

ಶಿವಮೊಗ್ಗ: ನನ್ನ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ನಡುವೆ ಯಾವುದೇ ಮನಸ್ತಾಪ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಬುಧವಾರ ಹೇಳಿದ್ದಾರೆ.
ರೈತರ ಆತ್ಮಹತ್ಯೆ ಸಂಬಂಧ ಬಿಜೆಪಿ ಮುಖಂಡರ ಹೋರಾಟದ ಬಗ್ಗೆ ವರದಿಗಾರರಿಗೆ ಪ್ರತಿಕ್ರಿಯಿಸಿದ ಬಿಎಸ್‌ವೈ, ಬಿಜೆಪಿ ಸದನದ ಒಳಗೆ ಮತ್ತು ಹೊರಗೆ ಶಕ್ತಿ ಮೀರಿ ಹೋರಾಟ ನಡೆಸುತ್ತಿದೆ ಎಂದರು.
ಇನ್ನು ರೈತರ ಮನೆಗೆ ಭೇಟಿ ನೀಡುವ ಬಿಜೆಪಿ ನಾಯಕರ ತಂಡದಿಂದ ತಮ್ಮನ್ನು ಕೈಬಿಟ್ಟಿರುವ ಬಗ್ಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ನಾನು ಲೋಕಸಭೆ ಅಧಿವೇಶನದಲ್ಲಿ ಭಾಗವಹಿಸುತ್ತಿರುವ ಹಿನ್ನೆಲೆಯಲ್ಲಿ ತಂಡದಲ್ಲಿ ನಾನಿಲ್ಲ ಎಂದರು.
ಈಗಾಗಲೇ ನಾನು ಆತ್ಮಹತ್ಯೆ ಮಾಡಿಕೊಂಡ ರೈತರ ಮನೆಗಳಿಗೆ ಭೇಟಿ ನೀಡುತ್ತಿದ್ದೇನೆ. ಮಂಡ್ಯ ಜಿಲ್ಲೆಗೆ ಭೇಟಿ ನೀಡದ್ದೇನೆ. ಇಂದೂ ಸಹ ನಾನು ದಾವಣೆಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಗ್ರಾಮದ ರೈತನ ಮನೆಗೆ ಭೇಟಿ ನೀಡುತ್ತಿದ್ದೇನೆ ಎಂದು ಯಡಿಯೂರಪ್ಪ ಹೇಳಿದರು.