ರಾಜಕೀಯ

ಬಜೆಟ್ ಮಂಡನೆಗೆ ಅಡ್ಡಿಪಡಿಸಲ್ಲ

ಬಜೆಟ್ ಮಂಡನೆಗೆ ಅಡ್ಡಿಪಡಿಸಲ್ಲ
Published On :

ಬೆಂಗಳೂರು:  ಬಿಜೆಪಿ ಸರ್ಕಾರ ಮತ್ತು ಮುಖ್ಯಮಂತ್ರಿಯವರ ವಿರುದ್ಧ ಕಿಡಿ ಕಾರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಣ್ಣಗಾಗಿದ್ದು, ಜಗದೀಶ್ ಶೆಟ್ಟರ್ ಬಜೆಟ್ ಮಂಡಿಸಲು ಅಡ್ಡಿಪಡಿಸುವುದಿಲ್ಲ ಎಂದು ಹೇಳಿದ್ದಾರೆ.
ಬಹುಮತ ಕಳೆದುಕೊಂಡಿರುವ ಮುಖ್ಯಮಂತ್ರಿಗಳು ಯಾವುದೇ ಕಾರಣಕ್ಕೂ ಬಜೆಟ್ ಮಂಡಿಸಬಾರದು ಎಂದು ಹೇಳುತ್ತಿದ್ದ ಯಡಿಯೂರಪ್ಪ ಅವರು ಇದೀಗ ತಮ್ಮ ಮಾತಿನ ವರಸೆ ಬದಲಿಸಿರುವುದು ಅಚ್ಚರಿಗೆ ಕಾರಣವಾಗಿದೆ.
ಸೋಮವಾರ ಮಾಜಿ ಸಚಿವ ಸಿ.ಎಂ. ಉದಾಸಿ ಅವರ ನಿವಾಸದಲ್ಲಿ ತಮ್ಮ ಬೆಂಬಲಿಗ ಶಾಸಕರೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ ಅವರು, ಸರ್ಕಾರ ಬೀಳಿಸುವ ಉದ್ದೇಶ ನಮಗಿಲ್ಲ. ಶೆಟ್ಟರ್ ಅವರು ಬಜೆಟ್ ಮಂಡಿಸಲಿ. ಅದಕ್ಕೆ ಅಡ್ಡಿಪಡಿಸುದಿಲ್ಲ ಎಂದು ಸ್ಪಷ್ಟಪಡಿಸಿದರು.
ಕೆಜೆಪಿ ಬಲಪಡಿಸಲು, ಸಂಘಟನೆ ಇನ್ನಷ್ಟು ಚುರುಕುಗೊಳಿಸಲು ಬೆಂಬಲಿಗರ ಅವಶ್ಯಕತೆ ಇದೆ. ಹೀಗಾಗಿ ಬಿಜೆಪಿಯಿಂದ ಆಯ್ಕೆಯಾಗಿರುವ ಅವರು ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿ ತಮ್ಮೊಂದಿಗೆ ಬರುತ್ತಿದ್ದಾರೆ. ಇದರ ಹಿಂದೆ ಸರ್ಕಾರ ಕೆಡಹುವ ಉದ್ದೇಶ ಇಲ್ಲ ಎಂದರು.
ಮಂಗಳವಾರ ಬೆಳಗ್ಗೆ ತಮ್ಮ ಬೆಂಬಲಿಗ ಶಾಸಕರು ಸ್ಪೀಕರ್ ಅವರನ್ನು ಭೇಟಿಯಾಗಿ ರಾಜಿನಾಮೆ ಸಲ್ಲಿಸಲಿದ್ದಾರೆ. ಈ ರಾಜಿನಾಮೆ ಅಂಗೀಕರಿಸುವುದು ಅಥವಾ ತಿರಸ್ಕರಿಸುವುದು ಸ್ಪೀಕರ್ ಅವರಿಗೆ ಬಿಟ್ಟ ವಿಚಾರ. ರಾಜಿನಾಮೆಗೆ ಮುಂದಾಗಿರುವ 12 ಶಾಸಕರನ್ನು ಅನರ್ಹಗೊಳಿಸುವಂತೆ ಇಬ್ಬರು ಶಾಸಕರು ವಿಧಾನಸಭೆ ಕಾರ್ಯದರ್ಶಿಗಳಿಗೆ ದೂರು ನೀಡಿದ ಬಗ್ಗೆ ಕೇಳಿದ ಪ್ರಶ್ನೆಗೆ, ರಾಜಕೀಯ ಎಂದಮೇಲೆ ತಂತ್ರ, ಪ್ರತಿತಂತ್ರ ಸಹಜ. ಶಾಸಕರನ್ನು ಅನರ್ಹಗೊಳಿಸಬೇಕು ಎಂಬುದು ದೂರು ನೀಡಿದವರ ಅಭಿಪ್ರಾಯವಷ್ಟೇ ಎಂದರು.
ಮಠಾಧೀಶರು ಭಾನುವಾರ ಸಿಎಂ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದರಲ್ಲಿ ವಿಶೇಷ ಅರ್ಥವೇನೂ ಇಲ್ಲ. ನಾನು ಸಿಎಂ ಆಗಿದ್ದ ಸಂದರ್ಭದಲ್ಲೂ ಶ್ರೀಗಳಿಂದ ಸಲಹೆ, ಆಶೀರ್ವಾದ ಪಡೆಯುತ್ತಿದ್ದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.