

ನವದೆಹಲಿ: ಗೋವಾದಿಂದ ದೆಹಲಿಗೆ ಹೋಗುತ್ತಿದ್ದ ಇಂಡಿಗೋ ವಿಮಾನದ ಒಂದು ಎಂಜಿನ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ದಿಢೀರ್ ಆಫ್ ಆಗಿದ್ದು, ತಕ್ಷಣ ಎಚ್ಚೆತ್ತುಕೊಂಡ ಪೈಲೆಟ್ ಗೋವಾ ವಿಮಾನ ನಿಲ್ದಾಣದಲ್ಲಿಯೇ ತುರ್ತು ಭೂಸ್ಪರ್ಶ ಮಾಡಿದ ಘಟನೆ ಮಂಗಳವಾರ ನಡೆದಿದೆ.
ಇಂದು ಬೆಳಗ್ಗೆ ಗೋವಾದ ಮನೋಹರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕಾಫ್ ಆದ ಇಂಡಿಗೋ ವಿಮಾನ 6E 2102, ಕೆಲವೇ ಕ್ಷಣಗಳಲ್ಲಿ ಗೋವಾಗೆ ವಾಪಸ್ ಆಗಿದ್ದು, ಸುರಕ್ಷಿತವಾಗಿ ತುರ್ತು ಲ್ಯಾಂಡಿಂಗ್ ಮಾಡಿದೆ. ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಯಿತು ಎಂದು ಮೂಲಗಳು ತಿಳಿಸಿವೆ.
ಇಂಡಿಗೋ ವಿಮಾನ ಬೆಳಗ್ಗೆ 9:16ಕ್ಕೆ ಗೋವಾದಿಂದ ದೆಹಲಿಗೆ ಹೊರಟಿತ್ತು. ಆದರೆ ಟೇಕಾಫ್ ಆದ ಸ್ವಲ್ಪ ಸಮಯದ ನಂತರ, ವಿಮಾನದ ಎಂಜಿನ್‌ಗಳಲ್ಲಿ ಒಂದರಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದು, ಸಿಬ್ಬಂದಿ ತಕ್ಷಣ ಗೋವಾಗೆ ಯೂಟರ್ನ್ ತೆಗೆದುಕೊಂಡಿದ್ದಾರೆ. ಇದರಿಂದ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ.
`ಸೆಪ್ಟೆಂಬರ್ 1ರಂದು ಉತ್ತರ ಗೋವಾದಿಂದ ದೆಹಲಿಗೆ ತೆರಳುತ್ತಿದ್ದ 6E 2102 ವಿಮಾನದಲ್ಲಿ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ತಕ್ಷಣವೇ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ಬಂದಿದೆ. ಬಳಿಕ ಪೈಲಟ್‌ಗಳು ವಿಮಾನವನ್ನ ಹಿಂದಕ್ಕೆ ತಿರುಗಿಸಿ ಮನೋಹರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಮಾಡಿದ್ದಾರೆ ಎಂದು ಇಂಡಿಗೋ ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಸ್ತುತ ವಿಮಾನವು ನಿರ್ವಹಣಾ ತಪಾಸಣೆಗೆ ಒಳಪಡಿಸಲಾಗಿದೆ. ಅಗತ್ಯವಿರುವ ಎಲ್ಲಾ ಅನುಮತಿಗಳನ್ನ ಪಡೆದ ಬಳಿಕ ವಿಮಾನ ಮತ್ತೆ ಕಾರ್ಯಾಚರಣೆ ಆರಂಭಿಸಲಿದೆ ಎಂದು ಇಂಡಿಗೋ ತಿಳಿಸಿದೆ.
ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗೆ ವಿಷಾದ ವ್ಯಕ್ತಪಡಿಸಿರುವ ವಿಮಾನಯಾನ ಸಂಸ್ಥೆ, ಪ್ರಯಾಣಿಕರಿಗೆ ಉಪಾಹಾರ ಸೇರಿದಂತೆ ಅಗತ್ಯ ನೆರವು ಒದಗಿಸಲಾಗಿದೆ ಮತ್ತು ಸಮಯೋಚಿತ ಮಾಹಿತಿಯನ್ನು ನೀಡಲಾಗಿದೆ. ಪ್ರಯಾಣಿಕರು ತಮ್ಮ ನಿಗದಿತ ಸ್ಥಾನ ತಲುಪಲು ಪರ್ಯಾಯ ವ್ಯವಸ್ಥೆಯನ್ನೂ ಮಾಡಲಾಗಿದೆ ಎಂದು ತಿಳಿಸಿದೆ.