ರಾಜಕೀಯ

ಒಂದಂಕಿ ಲಾಟರಿ ಹಗರಣದಲ್ಲಿ ಸಿಎಂ ಸಿದ್ದು ನೇರ ಕೈವಾಡ: ಬಿಎಸ್ ವೈ ಆರೋಪ

ಒಂದಂಕಿ ಲಾಟರಿ ಹಗರಣದಲ್ಲಿ ಸಿಎಂ ಸಿದ್ದು ನೇರ ಕೈವಾಡ: ಬಿಎಸ್ ವೈ ಆರೋಪ
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ
Published On :

ಮೈಸೂರು: ತೀವ್ರ ವಿವಾದಕ್ಕೆ ಕಾರಣವಾಗಿರುವ ಒಂದಂಕಿ ಲಾಟರಿ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಕೆಜೆ ಜಾರ್ಜ್ ಅವರ ನೇರ ಕೈವಾಡವಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಆರೋಪಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ನಡೆದಿರುವ ಒಂದಂಕಿ ಲಾಟರಿ, ಮಟ್ಕಾ, ಕ್ರಿಕೆಟ್ ಬೆಟ್ಟಿಂಗ್ ಸೇರಿದಂತೆ ಹಲವಾರು ದಂಧೆಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವರ ನೇರ ಸಹಭಾಗಿತ್ವ ಇದೆ ಆರೋಪಿಸಿದ್ದಾರೆ. "ರಾಜ್ಯದಲ್ಲಿ ನಡೆದಿರುವ ವಿವಿಧ ಹಗರಣಗಳ ಬಗ್ಗೆ ಪ್ರತಿಪಕ್ಷಗಳು ತೀವ್ರ ಹೋರಾಟ ಮಾಡುತ್ತಿದ್ದರೂ ಸಿದ್ದರಾಮಯ್ಯ ಅವರು ಭಂಡತನದಿಂದ ಕುರ್ಚಿಗೆ ಅಂಟಿಕೊಂಡು ಕುಳಿತಿದ್ದಾರೆ. ಇವರ ಆಡಳಿತಾವಧಿಯಲ್ಲಿ ಕೆಪಿಎಸ್‌ಸಿ, ಅರ್ಕಾವತಿ ಬಡಾವಣೆ ಹಾಗೂ ಡಿ.ಕೆ.ರವಿ ಸಾವಿನ ಪ್ರಕರಣ ಸೇರಿದಂತೆ ಹಲವಾರು ಗಂಭೀರ ಪ್ರಕರಣಗಳು ನಡೆದಿವೆ. ರಾಜ್ಯದಲ್ಲಿ ಇಷ್ಟೆಲ್ಲಾ ಹಗರಣಗಳು ನಡೆದಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಚ್ಚು ದಿನ ಅಧಿಕಾರದಲ್ಲಿ ಮುಂದುವರಿಯುವುದಿಲ್ಲ" ಎಂದು ಅಭಿಪ್ರಾಯಪಟ್ಟರು.

ಇದೇ ವೇಳೆ ತಮ್ಮ ಅಧಿಕಾರಾವಧಿಯಲ್ಲಿನ ಯೋಜನೆಗಳನ್ನು ಪ್ರಸ್ತಾಪಿಸಿದ ಅವರು, ತಮ್ಮ ಸರ್ಕಾರದ 2 ವರ್ಷದ ಅವಧಿಯಲ್ಲಿ 6 ಲಕ್ಷ ರೂ. ಭಾಗ್ಯಲಕ್ಷ್ಮಿ ಬಾಂಡ್ ಗಳನ್ನು ಬಿಡುಗಡೆ ಮಾಡಿದ್ದೆವು. ಸಿದ್ದರಾಮಯ್ಯ ಅವರ 2 ವರ್ಷದ ಅಧಿಕಾರಾವಧಿಯಲ್ಲಿ 2 ಲಕ್ಷ ಬಾಂಡ್‌ಗಳನ್ನೂ ಕೊಟ್ಟಿಲ್ಲ. ತಮ್ಮದೇ ತವರು ಜಿಲ್ಲೆಯಾದ ಇದೇ ಮೈಸೂರಿನಲ್ಲಿ ಅವರು ಅದಾವ ಅಭಿವೃದ್ಧಿ ಮಾಡಿದ್ದಾರೆ? ಎಂದು ಟೀಕಿಸಿದರು.

ಅಲ್ಲದೆ ರಾಜ್ಯದ ಅಭಿವೃದ್ಧಿ ಕಡೆ ಗಮನ ಹರಿಸದೆ ಕೇವಲ ಉಡಾಫೆ ಮಾತುಗಳಲ್ಲೇ ಕಾಲ ಕಳೆಯುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಾಜಮುಖಿ ಕೆಲಸಕ್ಕೆ ಮುಂದಾಗಬೇಕು ಎಂದು ಯಡಿಯೂರಪ್ಪ ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.