ನವದೆಹಲಿ: ನೈತಿಕ ಪೊಲೀಸ್‌ಗಿರಿಗೆ ಅವಕಾಶ ನೀಡುವುದಿಲ್ಲ ಎಂದು ನೂತನ ಗೃಹ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಅಂಥ ಸಾಹಸಕ್ಕೆ ಕೈಹಾಕುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ. ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಾರ್ಜ್, 'ಪೊಲೀಸ್ ಇಲಾಖೆ ಸುಧಾರಣೆಗೆ ಹೆಚ್ಚಿನ ಒತ್ತು ನೀಡಲಾಗುವುದು. ಪೊಲೀಸರಿಗೆ ಹೆಚ್ಚಿನ ಸೌಲಭ್ಯ ನೀಡಿ ಮತ್ತು ತಂತ್ರಜ್ಞಾನ ಬಳಕೆ ಹೆಚ್ಚಿಸುವುದಕ್ಕೆ ಆದ್ಯತೆ ನೀಡಲಾಗುವುದು ಎಂದರು. ಪೊಲೀಸ್ ಅಧಿಕಾರಿಗಳ ವರ್ಗಾವಣೆಯನ್ನು ಪೊಲೀಸ್ ಎಸ್ಟಾಬ್ಲಿಷ್‌ಮೆಂಟ್ ಬೋರ್ಡ್ ಮೂಲಕ ಪಾರದರ್ಶಕವಾಗಿ ಮಾಡಲಾಗುತ್ತದೆ. ವರ್ಗಾವಣೆಯಲ್ಲಿ ರಾಜಕೀಯ ಹಸ್ತಕ್ಷೇಪ ಇರುವುದಿಲ್ಲ ಎಂದರು. ರಾಜ್ಯದಲ್ಲಿ ಮಹಿಳಾ ಪೊಲೀಸರ ಸಂಖ್ಯೆ ಶೇ.6ರಷ್ಟಿದೆ. ಈ ಪ್ರಮಾಣವನ್ನು ಶೇ.20ಕ್ಕೆ ಹೆಚ್ಚಿಸಬೇಕು. ಈ ನಿಟ್ಟಿನಲ್ಲಿ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಲಿದೆ. ಸುಮಾರು 8000 ಪೊಲೀಸ್ ಹುದ್ದೆಗಳು ಖಾಲಿ ಇವೆ. ಭರ್ತಿ ಮಾಡುವಾಗ ಮಹಿಳೆಯರಿಗೆ ಆದ್ಯತೆ ನೀಡಲಾಗುತ್ತದೆ ಎಂದರು.
ಇನ್ಸ್‌ಪೆಕ್ಟರ್ ಅಮಾನತಿಗೆ ನಾವು ಆದೇಶ ನೀಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ರಾಕೇಶ್ ವಿರುದ್ಧ ಪ್ರಕರಣ ದಾಖಲಿಸಿದ ಇನ್ಸ್‌ಪೆಕ್ಟರ್ ಅಮಾನತು ಕುರಿತು ಹೆಚ್ಚಿನ ಮಾಹಿತಿ ಪಡೆಯಲಾಗುತ್ತಿದೆ. ಈ ಕುರಿತು ಮಾಹಿತಿ ನೀಡಬೇಕಾದ ಮೈಸೂರು ಪೊಲೀಸ್ ಆಯುಕ್ತರು ರಜೆ ಮೇಲೆ ತೆರಳಿದ್ದಾರೆ. ಇನ್ಸ್‌ಪೆಕ್ಟರ್ ಅಮಾನತಿಗೆ ಮುಖ್ಯಮಂತ್ರಿಗಳಾಗಲಿ ಅಥವಾ ನಾನಾಗಲಿ ಆದೇಶ ನೀಡಿಲ್ಲ ಎಂದು ಸ್ಪಷ್ಟ ಪಡಿಸಿದರು.