

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ(ಸಿಜೆಪಿ) ಶನಿವಾರ ಬೃಹತ್ ಪ್ರತಿಭಟನೆಗೆ ಮುಂದಾಗಿದ್ದು, ಈ ಪ್ರತಿಭಟನೆಯನ್ನು ತಡೆಯಲು ದೆಹಲಿ ಪೊಲೀಸರು ರಾಷ್ಟ್ರ ರಾಜಧಾನಿಯಲ್ಲಿ ಹಲವು ಕಠಿಣ ಕ್ರಮಗಳನ್ನು ತೆಗೆದುಕೊಂಡಿದ್ದಾರೆ.
ಸಿಜೆಪಿ ಪ್ರತಿಭಟನೆ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಮೆಟ್ರೋ ಮತ್ತು ರೈಲುಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸದಂತೆ ಸುಪ್ರೀಂ ಕೋರ್ಟ್ ನೀಡಿದ ನಿರ್ದೇಶನವನ್ನು ದೆಹಲಿ ಪೊಲೀಸರು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲಾಗಿದೆ.
ವಕೀಲರಾದ ಶೈಲೇಂದ್ರ ಮಣಿ ತ್ರಿಪಾಠಿ ಅವರು ಸಲ್ಲಿಸಿದ ಅರ್ಜಿಯಲ್ಲಿ ಕೇಂದ್ರ ಗೃಹ ಕಾರ್ಯದರ್ಶಿ ಗೋವಿಂದ ಮೋಹನ್ ಮತ್ತು ಇತರರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.
ಅಕ್ಟೋಬರ್ 9 ರ ಸುಪ್ರೀಂ ಕೋರ್ಟ್ ನಿರ್ದೇಶನದ ಹೊರತಾಗಿಯೂ ಅಧಿಕಾರಿಗಳು ರಾಷ್ಟ್ರ ರಾಜಧಾನಿಯಲ್ಲಿ ಮೆಟ್ರೋ ನಿಲ್ದಾಣಗಳನ್ನು ಬಂದ್ ಮಾಡಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.
ಈ ನಿರ್ಬಂಧಗಳಿಂದ ಸಾರ್ವಜನಿಕ ಜೀವನಕ್ಕೆ ಸಾಕಷ್ಟು ತೊಂದರೆಗಳನ್ನುಂಟುಮಾಡಿವೆ ಎಂದು ಅವರು ಹೇಳಿದ್ದಾರೆ.
ಸಾರಿಗೆ ಮಾರ್ಗಗಳನ್ನು ಉದ್ದೇಶಪೂರ್ವಕವಾಗಿ ಸಂಪೂರ್ಣ ಬಂದ್ ಮಾಡಿದ್ದಾರೆ. ಅನಗತ್ಯವಾಗಿ ರೈಲುಗಳನ್ನು ರದ್ದುಗೊಳಿಸಿದ್ದಾರೆ ಮತ್ತು ಪಾರದರ್ಶಕ ಸಂಚಾರ ಸಲಹೆಗಳನ್ನು ನೀಡುವಲ್ಲಿ ವಿಫಲರಾಗಿದ್ದಾರೆ. ಈ ಉದ್ದೇಶಪೂರ್ವಕ ಉಲ್ಲಂಘನೆಯು ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿ ಸಾರ್ವಜನಿಕ ಜೀವನವನ್ನು ತೀವ್ರವಾಗಿ ಅಸ್ತವ್ಯಸ್ತಗೊಳಿಸಿದೆ, ಅಗತ್ಯ ಪ್ರಯಾಣಿಕರನ್ನು ಸಂಕಷ್ಟಕ್ಕೆ ದೂಡಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.
ಮೆಟ್ರೋ ರೈಲುಗಳ ಸಂಚಾರ ಹಾಗೂ ನಿಜಾಮುದ್ದೀನ್ ಮತ್ತು ನವದೆಹಲಿ ರೈಲ್ವೆ ನಿಲ್ದಾಣಗಳಿಗೆ ರೈಲುಗಳ ಆಗಮನದ ಮೇಲೆ ಸಂಪೂರ್ಣ ನಿರ್ಬಂಧ ಹೇರಿರುವುದು ಮಿತಿಮೀರಿದ ಕ್ರಮ. ಸರ್ಕಾರವು ನಿಯಂತ್ರಿತ ರೀತಿಯಲ್ಲಿ ರೈಲು ಸೇವೆಗಳು ಮತ್ತು ಮೆಟ್ರೋ ಸೇವೆಗಳನ್ನು ಮುಂದುವರಿಸಲು ಅನುಮತಿಸಬೇಕು ಎಂದು ಹೇಳಿತ್ತು.