ಬಿಜೆಪಿ, ಜೆಡಿಎಸ್ ಮೈತ್ರಿಗೆ ದೇವೇಗೌಡ ಪರೋಕ್ಷ ಕಾರಣ
ಕ.ಪ್ರ. ವಾರ್ತೆ ಶಿಡ್ಲಘಟ್ಟ ಮಾ. 2
ಕಾಂಗ್ರೆಸ್ ಬೆಂಬಲದೊಂದಿಗೆ ಪ್ರಧಾನಮಂತ್ರಿ ಪಟ್ಟ ಅಲಂಕರಿಸಿದ ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡರು ಅದನ್ನು ಮರೆತು ಪುತ್ರ ವಾತ್ಸಲ್ಯದಿಂದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿರವರನ್ನು ಮುಖ್ಯಮಂತ್ರಿ ಮಾಡಲು ರಾತ್ರೋರಾತ್ರಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲು ಪರೋಕ್ಷವಾಗಿ ಸಹಕರಿಸಿರುವುದನ್ನು ಅಲ್ಪಸಂಖ್ಯಾತರು ಮರೆಯಬಾರದೆಂದು ಕೇಂದ್ರ ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದರು.
ಕಾಂಗ್ರೆಸ್ ಭವನದಲ್ಲಿ ಪುರಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಚುನಾವಣಾ ಪ್ರಚಾರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ ಜಾತ್ಯತೀತ ಪಕ್ಷವೆಂದು ಹೇಳಿಕೊಳ್ಳುವ ಜೆಡಿಎಸ್ ಬೆಂಬಲದಿಂದ ಕೋಮುವಾದಿ ಬಿಜೆಪಿ ದಕ್ಷಿಣ ಭಾರತದಲ್ಲಿ ಅಧಿಕಾರಕ್ಕೆ ಬಂದಿದೆ ಎಂದು ವಾಗ್ದಾಳಿ ನಡೆಸಿದರು.
ಪ್ರಸ್ತುತ ಕೇಂದ್ರದ ಯುಪಿಎ ಸರ್ಕಾರದಲ್ಲಿ ರಕ್ಷಣಾ ಸಚಿವರಾಗಿರುವ ಆಂಟೋನಿ ಅವರ ಮೂಲಕ ಅಂದಿನ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡಲು ಕಾಂಗ್ರೆಸ್ ಸಿದ್ಧವಾಗಿತ್ತು. ಆದರೂ ಅವರೇ ಕೋಮುವಾದಿ ಬಿಜೆಪಿ ಸಖ್ಯ ಬೆಳೆಸಿದರು. ಅದರಿಂದ ಕೇವಲ 20-30 ಸ್ಥಾನಗಳಲ್ಲಿ ಗೆಲುವು ಸಾಧಿಸುತ್ತಿದ್ದ ಬಿಜೆಪಿ ಬಲಿಷ್ಟವಾಯಿತು. ಇದೇ ಜೆಡಿಎಸ್ ಸಾಧನೆ ಎಂದು ಸಚಿವರು ಲೇವಡಿ ಮಾಡಿದರು. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಚರ್ಚ್ ಹಾಗೂ ಮಸೀದಿಗಳ ಮೇಲೆ ದಾಳಿ ನಡೆಯಿತು. ಜಾತಿಯ ವಿಷ ಬೀಜವನ್ನು ಬಿತ್ತಿ ಅಲ್ಪಸಂಖ್ಯಾತರಲ್ಲಿ ಭಯದ ವಾತಾವರಣ ಸೃಷ್ಟಿಸಿದರು ಎಂದು ಆರೋಪಿಸಿದ ಅವರು, ಸಮಾಜದ ಎಲ್ಲಾ ವರ್ಗಗಳು ಮತ್ತು ಧರ್ಮದವರು ಅನ್ಯೋನ್ಯವಾಗಿ ಜೀವನ ನಡೆಸುತ್ತಿದ್ದು, ಅದನ್ನು ಬೇರ್ಪಡಿಸಲು ಯಾರಿಂದಲೂ ಸಾಧ್ಯವಿಲ್ಲವೆಂದು ಬಿಜೆಪಿ ವಿರುದ್ಧ ಹರಿಹಾಯ್ದರು.
ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಹಾಗೂ ವಿಧಾನ ಪರಿಷತ್ತಿನ ಸದಸ್ಯ ನಸೀರ್ ಅಹಮದ್ ಮಾತನಾಡಿ, ರಾಜ್ಯದ 60 ವರ್ಷಗಳ ರಾಜಕೀಯ ಇತಿಹಾಸದಲ್ಲಿ ಬಿಜೆಪಿ ಸರ್ಕಾರದ ಮುಖ್ಯಮಂತ್ರಿಗಳು ಹಾಗೂ ಮಂತ್ರಿಗಳು ಜೈಲಿಗೆ ಹೋಗಿದ್ದು ಇಡೀ ರಾಜ್ಯದ ಜನರು ತಲೆ ತಗ್ಗಿಸುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

