

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಬಡವರ ಮನೆ ಒಡೆಯುವ `ಬುಲ್ಡೋಜರ್ ಸರ್ಕಾರ'ಎಂದು ಬಿಜೆಪಿ ಹಿರಿಯ ಮುಖಂಡ ಹಾಗೂ ಮಾಜಿ
ಡಿಸಿಎಂ ಆರ್.ಅಶೋಕ್ ಟೀಕಿಸಿದ್ದಾರೆ. ರಾಜ್ಯ ಸರ್ಕಾರ ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಅದರ ವೈಫಲ್ಯಗಳ ಪಟ್ಟಿಯ ಪುಸ್ತಕ ಬಿಡುಗಡೆಗೊಳಿಸಿದ ನಂತರ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒತ್ತುವರಿ ತೆರವು ವಿಚಾರ ಪ್ರಸ್ತಾಪಿಸಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಬಿಜೆಪಿ ಈಗಾಗಲೇ ತನ್ನ ನಿಲುವು ಸ್ಪಷ್ಟ
ಪಡಿಸಿರುವ ಹಾಗೆ, ಒತ್ತುವರಿ ತೆರವು ಕಾರ್ಯಾಚರಣೆಗೆ ತಮ್ಮ ವಿರೋಧವಿಲ್ಲ ಎಂದರು.
ಜನತೆಯ ದೌರ್ಭಾಗ್ಯ
ಅನ್ನ ಭಾಗ್ಯ, ಕ್ಷೀರ ಭಾಗ್ಯ, ಶಾದಿ ಭಾಗ್ಯಗಳ ಮೂಲಕ ಸರ್ಕಾರವು ರಾಜ್ಯದ ಜನತೆಗೆ ದೌರ್ಭಾಗ್ಯ ತಂದಿಟ್ಟಿದೆ. ನೀರಾವರಿ ಕ್ಷೇತ್ರವನ್ನು ಸಂಪೂರ್ಣವಾಗಿ ಕಡೆಗಣಿಸಿದೆ. ಕೃಷ್ಣಾ ಮೇಲ್ದಂಡೆ ಯೋಜನೆಗೆ ರು. 10 ಸಾವಿರ ಕೋಟಿ ನೀಡುವುದಾಗಿ ಆಣೆ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ತಾವು ನೀಡಿದ್ದ ಭರವಸೆಯನ್ನೆ ಹುಸಿಗೊಳಿಸಿ ಉತ್ತರ ಕರ್ನಾಟಕವನ್ನು ಕಡೆಗಣಿಸಿದ್ದಾರೆ. ಇದನ್ನು ಅವರ ಪಕ್ಷದ ಶಾಸಕರೇ ಹೇಳುತ್ತಿದ್ದಾರೆಂದು ತಿಳಿಸಿದರು.
ರಾಜ್ಯ ಸರ್ಕಾರಕ್ಕೆ ಮಾನ, ಮರ್ಯಾದೆ ಇಲ್ಲ ಎಂದು ವಿಧಾನಸಭಾಧ್ಯಕ್ಷರೇ ಹೇಳಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳು ಒತ್ತಾಯಿಸುವ ಮುನ್ನವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾನ, ಮರ್ಯಾದೆ ಇದ್ದರೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಕಿವಿಮಾತು ಹೇಳಿದರು.