

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಕೋಲ್ಕತ್ತಾದ 'ಚೋರ್ಬಗಾನ್ ಸಾರ್ವಜನಿಕ ದುರ್ಗೋತ್ಸವ' ಪಂಡಾಲ್ನಲ್ಲಿ ಶನಿವಾರ ಸಂಜೆ ನಡೆದ ಭೀಕರ ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ. ಈ ಘಟನೆಯಲ್ಲಿ 25ಕ್ಕೂ ಹೆಚ್ಚು ಜನರು ತೀವ್ರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಶನಿವಾರ ಸಂಜೆ ಪೂಜಾ ಪಂಡಾಲ್ ಬಳಿ ಜನಸಾಗರವೇ ನೆರೆದಿತ್ತು. ಈ ವೇಳೆ ಇದ್ದಕ್ಕಿದ್ದಂತೆ ಭಾರಿ ಮಳೆ ಸುರಿಯಲಾರಂಭಿಸಿತು. ಮಳೆಯಿಂದ ಬಚಾವಾಗಲು ನೂರಾರು ಜನರು ಒಮ್ಮೆಗೇ ಪಂಡಾಲ್ನ ಒಳಗಡೆ ಹೋಗಲು ಕಿರಿದಾದ ಗಲ್ಲಿಯೊಂದಕ್ಕೆ ನುಗ್ಗಿದರು.
ರಸ್ತೆ ಜಾರುತ್ತಿದ್ದರಿಂದ ನಿಯಂತ್ರಣ ತಪ್ಪಿ ಜನರು ಒಬ್ಬರ ಮೇಲೊಬ್ಬರು ಬಿದ್ದರು. ಇದೇ ವೇಳೆ, ಜನದಟ್ಟಣೆಯಿಂದಾಗಿ ಪಂಡಾಲ್ ಕುಸಿಯಬಹುದು ಎಂದು ಆಯೋಜಕರು ಮೈಕ್ನಲ್ಲಿ ಮಾಡಿದ ತಪ್ಪು ಪ್ರಕಟಣೆ ಜನರ ಆತಂಕವನ್ನು ಮತ್ತಷ್ಟು ಹೆಚ್ಚಿಸಿತು. ಇದರಿಂದ ಪರಿಸ್ಥಿತಿ ಕೈಮೀರಿ ಹೋಗುವಂತೆ ಮಾಡಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಈ ನಡುವೆ ಸ್ಥಳೀಯರು ಪೊಲೀಸರ ಲೋಪದೋಷಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನು ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರು ಕಠಿಣ ಕ್ರಮದ ಭರವಸೆ ನೀಡಿದ್ದಾರೆ.
ಗಾಯಾಳುಗಳನ್ನು ದಾಖಲಿಸಿರುವ ಕೋಲ್ಕತ್ತಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಭೇಟಿ ನೀಡಿದ ಅವರು, ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಬಳಿಕ ಮಾತನಾಡಿದ ಅವರು, ಗಾಯಗೊಂಡ 25 ಮಂದಿಯಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿಸಿದರು.
ಉತ್ತರ ಕೋಲ್ಕತ್ತಾದ ಚಿತ್ತರಂಜನ್ ಅವೆನ್ಯೂ ಸಮೀಪದ ಚೋರೆಬಾಗನ್ನಲ್ಲಿ ಸಮುದಾಯದ ವತಿಯಿಂದ ಈ ದುರ್ಗಾ ಪೂಜೆಯನ್ನು ಆಯೋಜಿಸಲಾಗಿದೆ. ಕಾರ್ಯಕ್ರಮದ ವೇಳೆ ಆಯೋಜಕರು ಮಾಡಿದ ಒಂದು ಪ್ರಕಟಣೆಯಿಂದ ಜನರು ಏಕಾಏಕಿ ಮುನ್ನುಗ್ಗಿದ್ದು, ಇದರಿಂದ ಈ ದುರ್ಘಟನೆ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ದುರ್ಗಾ ಪೂಜಾ ಆಯೋಜಕ ಸಂಘದ ಪದಾಧಿಕಾರಿಗಳು, ಖಾಸಗಿ ಭದ್ರತಾ ಸಿಬ್ಬಂದಿ ಹಾಗೂ ಕರ್ತವ್ಯದಲ್ಲಿದ್ದ ಅಧಿಕಾರಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಮೃತಪಟ್ಟವರಲ್ಲಿ ಆರು ಮಂದಿಯನ್ನು ಈವರೆಗೆ ಗುರುತಿಸಲಾಗಿದ್ದು, ಅವರ ಕುಟುಂಬ ಸದಸ್ಯರನ್ನು ಆಸ್ಪತ್ರೆಗೆ ಕರೆತರಲು ವ್ಯವಸ್ಥೆ ಮಾಡಲಾಗುತ್ತಿದೆ. ಘಟನೆ ಕುರಿತು ಸತ್ಯಾಂಶ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಮಳೆ ಆರಂಭವಾಗುತ್ತಿದ್ದಂತೆ ಮಂಟಪದ ಹೊರಗೆ ಕಾಯುತ್ತಿದ್ದ ಜನರು ಒಳಗೆ ಹೋಗಲು ಏಕಾಏಕಿ ಮುನ್ನುಗ್ಗಿದರು. ಈ ವೇಳೆ ಕೆಲವರು ರಸ್ತೆಯ ಮೇಲೆ ಬಿದ್ದಿದ್ದು, ಕಾಲ್ತುಳಿತ ಸಂಭವಿಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ನಡುವೆ ಸೂಕ್ತ ಸುರಕ್ಷತಾ ವ್ಯವಸ್ಥೆಗಳನ್ನು ಕಲ್ಪಿಸುವಲ್ಲಿ ಕೋಲ್ಕತ್ತಾ ಪೊಲೀಸರು ವಿಫಲರಾಗಿದ್ದರಿಂದ ಈ ದುರ್ಘಟನೆ ಸಂಭವಿಸಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ದುರ್ಗಾ ಪೂಜಾ ಮಂಟಪಗಳ ಬಂದ್'ಗೆ ಆದೇಶ
ದುರ್ಘಟನೆಯ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಆಕರ್ಷಿಸುವ ವಿಷಯಾಧಾರಿತ ದುರ್ಗಾ ಪೂಜಾ ಮಂಟಪಗಳನ್ನು ತಾತ್ಕಾಲಿಕವಾಗಿ ಮುಚ್ಚುವಂತೆ ಆಡಳಿತ ಮಂಡಳಿ ಸೂಚಿಸಿದೆ. ಕೋಲ್ಕತ್ತಾದಲ್ಲಿ ದುರ್ಗಾ ಪೂಜೆ ಆಚರಣೆಗಾಗಿ ಸುಮಾರು 3,500 ಮಂಟಪಗಳನ್ನು ನಿರ್ಮಿಸಲಾಗಿದೆ.
ಘಟನೆಗೆ ಸಂಬಂಧಿಸಿದ ಮಾಹಿತಿಗಾಗಿ ಪಶ್ಚಿಮ ಬಂಗಾಳ ಸರ್ಕಾರ ಉಚಿತ ಸಹಾಯವಾಣಿ ಆರಂಭಿಸಿದೆ. ಸಾರ್ವಜನಿಕರು 18003455678 ಸಂಖ್ಯೆಗೆ ಕರೆ ಮಾಡಬಹುದು ಎಂದು ಸರ್ಕಾರ ತಿಳಿಸಿದೆ.
ಪ್ರಧಾನಿ ಮೋದಿ ಸೇರಿ ಗಣ್ಯರ ಸಂತಾಪ: ಪರಿಹಾರ ಘೋಷಣೆ
ಏತನ್ಮಧ್ಯೆ ದುರ್ಘಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಗಣ್ಯರು ದುರ್ಘಟನೆಗೆ ಸಂತಾಪ ಸೂಚಿಸಿದ್ದಾರೆ.
ಕೋಲ್ಕತ್ತಾದ ದುರ್ಗಾ ಪೂಜಾ ಮಂಟಪದಲ್ಲಿ ಸಂಭವಿಸಿದ ಸಾವುಗಳ ಸುದ್ದಿ ಅತ್ಯಂತ ದುಃಖಕರವಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ. ಮೃತರ ಕುಟುಂಬಗಳಿಗೆ ಆಳವಾದ ಸಂತಾಪ ಸೂಚಿಸಿರುವ ಅವರು, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ.
ಪ್ರಧಾನಿ ಮೋದಿ ಅವರು ಪ್ರತಿಕ್ರಿಯಿಸಿ, ಮೃತಪಟ್ಟವರ ಕುಟುಂಬದವರಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಗಾಯಾಳುಗಳಿಗೆ ತಲಾ 50,000 ರೂಪಾಯಿ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಏತನ್ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮುಖ್ಯಮಂತ್ರಿ ಸುವೇಂದು ಅಧಿಕಾರಿಯೊಂದಿಗೆ ಮಾತನಾಡಿದ್ದು, ದುರ್ಘಟನೆಯಲ್ಲಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬಗಳಿಗೆ ದುಃಖ ಸಹಿಸುವ ಶಕ್ತಿ ದೊರೆಯಲಿ ಎಂದು ತಿಳಿಸಿದ್ದಾರೆ.
ಕಾಲ್ತುಳಿತದ ಹಿನ್ನೆಲೆಯಲ್ಲಿ ಭಾನುವಾರ ಪಶ್ಚಿಮ ಬಂಗಾಳದಲ್ಲಿ ನಿಗದಿಯಾಗಿದ್ದ ತಮ್ಮ ಕಾರ್ಯಕ್ರಮಗಳನ್ನು ರದ್ದುಗೊಳಿಸಿರುವ ಅವರು, ಗಾಯಾಳುಗಳನ್ನು ಭೇಟಿಯಾಗಲು ಆಸ್ಪತ್ರೆಗೆ ತೆರಳಲಿದ್ದಾರೆ.
ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಘಟನೆಗೆ ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ ಮತ್ತು ಅವರ ಕುಟುಂಬಗಳಿಗೆ ಈ ಸಂಕಷ್ಟವನ್ನು ಎದುರಿಸುವ ಶಕ್ತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ.
ಪಶ್ಚಿಮ ಬಂಗಾಳದ ರಾಜ್ಯಪಾಲ ಆರ್.ಎನ್. ರವಿ ಕೂಡ ಘಟನೆಗೆ ಸಂತಾಪ ಸೂಚಿಸಿದ್ದು, ಮೃತಪಟ್ಟವರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ. ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.
ತೃಣಮೂಲ ಕಾಂಗ್ರೆಸ್ ನಾಯಕ ಕುನಾಲ್ ಘೋಷ್ ಈ ಘಟನೆಯನ್ನು ದುರದೃಷ್ಟಕರ ಎಂದು ಕರೆದಿದ್ದಾರೆ. ಗಾಯಾಳುಗಳಿಗೆ ತಕ್ಷಣ ವೈದ್ಯಕೀಯ ನೆರವು ಒದಗಿಸುವಂತೆ ಪೊಲೀಸ್ ಆಡಳಿತವನ್ನು ಒತ್ತಾಯಿಸಿರುವ ಅವರು, ಆಸ್ಪತ್ರೆಗೆ ಹೆಚ್ಚುವರಿ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಯನ್ನು ನಿಯೋಜಿಸುವಂತೆ ಆಗ್ರಹಿಸಿದ್ದಾರೆ.
ಘಟನೆಯ ಕಾರಣ ಪತ್ತೆಹಚ್ಚುವ ಕೆಲಸ ನಂತರವೂ ಮಾಡಬಹುದು; ಸದ್ಯ ಗಂಭೀರವಾಗಿ ಗಾಯಗೊಂಡವರ ಜೀವ ಉಳಿಸಿ ಸೂಕ್ತ ಚಿಕಿತ್ಸೆ ನೀಡುವುದು ಮೊದಲ ಆದ್ಯತೆಯಾಗಬೇಕು ಎಂದು ಹೇಳಿದ್ದಾರೆ.