಅವರ ಸಮ್ಮುಖದಲ್ಲಿ ನಡೆದ ಈ ಭೇಟಿಯ ಬೆನ್ನಲ್ಲೇ, ಶಮಿ ಅವರು ಶೀಘ್ರದಲ್ಲೇ ಕೇಸರಿ ಪಾಳಯ ಸೇರಲಿದ್ದಾರೆ ಎಂಬ ಊಹಾಪೋಹಗಳು ಹರಡಿವೆ. ಅಲ್ಲದೆ, 2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಶಮಿ ತಮ್ಮ ತವರು ಕ್ಷೇತ್ರವಾದ ಅಮ್ರೋಹಾದಿಂದ ಸ್ಪರ್ಧಿಸಬಹುದು ಎಂಬ ಚರ್ಚೆಗಳು ಕೇಳಿಬರುತ್ತಿದೆ. ಆ ಕುರಿತ ವರದಿ ಇಲ್ಲಿದೆ:
ನವದೆಹಲಿಯ ನಿತಿನ್ ನಬಿನ್ ಅವರ ಕಚೇರಿಯಲ್ಲಿ ನಡೆದ ಈ ಮಹತ್ವದ ಭೇಟಿಯ ಸಂದರ್ಭದಲ್ಲಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ಕುನ್ವರ್ ಬಾಸಿತ್ ಅಲಿ ಅವರು ಕೂಡ ಉಪಸ್ಥಿತರಿದ್ದರು. ಈ ಭೇಟಿಯ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ರಾಜಕೀಯ ವಿಶ್ಲೇಷಕರ ಗಮನ ಸೆಳೆದಿವೆ. ಆದರೆ, ಈ ಸಭೆಯಲ್ಲಿ ಯಾವ ವಿಚಾರಗಳ ಕುರಿತು ಚರ್ಚೆ ನಡೆಯಿತು ಎಂಬುದರ ಬಗ್ಗೆ ಶಮಿ ಆಗಲಿ ಅಥವಾ ಬಿಜೆಪಿ ನಾಯಕರಾಗಲಿ ಇದುವರೆಗೆ ಯಾವುದೇ ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಿಲ್ಲ.
ಯುಪಿ ಚುನಾವಣೆಯಲ್ಲಿ ಸ್ಪರ್ಧೆ?
ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಈ ಭೇಟಿಗೆ ಹೆಚ್ಚಿನ ರಾಜಕೀಯ ಮಹತ್ವ ಬಂದಿದೆ. ಮೊಹಮ್ಮದ್ ಶಮಿ ಅವರು ಮೂಲತಃ ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯವರಾಗಿದ್ದು, ಮುಂಬರುವ ಚುನಾವಣೆಯಲ್ಲಿ ಅವರನ್ನು ಅಮ್ರೋಹಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿಬರುತ್ತಿವೆ. ಇದರೊಂದಿಗೆ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಲ್ಲಿ ಅವರಿಗೆ ಪ್ರಮುಖ ಜವಾಬ್ದಾರಿ ನೀಡುವ ಬಗ್ಗೆಯೂ ಚರ್ಚೆ ನಡೆಯುತ್ತಿದೆ ಎನ್ನಲಾಗಿದೆ. ಈ ಹಿಂದೆ ಸೆಪ್ಟೆಂಬರ್ ತಿಂಗಳಿನಲ್ಲಿಯೂ ಶಮಿ ಅವರು ಆರ್‌ಎಲ್‌ಡಿ ಮುಖ್ಯಸ್ಥ ಜಯಂತ್ ಚೌಧರಿ ಅವರನ್ನು ಭೇಟಿಯಾಗಿ ಸುದ್ದಿಯಾಗಿದ್ದರು.
ಏತನ್ಮಧ್ಯೆ, ಕಳೆದ ನವೆಂಬರ್ 6ರಂದು ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದ 36 ವರ್ಷದ ಶಮಿ, ಸದ್ಯ ವೈಟ್-ಬಾಲ್ ಕ್ರಿಕೆಟ್‌ನಲ್ಲಿ ಮುಂದುವರಿಯುವುದಾಗಿ ತಿಳಿಸಿದ್ದರು. ವಿಶೇಷವೆಂದರೆ, ಇತ್ತೀಚೆಗಷ್ಟೇ ಭಾರತದ ಮತ್ತೊಬ್ಬ ಸ್ಟಾರ್ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ ಅವರು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿಣಿಯ ವಿಶೇಷ ಆಹ್ವಾನಿತರಾಗಿ ನೇಮಕಗೊಂಡಿದ್ದರು. ಇದರ ಬೆನ್ನಲ್ಲೇ ಮೊಹಮ್ಮದ್ ಶಮಿ ಕೂಡ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿಯಾಗಿರುವುದು ಕ್ರೀಡಾ ಮತ್ತು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


